ಜಿಲ್ಲಾ ಪಂಚಾಯಿತಿ ಸಿಇಓಗಳಿಗೆ ಸಚಿವ ಕೃಷ್ಣಬೈರೇಗೌಡ ಖಡಕ್ ಎಚ್ಚರಿಕೆ
ಬೆಂಗಳೂರು, ನವೆಂಬರ್ 28: ಇಂದು ನಡೆದ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರು ಖಡಕ್ ಎಚ್ಚರಿಕೆ ನೀಡಿದರು.
ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ 5 ಲಕ್ಷದ ಒಳಗಿನ ಎಲ್ಲ ಕಾಮಗಾರಿಗಳಿಗೂ ಡಿಸೆಂಬರ್ 10 ರ ಒಳಗಾಗಿ ಅನುಮೋದನೇ ನೀಡಲೇಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರಸಕ್ತ ಸಾಲಿನ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕ್ರಿಯಾಯೋಜನೆಗಳನ್ನು ಸಿದ್ಧಪಡಿಸಿ ಅನುಮೋದನೆ ಪಡೆಯಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.

ಮುಂಗಾರು ಹಂಗಾಮಿನಲ್ಲಿ ರಾಜ್ಯದ 100 ತಾಲ್ಲೂಕುಗಳು ಬರಪೀಡಿತವಾಗಿದ್ದು, ಹಿಂಗಾರು ಹಂಗಾಮಿನಲ್ಲೂ ಮಳೆ ಕೊರತೆ ಹಿನ್ನೆಲೆಯಲ್ಲಿ ಬರದ ಛಾಯೆ ಕಂಡುಬರುತ್ತಿದೆ. ಈಗಾಗಲೇ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಬರಪೀಡಿತ ಪ್ರದೇಶಗಳು ಸೇರಿದಂತೆ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಬರ ಪರಿಹಾರ ಕಾರ್ಯದಲ್ಲಿ ಯಾವುದೇ ಕಾರಣಕ್ಕೂ ವಿಳಂಬ ಆಗಬಾರದು. ಮುಂಬರುವ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಈಗಿನಿಂದಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದ್ದಾರೆ. ಆದ್ಯತೆ ಮೇರೆಗೆ ಕುಡಿಯುವ ನೀರಿನ ಸರಬರಾಜು ಮಾಡಿ, ಖಾಸಗಿ ಟ್ಯಾಂಕರುಗಳನ್ನೂ ಬಳಸಲೂ ಅಡ್ಡಿಯಿಲ್ಲ ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.












Click it and Unblock the Notifications