HD Kumaraswamy: ಎಚ್‌ಡಿ ಕುಮಾರಸ್ವಾಮಿ, ಸಂಜಯ್ ಪಾಟೀಲಗೆ ನೋಟಿಸ್ ಜಾರಿ ಮಾಡಿದ ರಾಜ್ಯ ಮಹಿಳಾ ಆಯೋಗ
ಬೆಂಗಳೂರು, ಏಪ್ರಿಲ್. 15: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ನಾಯಕರು, ಸಾಮಾಜಿಕ ಜಾಲತಾಣಗಳಲ್ಲೂ ಟೀಕೆ ವ್ಯಕ್ತವಾದ ಬೆನ್ನಲ್ಲೇ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿಕೆ ಮಹಿಳೆಯರ ಘನತೆಗೆ ಹಾಗೂ ಚಾರಿತ್ರಕ್ಕೆ ಧಕ್ಕೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ನೋಟಿಸ್ ಜಾರಿ ಮಾಡಿ, ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದೆ. ಇದಲ್ಲದೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕುರಿತು ಅವಹನಕಾರಿ ಹೇಳಿಕೆ ನೀಡಿರುವ ಸಂಜಯ್ ಪಾಟೀಲ ವಿರುದ್ಧವೂ ಪ್ರಕರಣ ದಾಖಲಿಸಿದೆ.

ರಾಜ್ಯ ಮಹಿಳಾ ಆಯೋಗ ಹೇಳಿದ್ದೇನು?
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ರಾಜ್ಯ ಮಹಿಳಾ ಆಯೋಗ "ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಅವರು ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ರಾಜಕೀಯ ಸಮಾವೇಶದಲ್ಲಿ ಭಾಷಣ ಮಾಡುವ ಸಂದರ್ಭ ರಾಜ್ಯದ ಹಳ್ಳಿಯ ಮಹಿಳೆಯರು ಗ್ಯಾರಂಟಿ ಯೋಜನೆಯಿಂದ ದಾರಿ ತಪ್ಪಿದ್ದಾರೆ ಎಂದು ಹೇಳುವ ಮೂಲಕ ಮಹಿಳೆಯರ ಘನತೆಗೆ ಹಾಗೂ ಚಾರಿತ್ರಕ್ಕೆ ಧಕ್ಕೆ ತಂದಿದ್ದು, ಇದನ್ನು ಮಹಿಳಾ ಆಯೋಗವು ಗಂಭೀರವಾಗಿ ಪರಿಗಣಿಸಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಅವರಿಗೆ ನೋಟಿಸ್ ಜಾರಿ ಮಾಡಲಿದೆ" ಎಂದು ತಿಳಿಸಿದ್ದಾರೆ.
"ಅದೇ ರೀತಿ ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕುರಿತು ಅಪಮಾನಕಾರಿಯಾಗಿ ಹೇಳಿಕೆ ನೀಡಿರುವ ಸಂಜಯ್ ಪಾಟೀಲ ಅವರ ವಿರುದ್ಧವೂ ಕೂಡ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಲಾಗುವುದು" ಎಂದು ಸಂಜಯ್ ಪಾಟೀಲ ಅವರಿಗೆ ಎಚ್ಚಿಕೆ ನೀಡಿದೆ.
"ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರುವ ರಾಜಕೀಯ ನಾಯಕರುಗಳು ಮಹಿಳೆಯರ ಬಗ್ಗೆ ಹಾಗೂ ಅವರ ಘನತೆಯನ್ನು ಕುಂದಿಸುವ ರೀತಿಯಲ್ಲಿ ಹೇಳಿಕೆ ನೀಡುತ್ತಿರುವುದು ದುರದೃಷ್ಟಕರ. ಈ ವಿಚಾರವನ್ನು ಸಾಮಾಜಿಕ ದೃಷ್ಟಿಕೋನದಿಂದ ಗಂಭೀರವಾಗಿ ಪರಿಗಣಿಸಿ ಮಹಿಳಾ ಆಯೋಗ ನಿರ್ದಾಕ್ಷಿಣ್ಯ ಕ್ರಮವನ್ನು ಕೈಗೊಳ್ಳುತ್ತದೆ" ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಡಿನ ಮಹಿಳೆಯರಲ್ಲಿ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ
ತಮ್ಮ ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಟ್ಟ ಬೆನ್ನಲ್ಲೇ ಜೆಡಿಎಸ್‌ನ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಕ್ಷಮೆಯಾಚಿಸಿದ್ದಾರೆ. "ನಾನು ಎಲ್ಲಾ ಮಹಿಳೆಯರಲ್ಲಿ ಕ್ಷಮೆಯಾಚಿಸುತ್ತೇನೆ. ನನ್ನ ಮಾತುಗಳು ಅವರಿಗೆ ನೋವಾಗಿದ್ದರೆ, ನಾನು ಕ್ಷಮೆ ಕೇಳಲು ಸಿದ್ಧನಿದ್ದೇನೆ. ನನ್ನ ಮಾತುಗಳು ಯಾವುದೇ ಮಹಿಳೆಯನ್ನು ನೋಯಿಸುವ ಉದ್ದೇಶದಿಂದ ಇರಲಿಲ್ಲ" ಎಂದು ಎಚ್‌ಡಿ ಕುಮಾರಸ್ವಾಮಿ ಸೋಮವಾರ ಹೇಳಿದ್ದಾರೆ.
ಶನಿವಾರ ತುಮಕೂರಿನಲ್ಲಿ ನಡೆದ ರೋಡ್‌ಶೋನಲ್ಲಿ ಎಚ್‌ಡಿ ಕುಮಾರಸ್ವಾಮಿ ಅವರು, "ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ನಂತರ, ನಮ್ಮ ಹಳ್ಳಿಗಳ ಕೆಲವು ತಾಯಂದಿರು ದಾರಿ ತಪ್ಪಿದ್ದಾರೆ" ಎಂದು ಹೇಳಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕುಮಾರಸ್ವಾಮಿ ಮಹಿಳೆಯರನ್ನು ಅವಮಾನಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕುಮಾರಸ್ವಾಮಿ ವಿರುದ್ಧ ಮಹಿಳಾ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರೆ, ಜೆಡಿಎಸ್ ನಾಯಕರ ಹೇಳಿಕೆ ಅವರ ಮನಸ್ಥಿತಿಯ ಪ್ರತಿಬಿಂಬ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕೂಡ ಎಚ್‌ಡಿ ಕುಮಾರಸ್ವಾಮಿ ಹೇಳಿಕೆಗಳು ಮಹಿಳೆಯರಿಗೆ ಮಾಡಿದ ದೊಡ್ಡ ಅವಮಾನ ಎಂದು ಕಿಡಿಕಾರಿದ್ದಾರೆ.












Click it and Unblock the Notifications