Madal Virupakshappa; ಲೋಕಾಯುಕ್ತ ಕಚೇರಿಗೆ ಬಿಜೆಪಿ ಶಾಸಕರ ಆಗಮನ
ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲಂಚ ಪ್ರಕರಣದ ತನಿಖೆಗಾಗಿ ಲೋಕಾಯುಕ್ತರ ಮುಂದೆ ಹಾಜರಾಗಿದ್ದಾರೆ.
ಬೆಂಗಳೂರು, ಮಾರ್ಚ್ 09; ಲಂಚ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಚನ್ನಗಿರಿಯ ಬಿಜೆಪಿ ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪ ಲೋಕಾಯುಕ್ತ ತನಿಖಾಧಿಕಾರಿಗಳ ಮುಂದೆ ಹಾಜರಾದರು. ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡುವಾಗ ತನಿಖಾಧಿಕಾರಿ ಮುಂದೆ 48 ಗಂಟೆಗಳಲ್ಲಿ ಹಾಜರಾಗಬೇಕು ಎಂದು ಸೂಚನೆ ನೀಡಿತ್ತು.
ಗುರುವಾರ ಚನ್ನಗಿರಿಯ ಬಿಜೆಪಿ ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪ ವಕೀಲರ ಜೊತೆ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಆಗಮಿಸಿದರು. ಲಂಚ ಪ್ರಕರಣದ ತನಿಖಾಧಿಕಾರಿ ಅಂಥೋನಿ ಜಾನ್ ಕಚೇರಿಯ ಮೂರನೇ ಮಹಡಿಯಲ್ಲಿ ಶಾಸಕರ ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಶಾಸಕರು ನಿರೀಕ್ಷಣಾ ಜಾಮೀನು ಪಡೆದಿದ್ದು, ಬಂಧನ ಭೀತಿಯಿಂದ ಪಾರಾಗಿದ್ದಾರೆ.

ದಾವಣಗೆರೆಯಿಂದ ಬುಧವಾರವೇ ಬೆಂಗಳೂರಿಗೆ ಕೆ. ಮಾಡಾಳು ವಿರೂಪಾಕ್ಷಪ್ಪ ಬೆಂಗಳೂರಿಗೆ ಆಗಮಿಸಿದ್ದರು. ವಕೀಲರ ಜೊತೆ ಚರ್ಚೆ ನಡೆಸಿ, ಅವರ ಜೊತೆಗೆ ಇಂದು ಲೋಕಾಯುಕ್ತ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಸಂಜೆಯ ತನಕ ಶಾಸಕರ ವಿಚಾರಣೆ ಮುಂದುವರೆಯುವ ಸಾಧ್ಯತೆ ಇದೆ. ಮಂಗಳವಾರ ಹೈಕೋರ್ಟ್ ಮಧ್ಯಂತರ ಜಾಮೀನು ನೀಡುವಾಗ 48 ಗಂಟೆಗಳಲ್ಲಿ ವಿಚಾರಣೆಗೆ ಹಾಜರಾಗಬೇಕು ಎಂದು ಷರತ್ತು ಹಾಕಿತ್ತು.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಟೆಂಡರ್‌ಗೆ ಪ್ರಶಾಂತ್ ಮಾಡಾಳ್ 40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿದ್ದರು. ಪ್ರಶಾಂತ್ ಮಾಡಾಳ್ ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪ ಪುತ್ರ. ಲೋಕಾಯುಕ್ತರು ಪ್ರಶಾಂತ್ ಮಾಡಾಳ್ ಮನೆ ಮೇಲೆ ದಾಳಿ ಮಾಡಿದಾಗ 6 ಕೋಟಿ ರೂ. ಹಣ ಪತ್ತೆಯಾಗಿತ್ತು. ಈ ಪ್ರಕರಣದಲ್ಲಿ ಶಾಸಕರು ಮೊದಲ ಆರೋಪಿ ಎಂದು ಲೋಕಾಯುಕ್ತ ಎಫ್‌ಐಆರ್ ದಾಖಲು ಮಾಡಿದ್ದಾರೆ.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಅಧ್ಯಕ್ಷರಾಗಿದ್ದರು. ಪುತ್ರನ ಲಂಚ ಪ್ರಕರಣ ಬೆಳಕಿಗೆ ಬಂದ ಬಳಿಕ ಮುಖ್ಯಮಂತ್ರಿಗಳ ಸೂಚನೆಯಂತೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ನೀಡುವಾಗ ಶಾಸಕರು ಕೆಎಸ್‌ಡಿಎಲ್ ಕಚೇರಿಗೆ ಕೋರ್ಟ್ ಒಪ್ಪಿಗೆ ಇಲ್ಲದಂತೆ ಭೇಟಿ ನೀಡುವಂತಿಲ್ಲ ಎಂದು ಸೂಚನೆ ನೀಡಿದೆ. ಲೋಕಾಯುಕ್ತ ಅಧಿಕಾರಿಗಳು ಬುಧವಾರ ಕಚೇರಿಗೆ ಭೇಟಿ ನೀಡಿ ಅಲ್ಲಿಯೂ ಪರಿಶೀಲನೆ ನಡೆಸಿದ್ದರು.












Click it and Unblock the Notifications