ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್‌ಗೆ ಭಾರೀ ಡಿಮ್ಯಾಂಡ್; ಸಿದ್ದರಾಮಯ್ಯ ಪುತ್ರನಿಗೆ ಕೈ ತಪ್ಪುತ್ತಾ ಟಿಕೆಟ್?
ಮೈಸೂರು, ನವೆಂಬರ್ 13: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಕಂಡ ಕಾಂಗ್ರೆಸ್, ಇದೀಗ 2024 ರ ಲೋಕಸಭಾ ಚುನಾವಣೆಗಾಗಿ ಕೈ ಪಡೆ ಭರ್ಜರಿಯಾಗಿ ಸಿದ್ದತೆ ನಡೆಸಿದೆ. ಈ ಬಾರೀ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳನ್ನ ಗೆಲ್ಲಬೇಕು ಎಂದು ಹೈಕಮಾಂಡ್ ಟಾರ್ಗೆಟ್ ನೀಡಿದ್ದು, ಕೈ ಪಾಳಯ ನಾಯಕರು ಫುಲ್ ಆಕ್ಟೀವ್ ಆಗಿದ್ದಾರೆ.
ಹೌದು, ಈಗಾಗಲೇ 28 ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನ ನೇಮಕ ಮಾಡಲಾಗಿದ್ದು, ಒಂದೊಂದು ಕ್ಷೇತ್ರದಿಂದ ಸೂಕ್ತ ಮೂರ್ನಾಲ್ಕು ಅಭ್ಯರ್ಥಿಗಳ ಹೆಸರುಗಳನ್ನು ನೀಡುವಂತೆ ಸೂಚಿಸಲಾಗಿದೆ. ಕಾಂಗ್ರೆಸ್ ನಲ್ಲಿ ಈಗಾಗಲೇ ಸಂಭವ್ಯ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾಗ ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಭಾರೀ ಡಿಮ್ಯಾಂಡ್ ಶುರುವಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ತಂದೆಗಾಗಿ ವರುಣಾ ಕ್ಷೇತ್ರವನ್ನ ತ್ಯಾಗ ಮಾಡಿದ್ದ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಅಲ್ಲದೇ ಕಾಂಗ್ರೆಸ್ ನಾಯಕಿ ಪ್ರಿಯಾಂಕ್ ಗಾಂಧಿಯವರು ಸಹ ಕರ್ನಾಟಕದ ಮೈಸೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು.
ಒಂದು ವೇಳೆ ಪ್ರಿಯಾಂಕ್ ಗಾಂಧಿ ಕರ್ನಾಟಕದ ಮೈಸೂರು ಕ್ಷೇತ್ರದಿಂದ ಸ್ಪರ್ಧಿಸುವ ಮನಸ್ಸು ಮಾಡಿದ್ರೆ ಆ ಕ್ಷೇತ್ರವನ್ನ ಬಿಟ್ಟು ಕೊಡಲು ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ಕ್ಷೇತ್ರ ತ್ಯಾಗಕ್ಕೂ ಸಹ ಸಿದ್ದರಾಗಿದ್ರು. ಆದರೆ, ಪ್ರಿಯಾಂಕ್ ಗಾಂಧಿ ಸ್ಪರ್ಧಿಸುವ ಕುರಿತು ಯಾವುದೇ ಚರ್ಚೆ ಇಲ್ಲದ ಕಾರಣ ಇದೀಗ ಹಲವು ಜನ ಟಿಕೆಟ್ ಆಕಾಂಕ್ಷಿಗಳು ಭಾರೀ ಲಾಭಿಯನ್ನ ನಡೆಸಿದ್ದಾರೆ.
ಈಗಾಗಲೇ ಕಾಂಗ್ರೆಸ್ ಲೋಕಸಭಾ ಚುನಾವಣೆ ಹಿನ್ನಲೆ ವೀಕ್ಷಕರನ್ನ ನೇಮಕ ಮಾಡಿದ್ದು, ಯಾರು ಅಭ್ಯರ್ಥಿಯಾಬೇಕು ಎಂಬ ಬಗ್ಗೆ ಹಲವು ಲೆಕ್ಕಾಚಾರಗಳನ್ನ ನಡೆಸಿದ್ದಾರೆ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ವೀಕ್ಷಕ, ಸಚಿವ ಬೈರತಿ ಸುರೇಶ್ ಬಳಿ ಟಿಕೆಟ್ ಆಕಾಂಕ್ಷಿಗಳು ತಮ್ಮ ಹೆಸರು ನೊಂದಾಯಿಸಿದ್ದಾರೆ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ಗೆ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು, ಬರೋಬ್ಬರಿ 14 ಜನರಿಂದ ಟಿಕೆಟ್ ಗಾಗಿ ಹೆಸರು ನೋಂದಣಿ ಮಾಡಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಪ್ರಮುಖ ಕಾರಣಗಳಲ್ಲಿ ಒಂದಾಗಿರು ಪಂಚ ಗ್ಯಾರಂಟಿಗಳು ಸಕ್ಸಸ್ ಕಡ ಬಳಿಕ ಎಲ್ಲಾ ಕ್ಷೇತ್ರದಲ್ಲೂ ಟಿಕೆಟ್ ಗಾಗಿ ಬೇಡಿಕೆ ಹೆಚ್ಚಾಗಿದೆ. ಇನ್ನು ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಮಾಜಿ ಶಾಸಕರಾದ ವಾಸು, ಎಂ.ಕೆ.ಸೋಮಶೇಖರ್, ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಜೆ.ಜೆ.ಆನಂದ್, ಡಾ.ಸುಶ್ರುತ್ ಗೌಡ, ವರುಣ ಮಹೇಶ್, ಹಿರಿಯ ವಕೀಲ ಚಂದ್ರಮೌಳಿ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ಗಾಗಿ ಹೆಸರು ನೋಂದಾಯಿಸಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ತ್ಯಾಗ ಮಾಡಿದ್ದ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರ ಹೆಸರು ಇಲ್ಲದಿರುವುದು ಅಚ್ಚರಿಗೆ ಕಾರಣವಾಗಿದೆ. ಯಾಕಂದ್ರೆ ತಂದೆಗಾಗಿ ಕ್ಷೇತ್ರ ತ್ಯಾಗ ಮಾಡಿದ ಪುತ್ರನ ರಾಜಕೀಯ ಭವಿಷ್ಯವನ್ನ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ ಎನ್ನಲಾಗಿತ್ತು. ಹೀಗಾಗಿ ಯತೀಂದ್ರ ಅವರಿಗೆ ಮೈಸೂರು-ಕೊಡಗು ಲೋಕಸಭಾ ಟಿಕೆಟ್ ನೀಡಬೇಕೆಂದು ಅವರ ಬೆಂಬಲಿಗರು ಆಗ್ರಹಿಸಿದ್ದಾರೆ. ಅಲ್ಲದೇ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಹೈಕಮಾಂಡ್ ಒಪ್ಪಿದರೇ ನಾನು ಸ್ಪರ್ಧಿಸುತ್ತೇನೆ ಎಂದು ಯತೀಂದ್ರ ಹೇಳಿದ್ದು, ಈ ನಡುವೆ ಹತ್ತುಕ್ಕೂ ಹೆಚ್ಚು ಆಕಾಂಕ್ಷಿಗಳು ಟಿಕೆಟ್ ಗಾಗಿ ಒತ್ತಡ ಹಾಕುತ್ತಿದ್ದು, ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತೇ ಎಂಬುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.












Click it and Unblock the Notifications