ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ಹೆಚ್ಡಿಕೆ ನಿವಾಸದಲ್ಲಿ ಮಹತ್ವದ ಸಭೆ: ಚರ್ಚೆಯಾಗಿದ್ದೇನು?
ಬೆಂಗಳೂರು, ಮಾರ್ಚ್ 11: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ನಾಯಕರು ಭರ್ಜರಿ ತಯಾರಿ ನಡೆಸಿದ್ದು, ಆಡಳಿತರೂಢ ಕಾಂಗ್ರೆಸ್ ಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ರುಚಿ ತೋರಿಸಲು ಕಮಲ-ದಳ ನಾಯಕರು ಮಾಸ್ಟರ್ ಪ್ಲಾನ್ ನಡೆಸಿದ್ದು, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಸರಣಿ ಸಭೆಯನ್ನ ನಡೆಸುತ್ತಿದ್ದಾರೆ.
ಈಗಾಗಲೇ ಮಂಡ್ಯ, ಕೋಲಾರ ಕ್ಷೇತ್ರದ ನಾಯಕರ ಜೊತೆಗೆ ಅಭ್ಯರ್ಥಿ ಆಯ್ಕೆ ಹಾಗೂ ಮೈತ್ರಿ ನಾಯಕರ ನಡುವಿನ ಹೊಂದಾಣಿಕೆ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್ ಡಿ ಕುಮಾರಸ್ವಾಮಿ ಅವರು ಚಿಕ್ಕಬಳ್ಳಾಪುರ ಕ್ಷೇತ್ರದ ಜೆಡಿಎಸ್ ಮುಖಂಡರ ಜೊತೆಗೆ ಜೆ.ಪಿ.ನಗರದ ತಮ್ಮ ನಿವಾಸದಲ್ಲಿ ಭಾನುವಾರ ಸಭೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಸಂಸದರಾದ ಬಚ್ಚೇಗೌಡರು ಈಗಾಗಲೇ ರಾಜಕೀಯ ನಿವೃತ್ತಿ ಘೋಷಿಸಿದ್ದು, ಈ ಬಾರಿ ಚಿಕ್ಕಬಳ್ಳಾಪುರ ಕ್ಷೇತ್ರವನ್ನ ತಮಗೆ ಬಿಟ್ಟುಕೊಡುವಂತೆ ಜೆಡಿಎಸ್ ನಾಯಕರು ಬಿಜೆಪಿ ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದಾರೆ.

ಇನ್ನೂ ಬಿಜೆಪಿ ಜೊತೆಗೆ ಕ್ಷೇತ್ರ ಹಂಚಿಕೆ ಹಾಗೂ ಅಭ್ಯರ್ಥಿ ಘೋಷಣೆಗೂ ಮುನ್ನ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಜೆಡಿಎಸ್ ಮುಖಂಡರ ಸಭೆ ನಡೆಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಅಭ್ಯರ್ಥಿ ಯಾರೇ ಆದರೂ ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಮ್ಮ ಪಕ್ಷದ ಮೇಲಿದೆ. ಹೀಗಾಗಿ ಮಿತ್ರಪಕ್ಷ ಬಿಜೆಪಿ ಜತೆಗೂಡಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಮುಖಂಡರಿಗೆ ತಾಕೀತು ಮಾಡಿದರು.
ಈ ಸಭೆಯಲ್ಲಿ ಕ್ಷೇತ್ರದಲ್ಲಿನ ರಾಜಕೀಯ ಪರಿಸ್ಥಿತಿಗಳ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಿದ ಅವರು, ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ಮುಖಂಡರು ಮಾಡಿದ ಒತ್ತಾಯವನ್ನು ಕುಮಾರಸ್ವಾಮಿ ಅವರು ಹಾಗೂ ನಿಖಿಲ್ ಕುಮಾರಸ್ವಾಮಿ ಅವರು ನಯವಾಗಿ ತಿರಸ್ಕರಿಸಿದರು. ಜೆಡಿಎಸ್ -ಬಿಜೆಪಿ ಮೈತ್ರಿಯ ಬಗ್ಗೆ ಮುಖಂಡರಿಗೆ ಮನವರಿಕೆ ಮಾಡಿಕೊಟ್ಟ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು, ಮೈತ್ರಿ ಧರ್ಮಕ್ಕೆ ಕಟ್ಟುಬಿದ್ದು ಎಲ್ಲರೂ ಅಭ್ಯರ್ಥಿ ಪರವಾಗಿ ಕೆಲಸ ಮಾಡಬೇಕು. ಯಾರೇ ಅಭ್ಯರ್ಥಿಯಾದರೂ ಅವರು ಎನ್ ಡಿಎ ಅಭ್ಯರ್ಥಿಯೇ ಆಗಿರುತ್ತಾರೆ. ಅವರ ಗೆಲುವಿನ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು ಎಂದು ತಿಳಿಸಿದರು.
ಇದೇ ವೇಳೆ ಕ್ಷೇತ್ರದ ಅಭ್ಯರ್ಥಿ ಆಯ್ಕೆಯ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡಸಿದರು ಹಾಗೂ ಮುಖಂಡರಿಂದ ಸಲಹೆ ಪಡೆದು, ತಮ್ಮ ಅಭಿಪ್ರಾಯ ಸ್ಪಷ್ಟವಾಗಿ ಹೇಳಿದರು. ಕ್ಷೇತ್ರದಲ್ಲಿ ಪಕ್ಷಕ್ಕೆ ಅನ್ಯಾಯ ಆಗದಂತೆ ಎಚ್ಚರಿಕೆ ಹೆಜ್ಜೆಗಳನ್ನು ಇಡುವಂತೆ ಮನವಿ ಮಾಡಿದ ಮುಖಂಡರು, ಆಕಾಂಕ್ಷಿಗಳ ಬಗ್ಗೆಯೂ ಚರ್ಚೆ ನಡೆಸಿದರು. ಹಲವು ಅಭ್ಯರ್ಥಿಗಳ ಬಗ್ಗೆ ಸಭೆಯಲ್ಲಿ ಪ್ರಸ್ತಾಪವಾಯಿತು.
ಜೆಡಿಎಸ್- ಬಿಜೆಪಿ ಒಂದಾಗಿ ಎದುರಿಸಿದರೆ ಖಚಿತವಾಗಿ ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಗೆಲ್ಲಬಹುದು. ಹಿಂದೆ ಬಿ.ಎನ್. ಬಚ್ಚೇಗೌಡರ ಗೆಲುವಿನಲ್ಲಿ ಜೆಡಿಎಸ್ ಪಾತ್ರ ದೊಡ್ಡದಿತ್ತು. ಆದ್ದರಿಂದ ಈ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡುವಂತೆ ಬಿಜೆಪಿಯನ್ನು ಕೇಳಬೇಕು ಎಂದು ಕುಮಾರಸ್ವಾಮಿ ಅವರ ಮೇಲೆ ಕೆಲವು ಜೆಡಿಎಸ್ ನಾಯಕರು ಒತ್ತಡ ಹೇರಿದರು.
ಈ ಬಗ್ಗೆ ತಾವು ರಾಜ್ಯ ಬಿಜೆಪಿ ನಾಯಕರು, ಕೇಂದ್ರ ಬಿಜೆಪಿ ನಾಯಕರ ಜತೆ ಚರ್ಚೆ ನಡೆಸುವುದಾಗಿ ಮುಖಂಡರಿಗೆ ತಿಳಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಕ್ಷೇತ್ರ ಯಾವ ಪಕ್ಷದ ಪಾಲಾದರೂ ನಾವೆಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಎಲ್ಲಾ ಹಂತದಲ್ಲಿಯೂ ಮಿತ್ರಪಕ್ಷದ ಕಾರ್ಯಕರ್ತರು, ಮುಖಂಡರ ಜತೆ ವಿಶ್ವಾಸ-ನಂಬಿಕೆಯಿಂದ ದುಡಿಮೆ ಮಾಡಬೇಕು. ಅಭ್ಯರ್ಥಿ ಆಯ್ಕೆ ಬಗ್ಗೆ ಮಿತ್ರಪಕ್ಷದ ನಾಯಕರ ಜತೆ ಸಮಾಲೋಚನೆ ನಡೆಸುವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ವಿಧಾನಸಭೆಯ ಮಾಜಿ ಉಪ ಸಭಾಧ್ಯಕ್ಷರಾದ ಕೆ.ಎಂ.ಕೃಷ್ಣಾರೆಡ್ಡಿ, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಮಾಜಿ ಶಾಸಕರಾದ ಇ.ಕೃಷ್ಣಪ್ಪ, ಹೆಚ್.ಎಂ.ರಮೇಶ್ ಗೌಡ, ಡಾ.ಶ್ರೀನಿವಾಸ ಮೂರ್ತಿ, ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಮುನೇಗೌಡ, ಕ್ಷೇತ್ರದ ಹಿರಿಯ ಮುಖಂಡರಾದ ಮುನೇಗೌಡ, ಡಿ. ಜೆ.ನಾಗರಾಜ್ ರೆಡ್ಡಿ, ನರಸಿಂಹ ಮೂರ್ತಿ, ಹರೀಶ್ ಗೌಡ , ಅಪ್ಪಣ್ಣಯ್ಯ, ಮಧು, ಹೊಸಕೋಟೆ ಶ್ರೀಧರ್ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.












Click it and Unblock the Notifications