ಕರ್ನಾಟಕದಲ್ಲಿ ಏ 26, ಮೇ 7ರಂದು ವೇತನ ಸಹಿತ ರಜೆ
ಬೆಂಗಳೂರು, ಮಾರ್ಚ್ 26: ಲೋಕಸಭೆ ಚುನಾವಣೆ 2024 ವೇಳಾಪಟ್ಟಿ ಮತ್ತು ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಕರ್ನಾಟಕದಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆ ಈಗಾಗಲೇ ಜಾರಿಗೆ ಬಂದಿದೆ.
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಮತದಾನಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ವೇತನ ಸಹಿತ ರಜೆ ಘೋಷಣೆ: ಲೋಕಸಭೆ ಚುನಾವಣೆ ಮತ್ತು ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯುಲ್ಲಿ ಮತದಾನ ಮಾಡಲು ಅನುಕೂಲವಾಗುವಂತೆ ಎಲ್ಲ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು ಎಂದು ಕೇಂದ್ರ ಚುನಾವಣಾ ಆಯೋಗ ಸೂಚನೆ ಕೊಟ್ಟಿದೆ.
ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮತ್ತು ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ ಏಪ್ರಿಲ್ 26ರಂದು ನಡೆಯಲಿದೆ. ಮತದಾನದ ದಿನ ಕಾರ್ಮಿಕರಿಗೆ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು)ಕಾಯ್ದೆಯ ಕಲಂ 3-ಎ ಹಾಗೂ 1951ರ ಪ್ರಜಾ ಪ್ರತಿನಿಧಿ ಕಾಯ್ದೆಯ ಕಲಂ.135(ಬಿ) ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲ ಸಂಸ್ಥೆಗಳು/ ನಿಯೋಜಕರು ಅನುಕೂಲ ಮಾಡಿ ಕೊಡಬೇಕು ಎಂದು ಆಯೋಗ ನಿರ್ದೇಶನ ನೀಡಿದೆ.
ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಮತ ಚಲಾಯಿಸುವ ಅರ್ಹ ಕಾರ್ಮಿಕರು ಮತದಾನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡಬೇಕು. ಈ ಆದೇಶ ಉಲ್ಲಂಘನೆ ಮಾಡಿದರೆ ಸಂಬಂಧಪಟ್ಟ ಸಂಸ್ಥೆ/ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಎರಡು ಹಂತದಲ್ಲಿ ಮತದಾನ: ಏಪ್ರಿಲ್ 26ರಂದು 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮಾರ್ಚ್ 28ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 4 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಏಪ್ರಿಲ್ 5ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 8 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ.
ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಸೆಂಟ್ರಲ್, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
2ನೇ ಹಂತದಲ್ಲಿ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 2ನೇ ಹಂತದ ಚುನಾವಣೆಗೆ ಏಪ್ರಿಲ್ 12ರಂದು ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 19 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಏಪ್ರಿಲ್ 20 ನಾಮಪತ್ರಗಳ ಪರಿಶೀಲನೆ, ಏಪ್ರಿಲ್ 22 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.
2ನೇ ಹಂತದಲ್ಲಿ ಮೇ 7ರಂದು ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾನ ನಡೆಯಲಿದೆ.
ಉಪ ಚುನಾವಣೆ: ಲೋಕಸಭೆ ಚುನಾವಣೆಯ ಜೊತೆಗೆ ಏಪ್ರಿಲ್ 26ರಂದು ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಸುರಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ರಾಜಾ ವೆಂಕಟಪ್ಪ ನಾಯಕ ಜಯಗಳಿಸಿದ್ದರು. ಆದರೆ ಫೆಬ್ರವರಿ 26ರಂದು ಅವರು ನಿಧನ ಹೊಂದಿದ ಕಾರಣ ಈಗ ಉಪ ಚುನಾವಣೆ ಎದುರಾಗಿದೆ.












Click it and Unblock the Notifications