ರೈತರ ಬೆಳೆ ವಿಮೆ ಪರಿಹಾರ ವಿತರಣೆ, ಪಾವತಿಯಲ್ಲಿ ಭಾರೀ ವ್ಯತ್ಯಾಸ: ಅಧಿಕಾರಿಗಳಿಗೆ ಸಚಿವರ ಖಡಕ್ ಸೂಚನೆ
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ (2025-26) ಸಾಲಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ವಿಮಾ ಪರಿಹಾರ ಮೊತ್ತದ ನಿರ್ಧರಿಸುವಲ್ಲಿ ಹಾಗೂ ಪಾವತಿಸುವಲ್ಲಿ ಸಾಕಷ್ಟು ವ್ಯತ್ಯಾಸ ಕಂಡು ಬಂದಿದೆ. ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಸಚಿವರು ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಇಂದು ಗುರುವಾರ ಬೆಳೆ ವಿಮೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ವಿಮಾ ಪರಿಹಾರ ನಿರ್ಧರಿಸುವಲ್ಲಿ ಹಾಗೂ ಪಾವತಿಗೆ ಸಂಬಂಧಿಸಿದಂತೆ ಈವರೆಗೆ ಕೈಗೊಂಡಿರುವ ಎಲ್ಲ ಕ್ರಮಗಳನ್ನು ಕೂಲಂಕಷವಾಗಿ ಪರಿಶೀಲಿಸಿದರು. ಈ ವೇಳೆ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ರೈತರ ಬೆಳೆ ಪರಿಹಾರ, ವಿಮೆ ವಿಳಂಬ ಕುರಿತು ಪಾವತಿಯನ್ನು ಸಮಗ್ರವಾಗಿ ಮರು ಪರಿಶೀಲನೆ ನಡೆಸುವಂತೆ ಹೇಳಿದರು.

ಇದಕ್ಕೂ ಮೊದಲು ಸಭೆಯಲ್ಲಿ ಹೊಸನಗರ ಮತ್ತು ತೀರ್ಥಹಳ್ಳಿ ಭಾಗದ ರೈತರ ನಿಯೋಗ ಭಾಗವಹಿಸಿ, ಬೆಳೆ ವಿಮೆ ಪರಿಹಾರ ನಿರ್ಧರಣೆ ಮತ್ತು ಪಾವತಿಯಲ್ಲಿ ತಮಗಾಗಿರುವ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತರಲಾಯಿತು.
ರೈತಪರ ನಿರ್ಧಾರ ಕೈಗೊಳ್ಳಿ
ಸಭೆಯಲ್ಲಿ ರೈತರ ಅಹವಾಲುಗಳನ್ನು ಆಲಿಸಿದ ಸಚಿವರು, ಸರ್ಕಾರದ ನಿರ್ಧಾರಗಳು ಸದಾ ರೈತಪರವಾಗಿರಬೇಕು. ಕೃಷಿ, ತೋಟಗಾರಿಕೆ ಹಾಗೂ ಹವಾಮಾನ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಬಾರದು ಎಂದು ನಿರ್ದೇಶಿಸಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಕಾಶ್ ನಿಟ್ಟಾಲಿ ಅವರು ಆನ್‌ಲೈನ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಅಭಿಷೇಕ್, ವಿಪತ್ತು ನಿರ್ವಹಣಾ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಕೇಂದ್ರಕ್ಕೆ 3 ಬಾರಿ ಮನವಿ: ಪರಮೇಶ್ವರ್
ಕರ್ನಾಟಕ ಬರ ಪರಿಸ್ಥಿತಿಗೆ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಈಗಾಗಲೇ ರಾಜ್ಯದಿಂದ ಮೂರು ಬಾರಿ ಮನವಿ ಸಲ್ಲಿಸಲಾಗಿದೆ. ಕಳೆದ ಎರಡು ತಿಂಗಳಿನಿಂದ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಪರಿಹಾರವಾಗಿ ಒಟ್ಟು ₹22 ಸಾವಿರ ಕೋಟಿ ನೀಡುವಂತೆ ಮನವಿ ಮಾಡಲಾಗಿದೆ. ಕೇಂದ್ರ ಸರ್ಕಾರದ ತಂಡಗಳು ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿಯನ್ನೂ ಸಲ್ಲಿಸಿವೆ. ಆದರೂ ಪರಿಹಾರ ಬಿಡುಗಡೆಗೆ ಕೇಂದ್ರದಿಂದ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಇತ್ತೀಚೆಗೆ ಬೇಸರ ಹೊರ ಹಾಕಿದ್ದರು.
ಇನ್ನಷ್ಟು ಸಮಯ ಕಾದು ನೋಡಿ, ಬಳಿಕ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಮುಂದಿನ ಕಾನೂನು ಕ್ರಮಗಳ ಕುರಿತು ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
ಬರ ಪರಿಹಾರದ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು. ಬರ ಯಾರನ್ನೂ ಕೇಳಿ ಬರುವುದಿಲ್ಲ. ರೈತರು ಸಂಕಷ್ಟದಲ್ಲಿರುವಾಗ ರಾಜಕೀಯ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಒಬ್ಬರ ಮೇಲೊಬ್ಬರು ಆರೋಪ ಮಾಡುವುದಕ್ಕಿಂತ ರೈತರ ನೆರವಿಗೆ ನಿಲ್ಲುವುದು ಮುಖ್ಯ. ಬರದ ವಿಚಾರದಲ್ಲಿ ರಾಜಕೀಯ ಮಾಡುವುದು ಎಷ್ಟು ಸರಿ ಎಂಬುದನ್ನು ರೈತರು ಪ್ರಶ್ನಿಸುತ್ತಾರೆ. ರಾಜಕೀಯ ಮಾಡಲು ಬೇರೆ ವಿಚಾರಗಳಿವೆ. ರೈತರ ಸಂಕಷ್ಟದ ಸಂದರ್ಭದಲ್ಲಿ ರಾಜಕೀಯ ಮಾಡದಂತೆ ಅವರು ಕೋರಿದರು.




Click it and Unblock the Notifications
