ವೈದ್ಯಕೀಯ ಪರೀಕ್ಷೆ: ಮೈಕ್ರೊ ಬಯಾಲಜಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಂಗಳೂರು: ರಾಜ್ಯದಾದ್ಯಂತ ನಡೆಯುತ್ತಿರುವ ವೈದ್ಯಕೀಯ ಪರೀಕ್ಷೆಯ ದ್ವಿತೀಯ ವರ್ಷದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.
ಶನಿವಾರ ನಡೆಯುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳ ಎರಡನೆಯ ವರ್ಷದ ಮೈಕ್ರೊ ಬಯಾಲಜಿ-1 ವಿಷಯದ ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗವಾಗಿ ಹರಿದಾಡುತ್ತಿದೆ.
ಚಿತ್ರದುರ್ಗದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಕುರಿತು ಅನುಮಾನ ವ್ಯಕ್ತವಾಗಿದೆ.
ಶನಿವಾರ ಬೆಳಿಗ್ಗೆ 9 ಗಂಟೆಗೆ ಪರೀಕ್ಷೆ ಆರಂಭವಾಗಬೇಕಿತ್ತು. 9.10ರ ಸುಮಾರಿಗೆ ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರದಾಡುತ್ತಿರುವುದು ಪತ್ತೆಯಾಗಿದೆ.

ಚಿತ್ರದುರ್ಗದ ಕೆಲ ಕಾಲೇಜುಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರಬಹುದು. ಇದರಲ್ಲಿ ವೈದ್ಯಕೀಯ ಕಾಲೇಜುಗಳ ಸಿಬ್ಬಂದಿ ಶಾಮೀಲಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಚಿತ್ರದುರ್ಗ ನಗರದ ಬಸವೇಶ್ವರ ವೈದ್ಯಕೀಯ ಕಾಲೇಜಿನಲ್ಲಿ ಪರೀಕ್ಷೆ ನಡೆಯುತ್ತಿದ್ದು, ಅಲ್ಲಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರಬಹುದು ಎಂಬ ಅಭಿಪ್ರಾಯ ಕೇಳಿಬಂದಿದೆ.

ಆದರೆ, ಬಸವೇಶ್ವರ ಮೆಡಿಕಲ್ ಕಾಲೇಜಿನಿಂದ ಪತ್ರಿಕೆ ಬಹಿರಂಗವಾಗಿಲ್ಲ ಎಂದು ಕಾಲೇಜಿನ ಪರೀಕ್ಷಾ ಮುಖ್ಯಸ್ಥ ಡಾ.ಪ್ರಶಾಂತ್ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಬಯಲಾಗಿರುವುದು ನಿಜ. ಮೈಕ್ರೋ ಬಯಾಲಜಿ ಪರೀಕ್ಷೆ ನಡೆಯುತ್ತಿದೆ. ಈ ಕಾಲೇಜಿನಿಂದ ಯಾವುದೇ ಪತ್ರಿಕೆ ಲೀಕ್ ಆಗಿಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಗೆ ಒಳಪಡಲು ಸಿದ್ಧ ಎಂದು ಪ್ರಶಾಂತ್ ತಿಳಿಸಿದ್ದಾರೆ.












Click it and Unblock the Notifications