ಮತ್ತೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸದಾನಂದಗೌಡರ ಸ್ಪರ್ಧೆ?
ಬೆಂಗಳೂರು,ಡಿಸೆಂಬರ್ 29: ರಾಜ್ಯ ಬಿಜೆಪಿಯಲ್ಲಿ ಈ ಬಾರೀ ಹಲವು ಬಾಲಿ ಸಂಸದರಿಗೆ ಟಿಕೆಟ್ ಸಿಗುವುದು ಡೌಟ್ ಎನ್ನುವ ಮಾತು ಕೇಳಿ ಬಂದಿದೆ. ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಡಿವಿ ಸದಾನಂದ ಗೌಡ ಇದೀಗ ದಿಢೀರ್ ಮನಸ್ಸು ಬದಲಿಸಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ಮತ್ತೊಮ್ಮೆ ಸ್ಪರ್ಧೆ ಮಾಡುವ ಸುಳಿವು ಸಹ ಕೊಟ್ಟಿದ್ದಾರೆ ಎನ್ನಲಾಗಿದೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ಶಾಸಕ ಡಾ ಅಶ್ವಥ್ ನಾರಾಯಣ್ ಅವರು ಸದಾನಂದ ಗೌಡರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಮರು ಸ್ಪರ್ಧಿಸುವಂತೆ ಒತ್ತಾಯಗಳು ಕೇಳಿ ಬಂದಿದ್ದು, ಮತ್ತೆ ಚುನಾವಣೆಯಲ್ಲಿ ಸದಾನಂದಗೌಡರು ಸ್ಪರ್ಧಿಸುವ ಕುರಿತು ಮನಸ್ಸು ಬದಲಾಯಿಸಿದ್ದಾರೆ ಎಂದು ಹೇಳಲಾಗಿದೆ.

ನವೆಂಬರ್ 8 ರಂದು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದ ಗೌಡ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದರು ಆದರೆ, ರಾಜಕೀಯದಲ್ಲಿ ಸಕ್ರಿಯರಾಗುವುದಾಗಿ ಹೇಳಿದರು. ಅಂದಿನಿಂದ ಸದಾನಂದಗೌಡರು ರಾಜ್ಯ ಘಟಕದೊಳಗಿನ ಕೆಲವು ಸಮಸ್ಯೆಗಳ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ರಾಜ್ಯ ಪಕ್ಷದ ಪದಾಧಿಕಾರಿಗಳ ನೇಮಕಕ್ಕೂ ಮುನ್ನ ಕೇಂದ್ರ ನಾಯಕರು ರಾಜ್ಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಟೀಕಿಸಿದರು.
ಮತ್ತೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಡಿ ವಿ ಸದಾನಂದಗೌಡ ಅವರು ಮಾತನಾಡಿ, ಬೆಂಗಳೂರು ಉತ್ತರ ಕ್ಷೇತ್ರದಿಂದ ಮತ್ತೊಮ್ಮೆ ಸ್ಫರ್ಧೆಗೆ ಒತ್ತಡ ಹೆಚ್ಚಾಗಿದೆ. ನಿನ್ನೆ ನಮ್ಮ ಹಿರಿಯ ನಾಯಕರು ಮನೆಗೆ ಬಂದು ಸ್ಪರ್ಧೆ ಮಾಡಿ ಎಂದು ಮನವಿ ಮಾಡಿದ್ದಾರೆ. ಎಲ್ಲಾ ಶಾಸಕರು, ಮಾಜಿ ಮಂತ್ರಿಗಳು, ಕಾರ್ಯಕರ್ತರು ಕೂಡಾ ಹೇಳುತ್ತಿದ್ದಾರೆ ಎಂದು ಹೇಳುವ ಮೂಲಕ ಮತ್ತೊಮ್ಮೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ನಮ್ಮ ಕೆಲವು ನಾಯಕರು ನನ್ನನ್ನು ಭೇಟಿ ಮಾಡಿ ಬೆಂಗಳೂರು ಉತ್ತರದಿಂದ ಸ್ಪರ್ಧಿಸುವಂತೆ ಹೇಳಿದ್ದು ನಿಜ. ಅವರಷ್ಟೇ ಅಲ್ಲ, 8 ವಿಧಾನಸಭಾ ಕ್ಷೇತ್ರಗಳ ಶಾಸಕರು ಸೇರಿದಂತೆ ಹಲವಾರು ಮುಖಂಡರು ಚುನಾವಣೆಗೆ ಸ್ಪರ್ಧಿಸುವಂತೆ ನನ್ನನ್ನು ಕೇಳಿದ್ದಾರೆ. ಎಷ್ಟೋ ಜನ ನನ್ನ ಮೇಲೆ ಪ್ರೀತಿಯ ಸುರಿಮಳೆ ಮಾಡುತ್ತಿರುವುದು ಒಳ್ಳೆಯ ಭಾವನೆ. ನಾನು 30 ವರ್ಷಗಳಿಂದ ರಾಜಕೀಯದಲ್ಲಿದ್ದು, ಇತರರಿಗೆ ಅವಕಾಶ ನೀಡಬೇಕೆಂದು ಬಯಸಿದ್ದೇನೆ. ಈಗ ಒತ್ತಡವಿದೆ, ನೋಡೋಣ, ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಸದಾನಂದಗೌಡ ಹೇಳಿದರು.
ಒಟ್ನಲಿ ಸದಾನಂದ ಗೌಡರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತಿದ್ದಂತೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗು ಸಿ.ಟಿ.ರವಿ, ಶೋಭಾ ಕರಂದ್ಲಾಜೆ, ಸುಮಲತಾ ಸೇರಿದಂತೆ ಹಲವು ಬಿಜೆಪಿ ನಾಯಕರು ಟಿಕೆಟ್ ರೇಸ್ ನಲ್ಲಿದರು, ಆದರೆ, ಮತ್ತೆ ಸದಾನಂದ ಗೌಡರಿಗೆ ಹೈಕಮಾಂಡ್ ಮಣೆ ಹಾಕುತ್ತಾ ಎಂಬುದನ್ನ ಕಾದುನೋಡ್ಬೇಕಾಗಿದೆ.












Click it and Unblock the Notifications