Congress Candidate List: ಟಿಕೆಟ್ ಹಂಚಿಕೆ ನಿರ್ಣಾಯಕ ಸಭೆ, ದೆಹಲಿಗೆ ಸಿದ್ದರಾಮಯ್ಯ
ಬೆಂಗಳೂರು, ಮಾರ್ಚ್ 19: ಮುಂಬರುವ ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗ ಈಗಾಗಲೇ ದಿನಾಂಕ ನಿಗದಿ ಮಾಡಿದೆ. ಇದೆ ಬೆನ್ನಲ್ಲೇ ರಾಜಕೀಯ ಪಕ್ಷಗಳು ತಮ್ಮ ಕಾರ್ಯಚಟುವಟಿಕೆಗಳನ್ನು ಹೆಚ್ಚಿಸಿವೆ. ಟಿಕೆಟ್ ಹಂಚಿಕೆ ಮಾಡದ ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡಲು ಸಭೆ ಮೇಲೆ ಸಭೆ ನಡೆಸುತ್ತಿವೆ.
ಬಿಜೆಪಿ ಈಗಾಗಲೇ ಇಪ್ಪತ್ತು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೆ ಕಾಂಗ್ರೆಸ್ ಮಾತ್ರ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿ ಉಳಿದ ಕ್ಷೇತ್ರಗಳಿಗೆ ಟಿಕೆಟ್ ಹಗ್ಗಜಗ್ಗಾಟ ನಡೆಸುತ್ತಿದೆ. ಹೀಗಾಗಿ ಕಾಂಗ್ರೆಸ್ ಮೇಲೆ ಅಧಿಕ ಒತ್ತಡ ಇದ್ದು, ಇಂದು ದೆಹಲಿಯಲ್ಲಿ ಎಐಸಿಸಿ ಸಭೆ ನಡೆಯಲಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ದೌಡಾಯಿಸಲಿದ್ದಾರೆ.

ಮೊದಲ ಹಂತದಲ್ಲಿ ಅಭ್ಯರ್ಥಿಗಳನ್ನ ಘೋಷಣೆ ಮಾಡಿರುವ ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ. ರಾಜ್ಯದ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಿ, ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಕಸರತ್ತು ನಡೆಯುತ್ತಿದೆ. ಹೀಗಾಗಿ ಪಟ್ಟಿ ಬಿಡುಗಡೆಗಾಗಿ, ಅಭ್ಯರ್ಥಿಗಳ ಆಯ್ಕೆಗಾಗಿ ನವ ದೆಹಲಿಯಲ್ಲಿ ಸಭೆಗಳ ಮೇಲೆ ಸಭೆ ನಡೆಸುತ್ತಿದೆ.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಮಾಲೋಚನಾ ಸಭೆಗಳು ನಡೆಯುತ್ತಿದ್ದು, ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಬಿಕ್ಕಟ್ಟು ಹೆಚ್ಚಾಗಿರುವ ಕೋಲಾರ ಕ್ಷೇತ್ರ, ಬೆಂಗಳೂರು ಲೋಕಸಭಾ ಕ್ಷೇತ್ರ ಮತ್ತು ಮೈಸೂರು- ಕೊಡಗು ಕ್ಷೇತ್ರಗಳಿಗೆ ಅಭ್ಯರ್ಥಿ ಫೈನಲ್ ಮಾಡಲಾಗುತ್ತದೆ.

ಮೊಹಮ್ಮದ್ ನಲಪಾಡ್‌ಗೆ ಟಿಕೆಟ್ ನೀಡುವಂತೆ ಒತ್ತಡ
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಬೆಂಗಳೂರಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ವಿಶೇಷವೆಂದರೆ, ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಈ ತಿಂಗಳು ಬಿಡುಗಡೆ ಮಾಡಿದೆ.
ಮೊದಲ ಪಟ್ಟಿಯಲ್ಲಿ ಒಟ್ಟು 39 ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, ಕೇರಳದಿಂದ 16, ಕರ್ನಾಟಕದ ಏಳು ಮತ್ತು ಛತ್ತೀಸ್‌ಗಢದಿಂದ ಆರು, ತೆಲಂಗಾಣದ ನಾಲ್ವರು ಅಭ್ಯರ್ಥಿಗಳು. ಮೇಘಾಲಯದಿಂದ ಇಬ್ಬರು ಮತ್ತು ನಾಗಾಲ್ಯಾಂಡ್, ತ್ರಿಪುರಾ, ಸಿಕ್ಕಿಂ ಮತ್ತು ಲಕ್ಷದೀಪ್‌ನಿಂದ ತಲಾ ಒಬ್ಬರನ್ನು ಘೋಷಿಸಲಾಗಿದೆ.












Click it and Unblock the Notifications