180 ಕೋಟಿ ರೂ. ವೆಚ್ಚದಲ್ಲಿ ರಾಯಣ್ಣನ ಹೆಸರಿನ ಮಿಲಿಟರಿ ಶಾಲೆ: ಸಿಎಂ
ಬೆಂಗಳೂರು, ಜನವರಿ 26: ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಮಿಲಿಟರಿ ಶಾಲೆ ತೆರೆಯಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸರ್ಕಾರ 180 ಕೋಟಿ ರೂ.ಗಳ ವೆಚ್ಚದಲ್ಲಿ ಬೃಹತ್ ಮಿಲಿಟರಿ ಶಾಲೆಯನ್ನು ಪ್ರಾರಂಭಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಿಳಿಸಿದರು. ಸಂಗೊಳ್ಳಿ ರಾಯಣ್ಣನ ಗುಣಧರ್ಮಗಳಾದ ದೇಶಭಕ್ತಿ, ಸ್ವಾಮಿ ಭಕ್ತಿ, ನಿಷ್ಠೆ, ಧೈರ್ಯ ಶೌರ್ಯ, ಸಾಹಸ ಗುರಿಗಳನ್ನು ಪ್ರಚಲಿತ ಸಮಾಜದಲ್ಲಿ ಜೀವಂತವಾಗಿಡಲು ರಾಜ್ಯ ಸರ್ಕಾರ ಯೋಚಿಸಿದೆ. ಹೀಗಾಗಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಹಾಕಿಸಲು ಇಂದೇ ಆದೇಶ ಹೊರಡಿಸಲಾಗುವುದು ಎಂದು ಪ್ರಕಟಿಸಿದರು.
ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 191ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು ಈಗಾಗಲೇ ಸರ್ಕಾರ ಈ ಉದ್ದೇಶಕ್ಕಾಗಿ 55 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಇದೇ ವರ್ಷ ಶಾಲೆಯ ಕಾಮಗಾರಿ ಪೂರ್ಣಗೊಳ್ಳಲಿದೆ. ರಕ್ಷಣಾ ಇಲಾಖೆ ಶಾಲೆಯ ಉಸ್ತುವಾರಿಯನ್ನು ವಹಿಸಿಕೊಳ್ಳಲು ಮಾತುಕತೆ ನಡೆದಿದೆ. ಪರಿಶೀಲನಾ ಕಾರ್ಯವೂ ನಡೆದಿದ್ದು, ರಕ್ಷಣಾ ಇಲಾಖೆ ಅದನ್ನು ಬಹುತೇಕವಾಗಿ ಮಿಲಿಟರಿ ಶಾಲೆಯಾಗಿ ಪರಿವರ್ತನೆ ಮಾಡಲಿದೆ. ಹಾಸ್ಟೆಲ್ ವ್ಯವಸ್ಥೆ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು 100 ಎಕರೆ ಪ್ರದೇಶದಲ್ಲಿ ಮಾಡಲಾಗುತ್ತಿದೆ ಎಂದರು.
ರಾಯಣ್ಣ ಹುತಾತ್ಮರಾದ ನಂದಗಡದಲ್ಲಿ ಅವರ ಸಮಾಧಿಯ ಅಭಿವೃದ್ಧಿ ಕಾರ್ಯವನ್ನು ಕೈಗೊಳ್ಳಲಾಗುವುದು. ಅವರ ಹುಟ್ಟೂರು ಸಂಗೊಳ್ಳಿಯಲ್ಲಿ 10 ಎಕರೆ ಜಮೀನು ರಾಕ್ ಗಾರ್ಡನ್ ನಿರ್ಮಾಣಕ್ಕೆ ಮಂಜೂರು ಮಾಡಲಾಗಿದೆ. ಮುಂದಿನ ಪೀಳಿಗೆಗೆ ರಾಯಣ್ಣನ ಜೀವನದ ಪರಿಚಯ ಮಾಡಿಕೊಡಲು ಈ ಸ್ಮಾರಕಗಳ ನಿರ್ಮಾಣವಾಗುತ್ತಿದೆ ಎಂದರು.

ನವದೆಹಲಿಯಲ್ಲಿ ರಾಯಣ್ಣನ ಪ್ರತಿಮೆ
ನವದೆಹಲಿಯಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಪ್ರತಿಮೆಯಿದೆ. ಚನ್ನಮ್ಮ ಇದ್ದ ಕಡೆ ರಾಯಣ್ಣ ಸಹ ಇರಬೇಕು. ನವದೆಹಲಿಯ ಸೂಕ್ತ ಸ್ಥಳದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಈಗಾಗಲೇ ಸಂಬಂಧ ಪಟ್ಟವರಿಗೆ ಪತ್ರ ಬರೆಯಲಾಗಿದೆ ಎಂದರು.
ಬೆಳಗಾವಿಯಲ್ಲಿ ಪ್ರತಿಮೆಗಳು ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುವರ್ಣ ಸೌಧದ ಮುಂದೆ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನ ಮೂರ್ತಿ ಸ್ಥಾಪನೆ ಮಾಡುವುದಾಗಿ ಘೋಷಿಸಲಾಗಿದೆ. ಮೂರ್ತಿ ಮಾಡುವವರೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ. ಆದಷ್ಟು ಶೀಘ್ರದಲ್ಲಿ ಈ ಮೂರ್ತಿಗಳು ಸ್ಥಾಪನೆಯಾಗಲಿವೆ ಎಂದರು.
ಅವರ ತ್ಯಾಗ, ಬಲಿದಾನ ನಮ್ಮೆಲ್ಲರಿಗೂ ಪ್ರೇರಣೆಯಾಗಲಿ. ಸ್ವಾತಂತ್ರ್ಯದ ನಂತರ ಹುಟ್ಟಿರುವ ನಾವು ದೇಶ ಕಟ್ಟಲು ಆದರ್ಶ ಬದುಕನ್ನು ಬದುಕುವ ಮೂಲಕ ದೇಶಕ್ಕೆ ಸೇವೆ ಮಾಡಬೇಕು. ದೇಶಕ್ಕಾಗಿ ನಾನೇನು ಮಾಡಿದ್ದೇನೆ ಎಂದು ಪ್ರಶ್ನಿಸಿಕೊಳ್ಳಬೇಕಾದ ದಿನವಿದು. ನಮ್ಮ ಹಕ್ಕುಗಳನ್ನು ಅರ್ಹತೆಯಿಂದ ಪಡೆದುಕೊಳ್ಳಬೇಕು ಎಂದರು. ಕಾಗಿನೆಲೆ ಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಸಚಿವ ಆರ್.ಅಶೋಕ್, ಸಂಸದ ಪಿ.ಸಿ.ಮೋಹನ್,ಮಾಜಿ ಶಾಸಕರಾದ ವಾಟಾಳ್ ನಾಗರಾಜ್, ಮಾಜಿ ಸಚಿವ ಎಚ್.ಎಂ.ರೇವಣ್ಣ ಮೊದಲಾದವರು ಉಪಸ್ಥಿತರಿದ್ದರು.












Click it and Unblock the Notifications