Lok Sabha Election 2024: ಲೋಕಸಭಾ ಚುನಾವಣೆಯಲ್ಲ ಬಿಜೆಪಿ ಗೆಲ್ಲುವ ಸ್ಥಾನಗಳೆಷ್ಟು? ಅಂಕಿ ಅಂಶಗಳನ್ನ ಬಿಚ್ಚಿಟ್ಟ ಸಿದ್ದರಾಮಯ್ಯ
ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಳಗಾವಿಯಲ್ಲಿ ಆಯೋಜಿಸಿರುವ ಜಂಟಿ ಪತ್ರಿಕಾ ಗೋಷ್ಠಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂಬೇಡ್ಕರ್ ಸಂವಿಧಾನ ಎಲ್ಲರಿಗೂ ಸಮಾನ ಅವಕಾಶ, ಸಮಸಮಾಜ ನೀಡುತ್ತದೆ. ಇದಕ್ಕೆ ವಿರುದ್ದವಾಗಿ ಬಿಜೆಪಿಯವರು ನಡೆಯುತ್ತಿದ್ದಾರೆ. ಅಂಬೇಡ್ಕರ್ ಅವರು ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಸಾಕಾಗುವುದಿಲ್ಲ. ಎಲ್ಲರಿಗೂ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆಯುವಂತಾಗಬೇಕು ಎಂದಿದ್ದಾರೆ. ಈ ಶಕ್ತಿಯನ್ನು ದುರ್ಬಲರಿಗೆ ತುಂಬವ ಸಲುವಾಗಿಯೇ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ ಎಂದರು.

5 ಗ್ಯಾರಂಟಿಳನ್ನು ಜಾರಿ ಮಾಡಿದ ಕಾಂಗ್ರೆಸ್ ನ ಮೇಲೆ ಜನರಿಗೆ ವಿಶ್ವಾಸವಿದೆ
ರಾಜ್ಯದ ಬಡ ಜನರ ತುತ್ತಿನ ಚೀಲ ತುಂಬಿಸುವ ಅನ್ನಭಾಗ್ಯ ಯೋಜನೆಗಾಗಿ ಅಕ್ಕಿ ಪೂರೈಸಲು ಕೋರಿದಾಗ, ಅಕ್ಕಿ ದಾಸ್ತಾನಿದ್ದರೂ ಕೇಂದ್ರ ಸರ್ಕಾರ ಅಕ್ಕಿ ನೀಡಲು ಒಪ್ಪಲಿಲ್ಲ. ಆದ್ದರಿಂದ ಕಾಂಗ್ರೆಸ್ ಸರ್ಕಾರ ಅಕ್ಕಿ ಬದಲು 5 ಕೆಜಿಗೆ 34 ರೂ. ನಂತೆ 170 ರೂ.ನಂತೆ ಜುಲೈ ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಗೃಹಜ್ಯೋತಿಯನ್ನು ಜುಲೈ ತಿಂಗಳಲ್ಲಿ ಜಾರಿ ಮಾಡಲಾಯಿತು. 1.60 ಕೋಟಿ ಫಲಾನುಭವಿಗಳಿಗೆ ಅಂದರೆ ರಾಜ್ಯದ ಸುಮಾರು 92% ಜನರಿಗೆ ಇದರಿಂದ ಲಾಭವಾಗುತ್ತಿದೆ.
ಗೃಹಲಕ್ಷ್ಮಿ ಯೋಜನೆಯಡಿ 1.21 ಕೋಟಿ ಮನೆ ಯಜಮಾನಿಯರಿಗೆ ತಲಾ 2000 ರೂ.ನಂತೆ ಆಗಸ್ಟ್ ತಿಂಗಳಿನಿಂದ ಜಾರಿ ಮಾಡಲಾಯಿತು. ನಿರುದ್ಯೋಗಿ ಪದವೀಧರರಿಗೆ 2 ವರ್ಷಗಳವರೆಗೆ ತಿಂಗಳಿಗೆ 3000 ರೂ. ಹಾಗೂ ಡಿಪ್ಲೋಮಾ ಮಾಡಿದವರಿಗೆ ತಲಾ 2000 ರೂ. ನೀಡುವ ಯುವನಿಧಿ ಯೋಜನೆಯನ್ನು ವಿವೇಕಾನಂದ ಜನ್ಮದಿನಾಚರಣೆಯಂದು ಜಾರಿ ಮಾಡಲಾಯಿತು. ಈ ಅವಧಿಯಲ್ಲಿ ಬೇಡಿಕೆಯಿರುವ ತರಬೇತಿಯನ್ನು ಯುವಜನರಿಗೆ ನೀಡಿ, ಅವರಿಗೆ ಉದ್ಯೋಗ ದೊರೆಯಲು ಶಕ್ತಿ ತುಂಬಲಾಗುವುದು. ಹಿಂದೆಯೂ ನಾವು ನೀಡಿದ ಭರವಸೆಗಳನ್ನು ಈಡೇರಿಸಿದ್ದೆವು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ 5 ಗ್ಯಾರಂಟಿಗಳನ್ನು ತುಂಬಿ ಜನರಿಗೆ ವಿಶ್ವಾಸ ಬಂದಿದೆ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದ್ದೇವೆ ಎಂದರು.
ಗ್ಯಾರಂಟಿಗಳನ್ನು ನಿಲ್ಲಿಸಬೇಕೆಂಬುದು ಬಿಜೆಪಿ ಹುನ್ನಾರ
ಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ಆಡಿಕೊಂಡರು. ಬಳಿಕ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಸುಳ್ಳು ಹರಡಿದರು. ಅಭಿವೃದ್ಧಿ ಕೆಲಸಗಳು ನಿಲ್ಲುತ್ತವೆ ಎಂದರು, ಲೋಕಸಭಾ ಚುನಾವಣೆ ತನಕ ಮಾತ್ರ ನೀಡಿ, ನಂತರ ನಿಲ್ಲಿಸುತ್ತಾರೆ ಎಂಬ ಸುಳ್ಳುಗಳನ್ನು ಸೃಷ್ಟಿಸಿದ್ದಾರೆ. ಬಜೆಟ್ ನಲ್ಲಿ ಗ್ಯಾರಂಟಿಗಳಿಗೆ 52009 ಕೋಟಿ ರೂ.ಗನ್ನು ಇಟ್ಟಿದ್ದೇವೆ. ಅಭಿವೃದ್ಧಿ ಕೆಲಸಗಳಿಗೆ 68 ಸಾವಿರ ಕೋಟಿಗಳನ್ನೂ ಸೇರಿದಂತೆ 2024-25 ರಲ್ಲಿ ಒಟ್ಟು 1.20 ಲಕ್ಷ ಕೋಟಿ ಇಟ್ಟಿದ್ದೆವೆ ಎಂದು ವಿವರಿಸಿದರು.
ನಮ್ಮ ಸರ್ಕಾರದ ಬಜೆಟ್ ಗಾತ್ರ 3.71 ಲಕ್ಷ ಕೋಟಿ , ಬೊಮ್ಮಾಯಿಯವರ ಬಜೆಟ್ 23-24 ರಲ್ಲಿ 3.09 ಲಕ್ಷ ಕೋಟಿ. ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ಜನರಿಗೆ ಕಾಂಗ್ರೆಸ್ ನ ಮೇಲೆ ವಿಶ್ವಾಸ ಕಡಿಮೆಯಾಗಲಿ ಎಂದು ಹುನ್ನಾರ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಗ್ಯಾರಂಟಿ ಯೋಜನೆಗಳನ್ನು ಕಂಡರೆ ಆಗುವುದಿಲ್ಲ. ಅದನ್ನು ನಿಲ್ಲಿಸಬೇಕೆಂಬುದು ಅವರ ಪಿತೂರಿಯಾಗಿದೆ ಎಂದರು.
ಮೋದಿಯಿಂದ ಮತ ಕ್ರೋಢೀಕರಣಕ್ಕಾಗಿ ದ್ವೇಷದ ಭಾಷಣ
ಮೋದಿಯವರು 10 ವರ್ಷಗಳಿಂದ ಯಾವುದೇ ಸಾಧನೆಗಳನ್ನು ಮಾಡಿಲ್ಲ. 2014 ರಲ್ಲಿ ನೀಡಿರುವ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಆದರೆ ಮೋದಿಯವರು ದ್ವೇಷದ ಭಾಷಣ ಮಾಡುತ್ತಿದ್ದಾರೆ. ಮತಗಳ ಕ್ರೋಢೀಕರಣ, ಧರ್ಮ ಕ್ರೋಢೀಕರಣ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ರಾಹುಲ್ ಗಾಂಧಿಯವರು ದೇಶದ ಉದ್ದಗಲಕ್ಕೂ ಪಾದ ಯಾತ್ರೆ ಹಾಗೂ ನ್ಯಾಯ ಯಾತ್ರೆ ಮಾಡಿದರು. ದೇಶ ವಿಭಜನೆ ಮಾಡಲು ಮೋದಿಯವರು ಮಾಡಿರುವ ಪ್ರಯತ್ನಗಳಿಂದ ಬೇಸತ್ತಿದ್ದ ಜನರ ಒಡೆದ ಮನಸ್ಸನ್ನು ಒಗ್ಗೂಡಿಸಲು ಯಾತ್ರೆ ಕೈಗೊಂಡು ಯಶಸ್ವಿಯಾದರು ಎಂದರು.












Click it and Unblock the Notifications