ಮತದಾರರಿಗೆ ಆಮಿಷ: ಸಚಿವ ಪ್ರಿಯಾಂಕ್ ಖರ್ಗೆಗೆ ಸಮನ್ಸ್
ಬೆಂಗಳೂರು, ಆಗಸ್ಟ್ 03: ಚಿತ್ತಾಪುರದ ಕಾಂಗ್ರೆಸ್ ಶಾಸಕ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಐಟಿ & ಬಿಟಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆಗೆ ಕರ್ನಾಟಕ ಹೈಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.
ಈ ವಿಧಾನಸಭೆ ಚುನಾವಣೆಯಲ್ಲಿ ಉಚಿತ ಗ್ಯಾರಂಟಿಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿ ಗೆದ್ದಿರುವ ಆರೋಪದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಕೆಯಾಗಿದೆ.

ಪ್ರಿಯಾಂಕ್ ಖರ್ಗೆಯವರ ಆಯ್ಕೆ ಅಸಿಂಧುಗೊಳಿಸಬೇಕೆಂದು ಕೋರಿ ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಅಶ್ವಥರಾಮ ರಾಠೋಡ್ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ಜಿ. ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ಅರ್ಜಿ ಸಂಬಂಧ ಸೆ.5ಕ್ಕೆ ವಿಚಾರಣೆಗೆ ಹಾಜರಾಗುವಂತೆ ಪ್ರಿಯಾಂಕ್ ಖರ್ಗೆಗೆ ಸಮನ್ಸ್ ಜಾರಿಗೊಳಿಸಲಾಗಿದೆ.
ಅರ್ಜಿದಾರರ ವಾದ; ಅರ್ಜಿದಾರರ ಪರ ವಕೀಲೆ ಪ್ರಮೀಳಾ ನೇಸರ್ಗಿ ವಾದ ಮಂಡಿಸಿ, ಪ್ರತಿವಾದಿ ಸುಳ್ಳು ಜಾತಿ ಪ್ರಮಾಣಪತ್ರ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದಾರೆ ಎಂದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಿತ್ತಾಪೂರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಿಯಾಂಕ್ ಖರ್ಗೆ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಚುನಾವಣಾ ಪ್ರಮಾಣಪತ್ರದಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿದ್ದಾರೆ.
ಎಸ್ಸಿ ಜಾತಿ ಪ್ರಮಾಣಪತ್ರದ ಬದಲು ಗ್ರಾಮ ಪಂಚಾಯಿತಿ ಚುನಾವಣೆಗೆ ಸಲ್ಲಿಸಲಾಗುವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಅದೂ ಸಹ 2021 ಪ್ರಮಾಣ ಪತ್ರವಾಗಿದೆ. ಅದೇ ಅವರ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆಯೂ ಅಸಮರ್ಪಕ ಮತ್ತು ಖೊಟ್ಟಿ ದಾಖಲೆಗಳನ್ನು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿಆವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಗ್ಯಾರಂಟಿ ಯೋಜನೆ ಆಮಿಷ: ಅದೇ ರೀತಿ ಕಾಂಗ್ರೆಸ್‌ನಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಪ್ರಿಯಾಂಕ್ ಖರ್ಗೆ ಮತದಾರರಿಗೆ ಆಮಿಷ ಒಡ್ಡಿದ್ದು, ಇದು ಲಂಚ ಹಾಗೂ ಭ್ರಷ್ಟಾಚಾರಕ್ಕೆ ಸಮವಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123 (1) ಪ್ರಕಾರ ಮತ್ತು ಸೆಕ್ಷನ್ 123 (2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ.
ಸೆಕ್ಷನ್ 123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದೂ ಅಪರಾಧವಾಗಿದೆ. ಗ್ಯಾರಂಟಿ ಯೋಜನೆಗಳು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿದೆ. ಮತದಾರರಿಗೆ ಆಮಿಷವೊಡ್ಡುವುದು ಪ್ರಜಾಪ್ರತಿನಿಧಿ ಕಾಯ್ದೆಯ ಅನ್ವಯ ಅಪರಾಧ ಹಾಗೂ ಚುನಾವಣಾ ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.












Click it and Unblock the Notifications