ಮೇಕೆದಾಟು ಯೋಜನೆ; ಸಿಎಂಗೆ ಕೇಂದ್ರ ಸಚಿವರ ತಿರುಗೇಟು!
ಬೆಂಗಳೂರು, ಅಕ್ಟೋಬರ್ 30: ಕರ್ನಾಟಕ ಸರ್ಕಾರದ ಪ್ರಸ್ತಾವಿತ ಮೇಕೆದಾಟು ಯೋಜನೆ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಚರ್ಚೆಗಳು ಜೋರಾಗಿವೆ. ಈ ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ.
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೇಂದ್ರ ಜಲಶಕ್ತಿ ಖಾತೆ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮೇಕೆದಾಟು ಯೋಜನೆ ವಿಚಾರದಲ್ಲಿ ತಿರುಗೇಟು ನೀಡಿದ್ದಾರೆ. ಸೋಮವಾರ ಈ ಕುರಿತು ಅವರು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ.

ಗಜೇಂದ್ರ ಸಿಂಗ್ ಶೇಖಾವತ್ ಟ್ವೀಟ್ ವಿವರ
'ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ನವರೇ, ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ' ಎಂದು ಸಚಿವರು ಟ್ವೀಟ್‌ನಲ್ಲಿ ಹೇಳಿದ್ದಾರೆ.
'ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ನಿಮಗೆ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ದ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಗಳ ಸರಣಿಯನ್ನೇ ಹರಿಬಿಟ್ಟಂತೆ ತೋರುತ್ತದೆ. ಹೀಗಾಗಿ ವಾಸ್ತವ ಏನೆಂಬುದನ್ನು ನಾವೇ ಹೇಳಬೇಕಾಗಿದೆ' ಎಂದು ತಿಳಿಸಿದ್ದಾರೆ.
'ಮೊದಲನೆಯದಾಗಿ CWMAಯ ಹಲವು ಸಭೆಗಳಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ಕುರಿತು ಚರ್ಚೆಯನ್ನು ಅಜೆಂಡಾ ವಿಷಯವಾಗಿ ಸೇರಿಸಲಾಗಿತ್ತು. ಆದರೆ ಈ ಕಾರ್ಯಸೂಚಿಯ ಬಗ್ಗೆ ನೆರೆಯ ರಾಜ್ಯಗಳ ನಡುವೆ ಒಮ್ಮತ ಮೂಡದೇ ಇರುವುದರಿಂದ ಈ ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗಿಲ್ಲ. ಇದು ಕೇಂದ್ರದ ತಪ್ಪಲ್ಲ'
'ಕಳಸಾ ಮತ್ತು ಬಂಡೂರ ನಾಲೆ ಯೋಜನೆ ಡಿಪಿಆರ್‌ಗಳನ್ನು ಈಗಾಗಲೇ ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) ಕೆಲವು ಷರತ್ತುಗಳೊಂದಿಗೆ ಅನುಮೋದಿಸಿದೆ ಮತ್ತು ಅದನ್ನು ಕರ್ನಾಟಕ ಸರ್ಕಾರಕ್ಕೆ ಈಗಾಗಲೇ ತಿಳಿಸಲಾಗಿದೆ. ಈ ಮಾಹಿತಿಯನ್ನು ನೀವು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದೀರಲ್ಲವೇ?'
ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ @siddaramaiah ನವರೇ,
— Gajendra Singh Shekhawat (@gssjodhpur) October 30, 2023
ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ.
ಮೇಕೆದಾಟು ಯೋಜನೆಯ…
'2017-17ರಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY)- ತ್ವರಿತ ನೀರಾವರಿ ಕಾರ್ಯಕ್ರಮದ ಅಡಿಯಲ್ಲಿ ಆದ್ಯತೆ ನೀಡಲಾದ ಕರ್ನಾಟಕದ 5 ಯೋಜನೆಗಳಲ್ಲಿ, ಮೂರು ಪೂರ್ಣಗೊಂಡಿದೆ. ಎರಡು ಕಾಮಗಾರಿ ಚಾಲನೆಯಲ್ಲಿದೆ. ಈ ಯೋಜನೆಗಾಗಿ ಕೇಂದ್ರದ ಪಾಲಿನ 1238.30 ಕೋಟಿ ರೂ.ಗಳ ಪೈಕಿ 1190.05 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದೆ. ಇದು ರಾಜ್ಯದ ಹಣಕಾಸು ಸಚಿವಾಲಯವನ್ನೂ ನಿಭಾಯಿಸುತ್ತಿರುವ ನಿಮ್ಮ ಗಮನಕ್ಕೆ ಬಾರದಿರುವುದು ಚೋದ್ಯವಲ್ಲವೇ?'
'ಅಟಲ್ ಭೂ ಜಲ ಯೋಜನೆ ಅಡಿಯಲ್ಲಿ, ಕರ್ನಾಟಕಕ್ಕೆ ಕೇಂದ್ರದಿಂದ ಈಗಾಗಲೇ 629.54 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆದರೆ 28.10.2023ರ ವರೆಗೆ ಕೇವಲ 274.05 ಕೋಟಿ ರೂ. ಮಾತ್ರ ಬಳಕೆ ಮಾಡಿಕೊಂಡಿದ್ದೀರಿ' ಎಂದು ಸಚಿವರು ವಿವರಣೆ ಕೊಟ್ಟಿದ್ದಾರೆ.
'ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡುವಾಗ ಕನಿಷ್ಠ ಆತ್ಮಸಾಕ್ಷಿಯನ್ನಾದರೂ ಪ್ರಶ್ನಿಸಿಕೊಳ್ಳಿ. ಇಲ್ಲವಾದರೆ ಸುಳ್ಳಿನ ಉಪಾಸನೆಯೇ ನಿಮ್ಮ ನಿತ್ಯಕರ್ಮವೆಂದು ಕರ್ನಾಟಕದ ಜನ ನಿಮ್ಮ ಬಗ್ಗೆ ಕನಿಕರ ಹಾಗೂ ತಿರಸ್ಕಾರವನ್ನು ತೋರಬಹುದು' ಎಂದು ಸಚಿವರು ಎಚ್ಚರಿಸಿದ್ದಾರೆ.
ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, 'ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕಾದ ನಷ್ಟ ತುಂಬಿಕೊಡಲು 15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ರೂ.5,495 ಕೋಟಿ ವಿಶೇಷ ಅನುದಾನ ನೀಡುವಂತೆ ಶಿಫಾರಸು ಮಾಡಿತ್ತು. ನಮ್ಮದೇ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿ, ವಿತ್ತ ಸಚಿವೆಯಾಗಿರುವ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಶಿಫಾರಸನ್ನು ತಿರಸ್ಕರಿಸಿ, ನಾಡದ್ರೋಹ ಎಸಗಿದರು' ಎಂದು ಪೋಸ್ಟ್ ಹಾಕಿದ್ದರು.
'ಪ್ರಧಾನಿ Narendra Modi ಅವರೇ, ಮೋದಿ ಮುಖ ನೋಡಿ ಮತನೀಡಿ ಎನ್ನುವ ನಿಮ್ಮವರ ಅನ್ಯಾಯಕ್ಕೆ ಕನ್ನಡಿಗರು ಯಾರ ಬಳಿ ನ್ಯಾಯ ಕೇಳಬೇಕು?. ಕೇಂದ್ರ Bharatiya Janata Party (BJP) ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ?. ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ #ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ #AnswerMadiModi' ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದರು. ಇದಕ್ಕೆ ಕೇಂದ್ರ ಸಚಿವರು ತಿರುಗೇಟು ನೀಡಿದ್ದಾರೆ.












Click it and Unblock the Notifications