ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆ ಕಾರಣ ಇವರೇ; ಸತೀಶ್ ಜಾರಕಿಹೊಳಿ ಬಿಚ್ಚಿಟ್ಟ ಸತ್ಯವೇನು?
ಬೆಂಗಳೂರು, ಜೂನ್ 05: ಲೋಕಸಭಾ ಚುಣಾವಣೆಯಲ್ಲಿ 20 ಕ್ಷೇತ್ರಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿದ್ದ ಆಡಳಿತರೂಢ ಕಾಂಗ್ರೆಸ್ ಎರಡಂಕಿ ತಲುಪಲು ಸಾಧ್ಯವಾಗಿಲ್ಲ. ಗ್ಯಾರಂಟಿ ಯೋಜನೆಗಳು ಮೂಲಕ ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ವಿಶ್ವಾಸದಲ್ಲಿ ಕಾಂಗ್ರೆಸ್ ಕೇವಲ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಎರಡಂಕಿ ತಲುಪದ ಹಿನ್ನೆಲೆ ಕೈ ಪಾಳಯದಲ್ಲಿ ಅಸಮಾಧಾನಗಳು ವ್ಯಕ್ತವಾಗಿವೆ.
ಈ ಕುರಿತು ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ತಲುಪಲು ಸಾಧ್ಯವಾಗದೇ ಇರುವ ಬಗ್ಗೆ ಪಕ್ಷದ ಆಂತರಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದ್ದು, ಡಬಲ್ ಡಿಜಿಟ್ ತಲುಪದೇ ಇರುವುದಕ್ಕೆ ನಮ್ಮ ನಾಯಕರ ಓವರ್ ಕಾನ್ಫಿಡೆನ್ಸೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಡೈರೆಕ್ಟರ್, ಪ್ರೊಡ್ಯೂಸರ್ ಫೇಲ್ ಆದರೆ ಈ ರೀತಿಯ ಫಲಿತಾಂಶ ನಿರೀಕ್ಷಿತ. ಚುನಾವಣೆಗೆ ಸಮಯ ಕಡಿಮೆ ಇರುತ್ತದೆ, ಆ ಸಮಯದಲ್ಲಿ ಅಲರ್ಟ್ ಆಗಿ ಇರಬೇಕು. ಇಲ್ಲವಾದರೆ ಚುನಾವಣೆ ಬಂದು ಹೋಗುತ್ತದೆ, ಆಗಲೇ ನಾವು ಕೆಲಸ ಮಾಡಬೇಕು. ನಮ್ಮ ನಾಯಕರು ಹಲವು ಕ್ಷೇತ್ರಗಳನ್ನು ನಿರ್ಲಕ್ಷಿಸಿದ್ದೂ ನಮ್ಮ ಹಿನ್ನಡೆಗೆ ಕಾರಣ. ನಮ್ಮ ನಾಯಕರ ಓವರ್ ಕಾನ್ಫಿಡೆನ್ಸೇ ಕಾರಣ ಎಂದು ಹೇಳಿದರು.
ಕೆಲವಡೆ ಕಡಿಮೆ ಮತಗಳ ಅಂತರದಿಂದ ಸೋಲಲು ನಮ್ಮ ನಿರ್ಲಕ್ಷ್ಯವೇ ಕಾರಣ. ಗೆಲ್ಲುವ ಅತಿಯಾದ ವಿಶ್ವಾಸದ ಕಾರಣಕ್ಕೆ ಇನ್ನೂ ಹಲವು ಕ್ಷೇತ್ರಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಚಾರ ಆಗಲಿಲ್ಲ ಎಂದು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಅಧ್ಯಕ್ಷರೇ ಕಾರಣ ಎಂದು ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.
ರಾಜ್ಯದಲ್ಲಿ ಕಾಂಗ್ರೆಸ್ ನಾಯಕತ್ವ ಬದಲಾವಣೆ ಕೂಗಿನ ಜತೆಗೆ ಉನ್ನತಾಧಿಕಾರ ರಚನೆಗೆ ಒತ್ತಾಯ ಹೆಚ್ಚಾಗುವ ಸಾಧ್ಯತೆ ಇದೆ. ಸಚಿವ ಸ್ಥಾನದ ಆಕಾಂಕ್ಷಿಗಳು ಸಚಿವ ಸ್ಥಾನಕ್ಕೆ ಬೇಡಿಕೆ ಇಡಲಿದ್ದಾರೆ. ಪರಿಣಾಮವಾಗಿ ಸಚಿವರ ಖಾತೆಗಳು ಅದಲು ಬದಲಾದರೂ ಆಗಬಹುದು. ಸಮುದಾಯವಾರು ಡಿಸಿಎಂ ಹುದ್ದೆಗಳ ಸೃಷ್ಟಿಗೆ ಮತ್ತೆ ಒತ್ತಾಯ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದ್ದವು. ಇದರ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಇನ್ನೂ ಈ ಹಿಂದೆಯೂ ಸಹ ಸತೀಶ್ ಜಾರಕಿಹೊಳಿ ಮತ್ತು ಡಿಕೆ ಶಿವಕುಮಾರ್ ಬಣಗಳ ನಡುವಣ ಶೀತಲ ಸಮರ ಇರುವುದು ಎಲ್ಲಾರಿಗೂ ಗೊತ್ತಿರುವ ವಿಷಯವೇ. ಈ ಹಿಂದೆಯೂ ಸಹ ಬೆಳಗಾವಿ ರಾಜಕಾರಣದಲ್ಲಿ ಹೊರಗಿನವರ ಹಸ್ತಕ್ಷೇಪ ಹೆಚ್ಚಾಗುತ್ತಿದೆ ಎಂದು ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಅಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ಹಿನ್ನಡೆ ಕುರಿತು ಪರೋಕ್ಷವಾಗಿ ಡಿ ಕೆ ಶಿವಕುಮಾರ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.












Click it and Unblock the Notifications