Lok Sabha Election 2024: 16 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಫಿಕ್ಸ್; ಫೆಬ್ರವರಿ ಅಂತ್ಯಕ್ಕೆ ಕಾಂಗ್ರೆಸ್ ಮೊದಲ ಪಟ್ಟಿ?
ಬೆಂಗಳೂರು, ಫೆಬ್ರವರಿ 06: ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು ತನ್ನ ಅಸ್ತ್ರವನ್ನಾಗಿಸಿಕೊಂಡಿರುವ ಕಾಂಗ್ರೆಸ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ. ಬಿಜೆಪಿಯನ್ನು ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಿದ ಮಾದರಿಯಲ್ಲೇ ಲೋಕಸಭಾ ಚುನಾವನೆಯಲ್ಲೂ ಸೋಲಿಸಬೇಕು ಎಂಬ ಟಾರ್ಗೆಟ್ ಇಟ್ಟುಕೊಂಡಿದೆ.
ಲೋಕಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ಫೆಬ್ರವರಿ ಅಂತ್ಯದೊಳಗೆ ಮೊದಲ ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ. ಜಿಲ್ಲಾ ಮತ್ತು ಉಸ್ತುವಾರಿ ಸಚಿವರೊಂದಿಗೆ ಸಮಾಲೋಚನೆ ನಡೆಸಿದ ನಂತರ ಕಾಂಗ್ರೆಸ್ 15 ಅಭ್ಯರ್ಥಿಗಳ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡಿದೆ ಎನ್ನಲಾಗಿದೆ. ಜಿಲ್ಲೆಯ ಮುಖಂಡರು ಹಾಗೂ ಉಸ್ತುವಾರಿ ಸಚಿವರಿಂದ ಅಭಿಪ್ರಾಯ ಸಂಗ್ರಹಿಸಿ ಪಟ್ಟಿಯನ್ನು ಆಯ್ಕೆ ಮಾಡಲಾಗಿದೆ. ಉಳಿದ ಹೆಸರುಗಳ ಆಯ್ಕೆಯ ಚರ್ಚೆ ನಡೆಯುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಫೆಬ್ರವರಿ 1 ರಂದು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಔತಣಕೂಟ ನಡೆಸಿದ್ದು, 15 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದೆ. ಪಟ್ಟಿಯನ್ನು ಅನುಮೋದನೆಗಾಗಿ ಹೈಕಮಾಂಡ್‌ಗೆ ಕಳುಹಿಸಲಾಗುವುದು. ಈಗಾಗಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚುನಾವಣಾ ತಯಾರಿ ಆರಂಭಿಸುವಂತೆ ಅಭ್ಯರ್ಥಿಗಳಿಗೆ ಮೌಖಿಕವಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
16 ಸ್ಥಾನಗಳಿಗೆ ಅಭ್ಯರ್ಥಿಗಳು ಬಹುತೇಕ ಅಂತಿಮ
16 ಸ್ಥಾನಗಳಿಗೆ ಅಭ್ಯರ್ಥಿಗಳು ಬಹುತೇಕ ಅಂತಿಮಗೊಂಡಿದ್ದು, ಇನ್ನುಳಿದ 12 ಸ್ಥಾನಗಳಿಗೆ ಇನ್ನೂ ನಿರ್ಧಾರವಾಗಬೇಕಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಬಜೆಟ್ ಅಧಿವೇಶನದ ನಂತರ ಮೊದಲ ಪಟ್ಟಿ ಹೊರಬೀಳುವ ಸಾಧ್ಯತೆ ಇದೆ. ಕೇಂದ್ರ ಚುನಾವಣಾ ಸಮಿತಿಯಿಂದ ಅನುಮತಿ ಪಡೆದ ನಂತರ ಅದನ್ನು ಪ್ರಕಟಿಸಲಾಗುವುದು.
ಉಳಿದ ಇನ್ನೂ 12 ಸ್ಥಾನಗಳಲ್ಲಿ ಜಾತಿ ಸಂಯೋಜನೆಗಳು ನಡೆಯುತ್ತಿದ್ದು, ನಿರ್ಧಾರಕ್ಕೆ ಬರಲು ಇನ್ನೂ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿದ್ದು, ನಾಲ್ವರು ಕ್ಯಾಬಿನೆಟ್ ಸಚಿವರ ಹೆಸರುಗಳು ಪಟ್ಟಿಯಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮಂಡ್ಯ ಸೇರಿದಂತೆ ಕೆಲವೆಡೆ ಬಿಜೆಪಿ-ಜನತಾದಳ (ಜಾತ್ಯತೀತ) ಮೈತ್ರಿಯಿಂದ ಕಣಕ್ಕಿಳಿಯಲಿರುವ ಅಭ್ಯರ್ಥಿಗಳ ಆಧಾರದ ಮೇಲೆ ಕೊನೆಯ ಕ್ಷಣದಲ್ಲಿ ಅಭ್ಯರ್ಥಿಗಳು ಬದಲಾಗಬಹುದು ಎಂದು ಮೂಲಗಳು ತಿಳಿಸಿವೆ.
ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸುವ ಸಾಧ್ಯತೆ ಇಲ್ಲ
ಪಕ್ಷದ ಮೂಲಗಳ ಪ್ರಕಾರ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸುವ ಸಾಧ್ಯತೆ ಕಡಿಮೆಯಿದೆ. ಪಕ್ಷವು ಹೊಸ ಮುಖಕ್ಕಾಗಿ ಹುಡುಕಾಟ ನಡೆಸುತ್ತಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಉಮೇಶ್ ಜಾಧವ್ ವಿರುದ್ಧ ಖರ್ಗೆ ಸೋತಿದ್ದರು.
ಸಂಭಾವ್ಯ ಕಾಂಗ್ರೆಸ್ ಅಭ್ಯರ್ಥಿಗಳು
ಮೈಸೂರಿನಲ್ಲಿ ಬಿಜೆಪಿಯ ಪ್ರತಾಪ್ ಸಿಂಹ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಒಕ್ಕಲಿಗ ನಾಯಕನ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡಿದೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ. ಮಂಡ್ಯ ಕ್ಷೇತ್ರದಿಂದ ಸ್ಟಾರ್ ಚಂದ್ರು ಹೆಸರನ್ನು ಕಾಂಗ್ರೆಸ್ ಶಾರ್ಟ್‌ಲಿಸ್ಟ್ ಮಾಡಿದೆ ಎನ್ನಲಾಗಿದೆ. ಧಾರವಾಡದಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ.
ಬೀದರ್‌ನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಪುತ್ರ ಸಾಗರ್ ಖಂಡ್ರೆ ಅವರನ್ನು ಕಣಕ್ಕಿಳಿಸಲು ಪಕ್ಷ ಚಿಂತನೆ ನಡೆಸಿದೆ. ತಮ್ಮ ಮಗನಿಗೆ ಟಿಕೆಟ್ ಕೊಡಿಸಲು ಸಚಿವರು ಲಾಬಿ ನಡೆಸಿದ್ದಾರೆ ಎನ್ನಲಾಗಿದೆ. ಈ ಮಧ್ಯೆ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಕ್ಷೇತ್ರಗಳು ಸೇರಿದಂತೆ ಉಳಿದ 12 ಸ್ಥಾನಗಳಲ್ಲಿ ಕಾಂಗ್ರೆಸ್ ಇನ್ನೂ ಅಭ್ಯರ್ಥಿಗಳ ಹುಡುಕಾಟದಲ್ಲಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನ ಗೆದ್ದಿದ್ದವು. ಬಿಜೆಪಿ 25 ಸ್ಥಾನಗಳನ್ನು ಗೆದ್ದಿದೆ. ಮಂಡ್ಯದಿಂದ ಸ್ವತಂತ್ರ ಅಭ್ಯರ್ಥಿ ಸುಮಲತಾ ಗೆಲುವು ಸಾಧಿಸಿದ್ದಾರೆ.












Click it and Unblock the Notifications