ಪಿಪಿಪಿ ಮಾದರಿಯಲ್ಲಿ ಕರ್ನಾಟಕದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣ
ಬೆಂಗಳೂರು, ಫೆಬ್ರವರಿ 27: ಕರ್ನಾಟಕ ಸರ್ಕಾರ ಪ್ರತಿ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಮುಂದಾಗಿದೆ. ಯಾವ ಜಿಲ್ಲೆಯಲ್ಲಿ ಈ ಮಾದರಿ ಕಾಲೇಜುಗಳಿಲ್ಲವೋ ಅಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಕಾಲೇಜು ನಿರ್ಮಿಸಲಾಗುತ್ತದೆ. ಕರ್ನಾಟಕದಲ್ಲಿ ಸದ್ಯ 71 ಮೆಡಿಕಲ್ ಕಾಲೇಜುಗಳಿದ್ದು, ದೇಶದಲ್ಲಿಯೇ ರಾಜ್ಯ ಎರಡನೇ ಸ್ಥಾನದಲ್ಲಿದೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಈ ಕುರಿತು ಮಾತನಾಡಿದ್ದಾರೆ. "ಪ್ರತಿ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುವುದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಮೆರಿಟ್ ಆಧಾರದ ಸೀಟುಗಳ ಸಂಖ್ಯೆ ಹೆಚ್ಚಲಿದ್ದು, ಅವರಿಗೆ ಸೀಟು ಸಿಗಲಿದ್ದು, ವ್ಯಾಸಂಗಕ್ಕೆ ಅನುಕೂಲವಾಗಲಿದೆ" ಎಂದು ಹೇಳಿದ್ದಾರೆ.

" ಕರ್ನಾಟಕ ಸರ್ಕಾರ ಪ್ರತಿ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲು ಮುಂದಾಗಿದೆ. ಸದ್ಯ ರಾಜ್ಯದಲ್ಲಿ 71 ಮೆಡಿಕಲ್ ಕಾಲೇಜು, 800ಕ್ಕೂ ಅಧಿಕ ನರ್ಸಿಂಗ್ ಕಾಲೇಜುಗಳಿವೆ. ಗುಣಮಟ್ಟದ ವೈದ್ಯಕೀಯ ಶಿಕ್ಷಣ ನೀಡುವಲ್ಲಿ ರಾಜ್ಯ ಉತ್ತಮ ಹೆಸರು ಪಡೆದಿದೆ" ಎಂದು ಸಚಿವರು ತಿಳಿಸಿದ್ದಾರೆ.
ಪಿಪಿಪಿ ಮಾದರಿ: "ಯಾವ ಯಾವ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು ಇಲ್ಲವೋ ಅಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಕಾಲೇಜುಗಳನ್ನು ಆರಂಭಿಸಲಾಗುತ್ತದೆ. ಭಾರತದ ವೈದ್ಯರಿಗೆ ವಿದೇಶಗಳಲ್ಲಿಯೂ ಬೇಡಿಕೆ ಇದೆ. ಕಾಲೇಜುಗಳಿಂದ ಬಡವರಿಗೆ ಉತ್ತಮ ಚಿಕಿತ್ಸೆ ಸಿಗುವ ಜೊತೆಗೆ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣವೂ ಸಿಗಲಿದೆ" ಎಂದು ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.
2024ರ ನವೆಂಬರ್‌ನಲ್ಲಿ ಕರ್ನಾಟಕ ಸರ್ಕಾರ ಪ್ರಸ್ತುತ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಹೊಂದಿರದ 11 ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಹೊಸ ಕಾಲೇಜು ನಿರ್ಮಾಣ ಮಾಡಲು ಚಿಂತನೆ ನಡೆಸಿತ್ತು. ಮಾರ್ಚ್ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದು, ಬಜೆಟ್‌ನಲ್ಲಿ ಹೊಸ ಕಾಲೇಜು ನಿರ್ಮಾಣದ ಘೋಷಣೆ ನಿರೀಕ್ಷೆ ಮಾಡಲಾಗಿದೆ.
ಸರ್ಕಾರದ ಮಾಹಿತಿಯಂತೆ ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಾಗಲಕೋಟೆ, ಕೋಲಾರ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ವಿಜಯಪುರ, ವಿಜಯನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಪ್ರಸ್ತಾವನೆ ಸಿದ್ಧಗೊಳಿಸಲಾಗಿದೆ.
"ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣದ ಜೊತೆಗೆ ಮೆರಿಟ್ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಬೇಕು ಎಂಬ ಆಶಯದೊಂದಿಗೆ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಕಾಲೇಜುಗಳು ಕಾರ್ಯಾರಂಭ ಮಾಡಿವೆ. ಉಳಿದ ಜಿಲ್ಲೆಯಲ್ಲಿಯೂ ಕಾಲೇಜು ನಿರ್ಮಿಸಲಾಗುತ್ತದೆ" ಎಂದು ಸಚಿವರು ಹೇಳಿದ್ದಾರೆ.
2024ರಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ 2024ರಲ್ಲಿ ರಾಜ್ಯದಲ್ಲಿ ಹೊಸದಾಗಿ ಮೂರು ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲು ಒಪ್ಪಿಗೆಯನ್ನು ನೀಡಿತ್ತು. ಇದರಿಂದಾಗಿ 350 ಹೆಚ್ಚುವರಿ ಸೀಟುಗಳು ಸಿಕ್ಕಿದ್ದು, ರಾಜ್ಯದಲ್ಲಿ ಒಟ್ಟು ಲಭ್ಯವಿರುವ ಸೀಟುಗಳ ಸಂಖ್ಯೆ 12,095 ಆಗಿದೆ.
ಕರ್ನಾಟಕ ಸರ್ಕಾರ ಒಟ್ಟು 5 ವೈದ್ಯಕೀಯ ಕಾಲೇಜುಗಳ ಒಪ್ಪಿಗೆಗೆ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಿತ್ತು. ಆದರೆ ಮೂರು ಕಾಲೇಜು ನಿರ್ಮಾಣಕ್ಕೆ ಒಪ್ಪಿಗೆ ಸಿಕ್ಕಿತ್ತು. ರಾಮನಗರ, ಕನಕಪುರದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ತಾಂತ್ರಿಕ ಕಾರಣದಿಂದ ಅನುಮತಿ ಸಿಕ್ಕಿರಲಿಲ್ಲ.












Click it and Unblock the Notifications