Lokayukta Raids: ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಬೇಟೆ, ಎಲ್ಲೆಲ್ಲಿ?, ಇಲ್ಲಿದೆ ವಿವರ
ಕರ್ನಾಟಕ, ಆಗಸ್ಟ್ 17: ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ರಾಜ್ಯದ ಹಲವೆಡೆ ಇಂದು (ಆಗಸ್ಟ್ 17) ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾಗಾದರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿಯಾಗಿದೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಹಿನ್ನೆಲೆ ರಾಮನಗರ, ದಾವಣಗೆರೆ, ಧಾರವಾಡ, ಬೆಂಗಳೂರು, ಕೊಡಗು, ಚಿತ್ರದುರ್ಗ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಗಳು ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ದಾವಣಗೆರೆಯಲ್ಲಿ ಲೋಕಾಯುಕ್ತ ದಾಳಿ
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅರಣ್ಯ ಇಲಾಖೆ ಅಧಿಕಾರಿ ಆರ್.ಎಫ್.ಒಸತೀಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವು ವರ್ಷಗಳಿಂದ ಆರ್‌ಎಫ್‌ಓ ಆಗಿರುವ ಸತೀಶ್ ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಲೋಕಾಯುಕ್ತ ದಾಳಿಗೆ ಒಳಗಾಗಿದ್ದಾರೆ.
ಸತೀಶ್ ಅವರ ಶಿವಮೊಗ್ಗದಲ್ಲಿರುವ ನಿವಾಸದ ಮೇಲೂ ದಾಳಿ ಮಾಡಲಾಗಿದೆ. ಲೋಕಾಯುಕ್ತ ಎಸ್‌ಪಿ ಕೌಲಾಪುರೆ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್ ರಾಷ್ಟ್ರಪತಿ ಹಾಗೂ ಮಧುಸೂಧನ್ ನೇತೃದಲ್ಲಿ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಬಿಬಿಎಂಪಿಯಲ್ಲಿ ಎಇಇ ಆಗಿ ಕೆಲಸ ನಿರ್ವಹಿಸುತ್ತಿರುವ ಹೆಚ್.ಭಾರತಿ ಅವರ ದಾವಣಗೆರೆಯ ಜಯನಗರ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್ ಕೆ.ಮಹೇಶ್ ಹಾಗೂ ಹೆಚ್.ಭಾರತಿ ದಂಪತಿಗೆ ಸೇರಿದ ಮನೆಯಲ್ಲಿ ಒಂದು ಕೆ.ಜಿ.ಬಂಗಾರ, 15 ಲಕ್ಷ ರೂಪಾಯಿಗೂ ಹೆಚ್ಚು ಹಣ ಪತ್ತೆಯಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
ಬಿಬಿಎಂಪಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹೆಚ್.ಭಾರತಿ ಅವರು ದಾವಣಗೆರೆಯಲ್ಲಿಯೂ ಆಸ್ತಿ ಮಾಡಿರುವ ಕುರಿತಂತೆ ಮಾಹಿತಿ ಇದ್ದು, ಈ ಕುರಿತಂತೆ ಕೆಲ ದಾಖಲಾತಿಗಳು ಸಿಕ್ಕಿವೆ ಎನ್ನಲಾಗಿದೆ. ಆದರೆ ಅಧಿಕಾರಿಗಳು ಈ ವಿಚಾರ ದೃಢಪಡಿಸಿಲ್ಲ ಎನ್ನಲಾಗಿದೆ.
ರಾಮನಗರ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ
ಮಹದೇವಪುರ ವಲಯದ ಬಿಬಿಎಂಪಿ ಆರ್‌ಐ ನಟರಾಜು ಅವರ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಶಿವನಹಳ್ಳಿ ಗ್ರಾಮದಲ್ಲಿರುವ ಮನೆ ಮೇಲೆ ಲೋಕಾಯುಕ್ತ ನಡೆದಿದೆ. ಬೆಂಗಳೂರಿನಿಂದ ರಾಮನಗರಕ್ಕೆ ತೆರಳಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ದಾಖಲೆ ಪರಿಶೀಲನೆ ಮಾಡಿದ್ದಾರೆ. ಅಲ್ಲದೆ ಈ ಹಿಂದೆಯೂ ಸಹ ನಟರಾಜ್ ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದರು.
ಕೊಡಗು ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ
ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಕೊಡುಗು ಎಡಿಸಿ ನಂಜುಂಡೇಗೌಡ ಅವರ ನಿವಾಸದ ಮೇಲೆ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ನಡೆಸಿದ್ದಾರೆ. ಇನ್ನು ಎಡಿಸಿ ನಂಜುಂಡೇಗೌಡರ ಅವರ ಕ್ವಾಟ್ರಸ್ ಮಡಿಕೇರಿ ಜಿಲ್ಲಾಧಿಕಾರಿ ಮನೆ ಪಕ್ಕದಲ್ಲಿ ಇದೆ ಎನ್ನಲಾಗಿದೆ.
ಕೊಡಗು ಮತ್ತು ಮೈಸೂರು ಜಿಲ್ಲೆ ಲೋಕಾಯುಕ್ತ ಪೊಲೀಸರ ಜಂಟಿ ಕಾರ್ಯಾಚರಣೆ ಡಿವೈಎಸ್‌ಪಿ ಪವನ್ ಕುಮಾರ್ ನೇತೃತ್ವದಲ್ಲಿ ನಡೆದಿದೆ. ಮೂವರು ಇನ್ಸ್‌ಪೆಕ್ಟರ್ ಸೇರಿದಂತೆ 10ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯಿಂದ ದಾಳಿ ನಡೆಸಲಾಗಿದೆ. ಈ ವೇಳೆ ಹಣ ಲೆಕ್ಕ ಹಾಕಲು ಅಧಿಕಾರಿಗಳು ಮಷಿನ್ ತಂದಿದ್ದು, ಮನೆಯಲ್ಲಿ ಅಪಾರ ಪ್ರಮಾಣದ ನಗದು ಹಣ ಸಿಕ್ಕಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ
ಕೊಪ್ಪಳ ನಿರ್ಮಿತಿ ಕೇಂದ್ರದ ಕಚೇರಿ ವ್ಯವಸ್ಥಾಪಕ ಮಂಜುನಾಥ ಬನ್ನಿಕೊಪ್ಪ ಅವರ ನಿರ್ಮಿತಿ ಕೇಂದ್ರ, ಮನೆ, ಹುಲಗಿಯಲ್ಲಿನ ಲಾಡ್ಜ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ ನಗರದ ಮಂಗಲಾ ಆಸ್ಪತ್ರೆ ಹಿಂಭಾಗದಲ್ಲಿರುವ ನಿವಾಸದ ಮೇಲೂ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬೀದರ್ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ
ಬೀದರ್ ಜಿಲ್ಲೆಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ವಿಜಯಕುಮಾರ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿಟಗುಪ್ಪ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಜಯಕುಮಾರ್ ಅಕ್ರಮದ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಹುಮ್ನಾಬಾದ ಪಟ್ಟಣದ ಟೀಚರ್ ಕಾಲೋನಿ, ಹುಚಕನಳ್ಳಿ ಗ್ರಾಮದ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನು ದಾಳಿ ವೇಳೆ ಲೋಕಾಯುಕ್ತ ಪೊಲೀಸರು ವಿಜಯಕುಮಾರ್ ನಿವಾಸದಲ್ಲಿ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶಿಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಡಿವೈಎಸ್‌ಪಿ ಓಲೇಕಾರ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ತುಮಕೂರು ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ
ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕ ನಾಗರಾಜು ಅವರ ಸಪ್ತಗಿರಿ ಬಡಾವಣೆಯಲ್ಲಿರುವ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆಪಡೆದು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಧಾರವಾಡ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ
ಆದಾಯಕ್ಕೂ ಮೀರಿ ಹೆಚ್ಚು ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆ ಧಾರವಾಡದಲ್ಲಿಯೂ ಲೋಕಾಯುಕ್ತ ದಾಳಿ ನಡೆದಿದೆ. ಬೆಳಗಾವಿ ಪಾಲಿಕೆ ಸಹಾಯಕ ಆಯುಕ್ತ ಸಂತೋಷ ಆನಿಶೆಟ್ಟರ್ ಅವರ ಧಾರವಾಡದ ಸಪ್ತಾಪುರ ಬಡಾವಣೆಯ ಮಿಚಿಗನ್ ಲೇಔಟ್ನಲ್ಲಿನ ನಿವಾಸದ ಮೇಲೆ ದಾಳಿಯಾಗಿದೆ.
ನಿಶೆಟ್ಟರ್ ಈ ಮೊದಲು ಹುಬ್ಬಳ್ಳಿ ಧಾರವಾಡ ಪಾಲಿಕೆಯಲ್ಲಿದ್ದು, ಕೆಲ ವರ್ಷಗಳ ಹಿಂದಯಷ್ಟೇ ಬೆಳಗಾವಿಗೆ ವರ್ಗಾವಣೆ ಆಗಿದ್ದರು.
ಸಂತೋಷ ಆನಿಶೆಟ್ಟರ್ ಮನೆಯಲ್ಲಿ ದಾಖಲೆಗಳ ಪರಿಶೀಲನೆ ಆರಂಭವಾಗಿದ್ದು, ಈ ವೇಳೆ ಚಿನ್ನ, ಬೆಳ್ಳಿ, ಬ್ಯಾಂಕ್ ಬ್ಯಾಲೆನ್ಸ್‌ವುಳ್ಳ ಖಾತೆ ಪುಸ್ತಕ ಹಾಗೂ ಅನೇಕ ಅಕ್ರಮವಾಗಿ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications