ರಾಜ್ಯದಲ್ಲಿ ಮಧ್ಯಾಹ್ನದ ಬಿಸಿಯೂಟ ವಿಸ್ತರಣೆ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಮಾಹಿತಿ
Mid-day Meal Scheme: ರಾಜ್ಯದಲ್ಲಿ ಶಿಕ್ಷಣ ಇಲಾಖೆಯೂ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಲಿರುತ್ತದೆ. ಹಾಗೆಯೇ ಇದೀಗ ಬಿಸಿಯೂಟ ವಿಸ್ತರಣೆ ಕುರಿತು ಬಿಗ್ ಅಪ್ಡೇಟ್‌ವೊಂದನ್ನು ನೀಡಿದೆ. ಹಾಗಾದ್ರೆ, ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮಧ್ಯಾಹ್ನದ ಬಿಸಿಯೂಟವನ್ನು ಇಷ್ಟು ದಿನ ಬರೀ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಾಗುತ್ತಿತ್ತು. ಆದರೆ, ಇದೀಗ ಇದನ್ನು ವಿಸ್ತರಣೆ ಮಾಡುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಹಾಗಾದ್ರೆ, ಅದೇನು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಎಲ್‌ಕೆಜಿ, ಪಿಯುಸಿ ವಿದ್ಯಾರ್ಥಿಗಳಿಗೆ ವಿಸ್ತರಿಸಲು ರಾಜ್ಯ ಸರ್ಕಾರ ಗಟ್ಟಿ ನಿರ್ಧಾರ ಮಾಡಿದೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಈ ಘೋಷಣೆ ಮಾಡಿದ್ದಾರೆ.
ಈ ಮಹತ್ವದ ನಿರ್ಧಾರದಿಂದ ಅದೆಷ್ಟೋ ವಿದ್ಯಾರ್ಥಿಗಳ ಹಸಿವು ನೀಗಿಸಲು ಸಾಧ್ಯ ಆಗಲಿದೆ. ಹಳ್ಳಿಗಳಿಂದ ಕಾನ್ವೆಂಟ್ ಹಾಗೂ ಕಾಲೇಜುಗಳಿಗೆ ಪ್ರತಿನಿತ್ಯ ಏನೆಲ್ಲಾ ಅಂದರೂ ಲಕ್ಷಾಂತರ ವಿದ್ಯಾರ್ಥಿಗಳು ಬರುತ್ತಾರೆ. ಇದರಲ್ಲಿ ಬಹುತೇಕ ಮಂದಿ ಮಧ್ಯಾಹ್ನದ ಬಿಸಿಯೂಟ ಇಲ್ಲದೆ, ಹಸಿವಿನಿಂದ ಇರುತ್ತಾರೆ. ಇದೀಗ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಮಹತ್ವದ ನಿರ್ಧಾರದಿಂದ ಈ ಸಮಸ್ಯೆ ಬರೆಹರಿದಂತಾಗಲಿದೆ.
ಸಚಿವರು ಕೊಟ್ಟಿರುವ ಮಾಹಿತಿ ಪ್ರಕಾರ, ಈ ಮಹತ್ವದ ಯೋಜನೆಯು ಮುಂದಿನ ಶೈಕ್ಷಣಿಕ ವರ್ಷದಿಂದಲೇ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಪ್ರಸ್ತುತ ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಲಾಗುತ್ತಿದೆ. ಆದರೆ, ಗ್ರಾಮೀಣ ಭಾಗದ ಮತ್ತು ಬಡ ಕುಟುಂಬದ ಪಿಯುಸಿ ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಇಲ್ಲದೆ ಹಸಿದುಕೊಂಡು ಪರದಾಡುವುದನ್ನ ಗಮನಿಸಿದ ಸರ್ಕಾರ ಇವರಿಗೂ ಇದನ್ನು ವಿಸ್ತರಿಸುವ ಮಹತ್ವದ ನಿರ್ಧಾರಕ್ಕೆ ಕೈಹಾಕಿದೆ ಎನ್ನಬಹುದು.
ಇದೀಗ ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ಪೂರ್ವ ಪ್ರಾಥಮಿಕ ವಿಭಾಗಗಳಾಗಿರುವ ಎಲ್‌ಕೆಜಿ ಹಾಗೂ ಯುಕೆಜಿ ಮಕ್ಕಳಿಗೂ ಸಹ ಮಧ್ಯಾಹ್ನದ ಬಿಸಿಯೂಟ ನೀಡಲು ನಿರ್ಧರಿಸಿದೆ. ಅಪೌಷ್ಟಿಕತೆಯನ್ನು ಹೋಗಲಾಡಿಸಿ, ಮಕ್ಕಳ ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎನ್ನಲಾಗಿದೆ.
ವೆಚ್ಚದ ಮಾಹಿತಿ: ಬಿಸಿಯೂಟ ಯೋಜನೆಯ ವ್ಯಾಪ್ತಿಯನ್ನು ಪದವಿ ಪೂರ್ವ ಕಾಲೇಜುಗಳು ಮತ್ತು ಪ್ರಿ-ಪ್ರೈಮರಿ ಶಾಲೆಗಳಿಗೆ ವಿಸ್ತರಣೆ ಮಾಡುವುದರಿಂದ ಸರ್ಕಾರದ ಮೇಲೆ ಆರ್ಥಿಕ ಹೊರೆ ಬೀಳಲಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ, ಈ ಯೋಜನೆಗಾಗಿ ಶಿಕ್ಷಣ ಇಲಾಖೆಯು ವಾರ್ಷಿಕವಾಗಿ ಸುಮಾರು 200 ಕೋಟಿ ರೂಪಾಯಿಗಳಷ್ಟು ಹೆಚ್ಚುವರಿ ಅನುದಾನವನ್ನು ಮೀಸಲಿಡಬೇಕಾಗುತ್ತದೆ. ಆದರೂ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಸಲುವಾಗಿ ಸರ್ಕಾರ ಈ ವೆಚ್ಚವನ್ನು ಭರಿಸಲು ಸಿದ್ದವಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಆದ್ಯತೆ: ರಾಜ್ಯದಲ್ಲಿ ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವಂತೆ ಸರ್ಕಾರಿ ಶಾಲೆಗಳನ್ನು ರೂಪಾಂತರಿಸಲಾಗುತ್ತಿದೆ. ಇದರ ಭಾಗವಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳ ಸಬಲೀಕರಣಕ್ಕೆ ವಿಶೇಷ ಒತ್ತು ನೀಡಲಾಗುತ್ತಿದೆ.
ಕೇವಲ ಪಠ್ಯ ಬೋಧನೆಗೆ ಮಾತ್ರ ಸೀಮಿತ ಆಗದೆ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕ ಆಗುವಂತೆ ಎಲ್ಲಾ ಕೆಪಿಎಸ್ ಶಾಲೆಗಳಿಗೆ ಕಡ್ಡಾಯವಾಗಿ ಸಂಗೀತ ಶಿಕ್ಷಕರು ಮತ್ತು ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನೂ ರಾಜ್ಯದಲ್ಲಿ ಜನವರಿ ತಿಂಗಳ ಅಂತ್ಯದ ವೇಳೆಗೆ ಸುಮಾರು 900 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು. ಶಿವಮೊಗ್ಗದಲ್ಲಿ ನಡೆಯಲಿರುವ ಬೃಹತ್ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಶಾಲೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಸೌಲಭ್ಯದ ಜೊತೆಗೆ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತದೆ ಎಂದು ತಿಳಿಸಿದರು.












Click it and Unblock the Notifications