ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಗೆಲ್ಲುವ ಸ್ಥಾನಗಳೆಷ್ಟು? ಸತೀಶ್ ಜಾರಕಿಹೊಳಿ ಲೆಕ್ಕಾಚಾರ ಇಲ್ಲಿದೆ
ಬೆಳಗಾವಿ, ಮೇ 19: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತದಾನ ಎರಡು ಹಂತದಲ್ಲಿ ನಡೆದಿದ್ದು, ಇದೀಗ ಗೆಲುವಿನ ಲೆಕ್ಕಾಚಾರದಲ್ಲಿ ರಾಜಕೀಯ ಪಕ್ಷಗಳಿವೆ. ಆಡಳಿತರೂಢ ಕಾಂಗ್ರೆಸ್ ಗೆ ಈ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿತ್ತು. ಇತ್ತ ಕಾಂಗ್ರೆಸ್ ಗೆ ಠಕ್ಕರ್ ಕೊಡಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು, 28 ಕ್ಷೇತ್ರಗಳನ್ನ ಗೆಲುವ ವಿಶ್ವಾಸದಲ್ಲಿದೆ.
ಈ ಕುರಿತು ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮಗಳ ಜೊತೆಗೆ ಮಾತನಾಡಿ, ಜ್ಯದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆ 2019 ಚುನಾವಣೆಗಿಂತ ಭಿನ್ನವಾಗಿದೆ, ತಮ್ಮ ಪಕ್ಷ 14-16 ಸ್ಥಾನಗಳಲ್ಲಿ ಗೆಲ್ಲಲಿದೆ, ಎರಡು ಪಕ್ಷಗಳಿಗೆ ಶೇಕಡ 50ರಷ್ಟು ಸೀಟುಗಳನ್ನು ಗೆಲ್ಲುವ ಅವಕಾಶವಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನ ಗಳಿಸಿತ್ತು. ಇತ್ತ ಲೋಕಸಭಾ ಚುನಾವಣೆಯಲ್ಲಿ 28 ಲೋಕಸಭಾ ಕ್ಷೇತ್ರಗಳ ಫೈಕಿ 28 ಕ್ಷೇತ್ರಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿದೆ. ಇತ್ತಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಅಲ್ಲದೇ ಬಿಜೆಪಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಇದೀಗ ಬಿಜೆಪಿ-ಜೆಡಿಎಸ್ 14 ಲೋಕಸಭಾ ಕ್ಷೇತ್ರ ಹಾಗೂ ಕಾಂಗ್ರೆಸ್ 14 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸತೀಶ್ ಜಾರಕಿಹೊಳಿ ಭವಿಷ್ಯ ನುಡಿದಿದ್ದಾರೆ.
ಇನ್ನೂ ಲೋಕಸಭಾ ಚುನಾವಣಾ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ಮಾತನಾಡಿ, ಉತ್ತರ ಭಾರತದ ರಾಜ್ಯಗಳಲ್ಲೂ ಚುನಾವಣೆ ಉತ್ತಮವಾಗಿ ನಡೆಯುತ್ತಿದ್ದು ಜನ ಬದಲಾವಣೆ ಬಯಸಿದ್ದಾರೆ. ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 20 ಸ್ಥಾನಗಳ ಆಸುಪಾಸು ಕ್ಷೇತ್ರಗಳನ್ನು ಗೆಲ್ಲಲಿದೆ. ನಮ್ಮ ಗ್ಯಾರಂಟಿ ಏಟು ಏನು ಎಂದು ಗೊತ್ತಿಲ್ಲ. ಬಿಜೆಪಿಯವರು ನಮ್ಮ ಗ್ಯಾರಂಟಿ ನೋಡಿ ಗಾಬರಿಯಾಗಿದ್ದಾರೆ ಎಂದರು.
ಮೆಟ್ರೋ ಆದಾಯ ಹಾಗೂ ಶಕ್ತಿ ಯೋಜನೆ ಬಗ್ಗೆ ಪ್ರಧಾನಮಂತ್ರಿಗಳು ಪ್ರಸ್ತಾಪ ಮಾಡಿದ್ದಾರೆ. ಕಳೆದ ಒಂದು ವರ್ಷದಲ್ಲಿ ಮೆಟ್ರೋ 130 ಕೋಟಿ ರೂ. ಆದಾಯ ಗಳಿಸಿದೆ. ಮೆಟ್ರೋ ಪ್ರಯಾಣಿಕರ ಸಂಖ್ಯೆಯೂ ಶೇ. 30 ರಷ್ಟು ಏರಿಕೆ ಕಂಡಿದೆ. ನಮ್ಮ ರಾಜ್ಯದ ಪೈಕಿ ಬೆಂಗಳೂರಿನಲ್ಲಿ ಮಾತ್ರ ಮೆಟ್ರೋ ಇದೆ. ಶಕ್ತಿ ಯೋಜನೆ ಕರ್ನಾಟಕದಾದ್ಯಂತ ಜಾರಿ ಮಾಡಲಾಗಿದೆ. ನಾವು ಬಡವರ ಬಗ್ಗೆ ಆಲೋಚಿಸಿ ಈ ಯೋಜನೆ ಜಾರಿ ಮಾಡಿದ್ದೇವೆ.
ಕೋವಿಡ್ ಸಮಯದಲ್ಲಿ ಉಚಿತ ಬಸ್ ಪ್ರಯಾಣ ವ್ಯವಸ್ಥೆಗೆ ಒತ್ತಾಯ ಮಾಡಿದ್ದು ನಾವೇ. ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನರಿಗೆ ನೆರವಾಗಲು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರ ಬಂದ ನಂತರ ಮೊದಲು ಜಾರಿ ಮಾಡಿದ್ದು ಶಕ್ತಿ ಯೋಜನೆ. ಸಾರ್ವಜನಿಕರ ಅನುಕೂಲಕ್ಕೆ ಸಾರಿಗೆ ಇಲಾಖೆಯಿಂದ ಒಂದು ಸಾವಿರಕ್ಕೂ ಹೆಚ್ಚು ಹೊಸ ಬಸ್ ಗಳನ್ನು ಖರೀದಿ ಮಾಡಲಾಗಿದೆ.
ಬಿಜೆಪಿಯವರಿಂದ ಇಂತಹ ಒಂದೇ ಒಂದು ಯೋಜನೆ ಜಾರಿ ಮಾಡಲು ಆಗಲಿಲ್ಲ. ತೆಲಂಗಾಣದಲ್ಲೂ ಈ ಯೋಜನೆ ಜಾರಿ ಮಾಡಿದ್ದೇವೆ. ನಮ್ಮ ಮೆಟ್ರೋದಲ್ಲಿ ಶೇ. 30 ರಷ್ಟು ಪ್ರಯಾಣಿಕರ ಸಂಖ್ಯೆ ಹಾಗೂ ಆದಾಯ ಹೆಚ್ಚಾಗಿದೆ. ಮೆಟ್ರೋದಲ್ಲಿ ಕೇಂದ್ರ ಹಾಗೂ ರಾಜ್ಯಸರ್ಕಾರಗಳು ಪಾಲುದಾರರು. ಆದರೂ ಪ್ರಧಾನಮಂತ್ರಿಗಳಿಗೆ ಈ ವಿಚಾರವಾಗಿ ಮಾಹಿತಿ ಕೊರತೆ ಇದೆ. ಯಾರೋ ಅವರಿಗೆ ತಪ್ಪು ಮಾಹಿತಿ ನೀಡಿದಂತಿದೆ ಎಂದು ಹೇಳಿದರು.












Click it and Unblock the Notifications