ಕರ್ನಾಟಕದಲ್ಲಿ ಮತ್ತೆ ಭುಗಿಲೆದ್ದ ಡಿಸಿಎಂ ಕೂಗು; ನಾನು ಬೇಡಿಕೆ ಇಟ್ಟಿದ್ದೇನೆ ಎಂದ ಸಿದ್ದರಾಮಯ್ಯ ಆಪ್ತ
ಬೆಂಗಳೂರು, ಜೂನ್ 23: ಲೋಕಸಭಾ ಚುನಾವಣೆಯ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ವಿಪಕ್ಷಗಳ ಹೇಳಿಕೆ ಕೈ ಪಾಳಯದಲ್ಲಿ ಆತಂಕ ಸೃಷಿಯಾಗುವಂತೆ ಮಾಡಿತ್ತು. ಇದೀಗ ಕಾಂಗ್ರೆಸ್ ಪಾಳಯದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಕುರಿತು ಸಾಕಷ್ಟು ನಾಯಕರು ಬೇಡಿಕೆ ಇಟ್ಟಿದ್ದಾರೆ.
ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಒಂದೇ ಒಂದು ಡಿಸಿಎಂ ಹುದ್ದೆ ಸೃಷ್ಟಿಸಿದ್ದು, ಡಿ.ಕೆ.ಶಿವಕುಮಾರ್ ನಿಭಾಯಿಸುತ್ತಿದ್ದಾರೆ. ಇದೇ ಕಾರಣಕ್ಕೆಸಚಿವರಾದ ರಾಜಣ್ಣ ಅವರ ಒತ್ತಾಯ ಪಕ್ಷದಲ್ಲಿ ಮಹತ್ವ ಪಡೆದುಕೊಂಡಿದೆ. ಈ ಹಿಂದೆ ಹಲವು ನಾಯಕರು ಸಮುದಾಯಕ್ಕೊಂದು ಡಿಸಿಎಂ ಹುದ್ದೆಗೆ ಬೇಡಿಕೆ ಇಟ್ಟಿದ್ದು, ಇದೀಗ ಮುಸ್ಲಿಂ ಸಮುದಾಯದ ನಾಯಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾದ ಜಮೀರ್ ಅಹ್ಮದ್ ಖಾನ್ ಅವರು ಸಹ ಡಿಸಿಎಂ ಹುದ್ದೆಗೆ ಬೇಡಿಕೆ ಇಟ್ಟಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಡಿಸಿಎಂ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ. ಎಲ್ಲ ಸಮಾಜಕ್ಕೂ ತಮ್ಮ ಸಮಾ ಜದವರಿಗೆ ಡಿಸಿಎಂ ಸ್ಥಾನ ಸಿಗಬೇಕು ಎನ್ನುವ ಹಂಬಲ ಇರುತ್ತದೆ. ಮುಸ್ಲಿಂ ಸೇರಿದಂತೆ ಲಿಂಗಾಯತ, ದಲಿತ ಸಮಾಜಗಳಿಂದಲೂ ಉಪಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇದೆ. ನಾವು ಕೂಡ ಡಿಸಿಎಂ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದೇವೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಇನ್ನೂ ಹೆಚ್ಚುವರಿ ಉಪಮುಖ್ಯಮಂತ್ರಿ ಸ್ಥಾನಗಳಿಗೆ ಬೇಡಿಕೆ ಇಟ್ಟಿರುವ ಕುರಿತ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಜಮೀರ್ ಅವರು, ನಾವೂ ಬೇಡಿಕೆ ಇಟ್ಟಿದ್ದೇವೆ. ಆದರೆ, ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳುತ್ತೆ. ಹಾಗಂತ, ಡಿಸಿಎಂ ಸ್ಥಾನ ನೀಡದೆ ಇದ್ದರೂ ನಮಗಾರಿಗೂ ಅಸಮಾಧಾನ ಏನೂ ಇಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಇನ್ನೂ ಸಮುದಾಯಕ್ಕೊಂದು ಉಪಮುಖ್ಯಮಂತ್ರಿ ಸ್ಥಾನದ ಕುರಿತು ಸಚಿವ ಕೆ ಎನ್ ರಾಜಣ್ಣ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ,3 ಡಿಸಿಎಂ ಹುದ್ದೆ ಸೃಷ್ಟಿ ಮಾಡಿದರೆ ತೊಂದರೆ ಏನು? ನಾನು ಮೊದಲಿನಿಂದಲೂ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಿ ಎಂದು ಹೇಳುತ್ತಲೇ ಬಂದಿದ್ದೇನೆ. ಮಧ್ಯೆ ಲೋಕಸಭಾ ಚುನಾವಣೆ ಬಂದಿದ್ದರಿಂದ ಎಐಸಿಸಿ ಅಧ್ಯಕ್ಷರು ಸಾರ್ವಜನಿಕವಾಗಿ ಈ ಬಗ್ಗೆ ಪ್ರಸ್ತಾಪಿಸಬೇಡಿ ಎಂದಿದ್ದರು. ಆದ್ದರಿಂದ ನಾವೆಲ್ಲಾ ಸುಮ್ಮನಿದ್ದೆವು ಎಂದು ಹೇಳಿದರು.
ಸತೀಶ ಜಾರಕಿಹೊಳಿಯವರು ಹೆಚ್ಚುವರಿ ಡಿಸಿಎಂ ಸೃಷ್ಟಿಯಾಗ ಬೇಕು ಎಂದು ಹೇಳಿದ್ದಾರೆ. ಸಚಿವ ಸತೀಶ ಜಾರಕಿಹೊಳಿ ಹೇಳಿಕೆಗೆ ನನ್ನ ಸಂಪೂರ್ಣ ಸಹಮತವಿದೆ, ಅವರು ಹೇಳಿದ್ದರಲ್ಲಿ ತಪ್ಪೇನೂ ಇಲ್ಲ. ಅವರು ಮಾತನಾಡಿದ್ದು ಸರಿಯಾಗಿಯೇ ಇದೆ. ಅವರ ಹೇಳಿಕೆಗೆ ನನ್ನ ಸಹಮತವಿದೆ ಎಂದು ಹೇಳಿದರು.












Click it and Unblock the Notifications