ಅಲ್ಪಸಂಖ್ಯಾತ ಸಮುದಾಯದ ಶಿಕ್ಷಣ ಮತ್ತು ಉದ್ಯೋಗ ಸೃಷ್ಟಿಗೆ ಬಜೆಟ್ ನಲ್ಲಿ ಒತ್ತು: ಜಮೀರ್
ಬೆಂಗಳೂರು, ಜುಲೈ 08: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 14ನೇ ಬಜೆಟ್ ಅನ್ನು ಮಂಡಿಸಿದ್ದು, 3 ಲಕ್ಷದ 27 ಸಾವಿರ ಕೋಟಿ ರೂ. ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ.
ಈ ಕುರಿತು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ವಖ್ಫ್ ಸಚಿವ ಜಮೀರ್ ಅಹಮದ್ ಮಾತನಾಡಿ, ಅಲ್ಪಸಂಖ್ಯಾತ ಸಮುದಾಯದ ಶಿಕ್ಷಣ ಮತ್ತು ಉದ್ಯೋಗ ಸೃಷ್ಟಿಗೆ ಬಜೆಟ್ ನಲ್ಲಿ ಒತ್ತು ನೀಡಿರುವುದರ ಜತೆಗೆ 2,101 ಕೋಟಿ ರೂ. ಒದಗಿಸಿದೆ ಎಂದು ಹೇಳಿದ್ದಾರೆ.

ಬಿಜೆಪಿ ಅವಧಿಯಲ್ಲಿ ಸ್ಥಗಿತ ಗೊಳಿಸಲಾಗಿದ್ದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿ ವೇತನ ಪುನರಾರಂಭಗೊಳಿಸಸಲು 60 ಕೋಟಿ ರೂ. ಅರ್ಧಕ್ಕೆ ನಿಂತಿರುವ ಶಾದಿ ಮಹಲ್ ಹಾಗೂ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು 54 ಕೋಟಿ ರೂ. ಅನುದಾನ ನೀಡಿರುವುದಕ್ಕೆ ಮುಖ್ಯಮಂತ್ರಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಇನ್ನೂ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ಮೂಲ ಮಂತ್ರದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಅಭಿವೃದ್ಧಿಗೆ ಪೂರಕವಾಗಿದೆ. ನಾವು ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬದ್ಧತೆಯನ್ನ ಬಜೆಟ್ ನಲ್ಲಿ ತೋರಿರುವ ಜತೆಗೆ ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ನೀಲ ನಕ್ಷೆ ಬಜೆಟ್ ಒಳಗೊಂಡಿದೆ ಎಂದು ತಿಳಿಸಿದ್ದಾರೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಮೇಲ್ದರ್ಜೆಗೇರಿಸಲು 30 ಕೋಟಿ ರೂ., ಅರಿವು ಶಿಕ್ಷಣ ಸಾಲ ಕ್ಕೆ 73 ಕೋಟಿ ರೂ., ಅಲ್ಪಸಂಖ್ಯಾತ ಸಮುದಾಯದ ಕಾಲೋನಿಗಳ ಅಭಿವೃದ್ಧಿ ಗೆ 360 ಕೋಟಿ ರೂ. ಅಲ್ಪಸಂಖ್ಯಾತ ಸಮುದಾಯದ ಶಾಲಾ ಕಾಲೇಜುಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಕಲಿಸುವ ಭಾಷಾ ಲ್ಯಾಬ್ ಗಳಿಗೆ 5 ಕೋಟಿ ರೂ., ಸ್ವಾವಲಂಭಿ ಸಾರಥಿ ಯೋಜನೆಯಡಿ 3 ಲಕ್ಷ ರೂ. ನೆರವು, ಕ್ರೈಸ್ತ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ರೂ. ವಖ್ಫ್ ಆಸ್ತಿ ಸಂರಕ್ಷಣೆಗೆ 40 ಕೋಟಿ ರೂ. ಒದಗಿಸಿದ್ದು ಆರ್ಥಿಕ ಸಂಕಷ್ಟದ ನಡುವೆಯೂ ಬದ್ಧತೆ ಮೆರೆದಿದ್ದಾರೆ ಎಂದು ಹೇಳಿದ್ದಾರೆ.
ವಸತಿ ಇಲಾಖೆ ಯಡಿ ಹಿಂದಿನ ಸರ್ಕಾರದ ಅವಧಿಯಲ್ಲಿ ಅರ್ಧಕ್ಕೆ ನಿಂತಿರುವ 12 ಲಕ್ಷ ಮನೆಗಳ ಪೈಕಿ ಈ ವರ್ಷ 3 ಲಕ್ಷ ಮನೆ ಪೂರ್ಣ ಗೊಳಿಸಿ ಹಂಚಿಕೆ ಮಾಡಲು 2,450 ಕೋಟಿ ರೂ. ಒದಗಿಸಿರುವುದು ಸ್ವಾಗತ ಎಂದು ತಿಳಿಸಿದ್ದಾರೆ. ಒಟ್ನಲಿ ಈ ಬಜೆಟ್ ಆರ್ಥಿಕತೆ ಮತ್ತು ಅಭಿವೃದ್ಧಿ ಗೆ ವೇಗ ನೀಡಿ ರಾಜ್ಯದ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನ ಹೊಂದಿದೆ ಎಂದು ಜಮೀರ್ ಅಹಮದ್ ತಿಳಿಸಿದ್ದಾರೆ.
ಅಲ್ಪಸಂಖ್ಯಾತ ಸಮುದಾಯಕ್ಕೆ ಬಜೆಟ್ ನಲ್ಲಿ ನೀಡಿದ್ದೇನು?
ರಾಜ್ಯದ 62 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು 6ನೇ ತರಗತಿಯಿಂದ 12ನೇ ತರಗತಿಯವರೆಗೆ Integrated ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಇದರಿಂದ 13,000 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದ್ದು, ಈ ಯೋಜನೆಗೆ ಪ್ರಸಕ್ತ ಸಾಲಿನಲ್ಲಿ 30 ಕೋಟಿ ರೂ.ಗಳನ್ನು ಒದಗಿಸಲಾಗುವುದು.
ಇದಲ್ಲದೇ, 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿಗಳ ದಾಖಲಾತಿಯನ್ನು ದ್ವಿಗುಣಗೊಳಿಸುವ ಮೂಲಕ ಹೆಚ್ಚುವರಿಯಾಗಿ 12,500 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲು 23 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 10 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.
ರಾಜ್ಯದಲ್ಲಿ 200 ಮೌಲಾನಾ ಆಜಾದ್ ಶಾಲೆಗಳಿದ್ದು, ಈ ಶಾಲೆಗಳಲ್ಲಿ ಶೇ.75 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಪೈಕಿ 22 ಶಾಲೆಗಳಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿರುತ್ತದೆ. ಮೌಲಾನಾ ಆಜಾದ್ ಶಾಲೆಗಳ ಉತ್ತಮ ಕಾರ್ಯನಿರ್ವಹಣೆಯನ್ನು ಗುರುತಿಸಿ, ಇವುಗಳ ಶಿಕ್ಷಣದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸಲು ಹಾಗೂ ಸ್ವಂತ ಕಟ್ಟಡ ಇಲ್ಲದೇ ಇರುವ ಶಾಲೆಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುವುದು
ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ಅರಿವು ಶೈಕ್ಷಣಿಕ ಸಾಲ ಯೋಜನೆ ಅಡಿಯಲ್ಲಿ ಸಿ.ಇ.ಟಿ ಮೂಲಕ ಪ್ರವೇಶ ಪಡೆದ ಇಂಜಿನಿಯರಿಂಗ್, ವೈದ್ಯಕೀಯ ಮುಂತಾದ 28 ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡಲು ಶೇ.2 ರ ಬಡ್ಡಿ ದರದಲ್ಲಿ ವಾರ್ಷಿಕ ಒಂದು ಲಕ್ಷ ರೂ.ಗಳವರೆಗೆ ಸಾಲ ಮಂಜೂರು ಮಾಡಲಾಗುವುದು. ಪ್ರಸಕ್ತ ಸಾಲಿನಲ್ಲಿ 75 ಕೋಟಿ ರೂ.ಗಳನ್ನು ಮೀಸಲಿಡಲಾಗುವುದು.
ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಕನ್ನಡ ಮತ್ತು ಆಂಗ್ಲ ಭಾಷಾ ಜ್ಞಾನವನ್ನು ಉತ್ತಮಪಡಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭಾಷಾ ಪ್ರಯೋಗಾಲಯಗಳನ್ನು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು.ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತ ಯುವಜನರಿಗೆ ಕೌಶಲ್ಯ ತರಬೇತಿಯನ್ನು ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.
ಅಲ್ಪಸಂಖ್ಯಾತರ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದಿಂದಲೇ NEET, JEE, CET ಹಾಗೂ ಇತರೆ ಪ್ರವೇಶ ಪರೀಕ್ಷೆಗಳ ತಯಾರಿಗಾಗಿ ಪ್ರತಿಷ್ಠಿತ ಸಂಸ್ಥೆಗಳಿಂದ ಎರಡು ವರ್ಷಗಳ ತರಬೇತಿಯನ್ನು ನೀಡಲು ಎಂಟು ಕೋಟಿ ರೂ.ಗಳ ಅನುದಾನ ನೀಡಲಾಗುವುದು.












Click it and Unblock the Notifications