Bengaluru Rain: ಮಳೆಯಿಂದ ಕೆರೆಯಂತಾದ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ: ಸರ್ಕಾರದ ವಿರುದ್ದ ಅನಿತಾ ಕುಮಾರಸ್ವಾಮಿ ಕಿಡಿ
ರಸ್ತೆ ನಮ್ಮ ಹೆಮ್ಮೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಡಬಲ್ ಇಂಜಿನ್ ಸರ್ಕಾರದ ಹೆದ್ದಾರಿಯ ಅಸಲಿಮುಖ ಕಳಚಿ ಬಿದ್ದಿದೆ.
ಬೆಂಗಳೂರು,ಮಾರ್ಚ್ 18: ರಾಜ್ಯ ವಿಧಾನಸಭಾ ಚುನಾವಣೆ ಹೊತ್ತಲಿ ಒಂದಲ್ಲ ಒಂದು ವಿಚಾರಲ್ಲಿ ರಾಜಕೀಯ ಪಕ್ಷಗಳು ಕ್ರೆಡಿಟ್ ವಾರ್ ಗಳನ್ನ ನಡೆಸುತ್ತಿದ್ದು, ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೈವೇ ವಿಚಾರಲ್ಲೂ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಡುವೆ ಸಾಕಷ್ಟು ಕ್ರೆಡಿಟ್ ವಾರ್ ನಡುವೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
ಆದರೆ ಗುರುವಾರ ತಡರಾತ್ರಿ ಸುರಿದ ಭಾರಿ ಮಳೆಗೆ ನೂತನ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಕೆರೆಯಂತಾಗಿದ್ದು, ಈ ಕುರಿತು ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲೆ ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ಡಬಲ್ ಎಂಜಿನ್ ಬಿಜೆಪಿ ಸರಕಾರಗಳು, ಈ ರಸ್ತೆ ನಮ್ಮ ಹೆಮ್ಮೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಅಸಲಿಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ. ಬೆಳಗಿನಜಾವ ಸುರಿದ ಒಂದು ಸಣ್ಣಮಳೆಗೇ ಅದು ಕೆರೆಯಾಗಿ, ಚರಂಡಿಯಾಗಿ ಉಕ್ಕಿ ಹರಿದಿದೆ ಎಂದು ಅನಿತಾ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಡಬಲ್ ಎಂಜಿನ್ @BJP4India @BJP4Karnataka ಸರಕಾರಗಳು, ಈ ರಸ್ತೆ ನಮ್ಮ ಹೆಮ್ಮೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಅಸಲಿಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ. ಬೆಳಗಿನಜಾವ ಸುರಿದ ಒಂದು ಸಣ್ಣಮಳೆಗೇ ಅದು ಕೆರೆಯಾಗಿ, ಚರಂಡಿಯಾಗಿ ಉಕ್ಕಿ ಹರಿದಿದೆ!! 1/6#ಎಕ್ಸ್_ಪ್ರೆಸ್_ಹೆಮ್ಮಾರಿ pic.twitter.com/YgBTdW3QOk
— ಅನಿತಾ ಕುಮಾರಸ್ವಾಮಿ | Anitha Kumaraswamy (@Anitha_JDS) March 18, 2023
ಕಳೆದ ವರ್ಷ ಅಬ್ಬರಿಸಿದ ಮಹಾಮಳೆಗೆ ಈ ಎಕ್ಸ್ ಪ್ರೆಸ್ ಹೆದ್ದಾರಿ ತತ್ತರಿಸಿತ್ತು. ಕಾಮಗಾರಿಗಳು ಮುಗಿದಿರಲಿಲ್ಲ ಎಂದು ಹೇಳಿ ಗುತ್ತಿಗೆದಾರರು ಆಗ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಿದ್ದರು. ಈಗ ವರ್ಷ ಮುಗಿಯುವ ಮೊದಲೇ ಮತ್ತೆ ಬಂದ ಸಣ್ಣಮಳೆಗೆ ಸಾವಿರಾರು ಕೋಟಿ ವೆಚ್ಚದ ಈ ಹೆದ್ದಾರಿ ವಾಹನ ಸವಾರರ ಪಾಲಿಗೆ ಸಾವಿನಮಾರಿಯಾಗಿ ಮಾರ್ಪಟ್ಟಿದೆ.

ಅವೈಜ್ಞಾನಿಕವಾದ ಈ ಯೋಜನೆಯ ಕಾಮಗಾರಿಗಳನ್ನು ಪೂರ್ಣಗೊಳಿಸಿದೆಯೇ, ತರಾತುರಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಂದ ಉದ್ಘಾಟನೆ ಮಾಡಿಸಿದ ಈ ' ಚುನಾವಣಾ ಗಿಮಕ್ ' ಬಗ್ಗೆ ಜನರು ಹಾದಿಬೀದಿಯಲ್ಲಿ ಆಡಿಕೊಳ್ಳುತ್ತಿದ್ದಾರೆ. ವಾಹನ ಸವಾರರು ಶಪಿಸುತ್ತಿದ್ದಾರೆ. ಇದಕ್ಕೆ ಉತ್ತರದಾಯಿಗಳು ಯಾರು? ಎಂದು ಪ್ರಶ್ನಿಸಿದರು.
ಬೆಳಗಿನಜಾವ ಸುರಿದ ಮಳೆಯಿಂದ ಹೆದ್ದಾರಿಯಲ್ಲಿ ನೀರು ಆಳೆತ್ತರ ನಿಂತಿದೆ. ವಾಹನಗಳು ಅಪಘಾತಕ್ಕೀಡಾಗಿ ಪ್ರಯಾಣಿಕರು ತೊಂದರೆಗೆ ಸಿಲುಕಿದ್ದಾರೆ. 270 ರೂ. ಟೋಲ್ ಕಟ್ಟಿ ಹೆದ್ದಾರಿಗೆ ಬಂದ ವಾಹನ ಸವಾರರು ಮಳೆ ಚಳಿಯಲ್ಲಿ ಜೀವವನ್ನು ಅಂಗೈಯಲ್ಲಿ ಇಟ್ಟುಕೊಂಡು ನರಳಿದ್ದಾರೆ. ಇದು ನಿಜಕ್ಕೂ ನೋವಿನ ಸಂಗತಿ ಎಂದು ವಾಗ್ದಾಳಿ ನಡೆಸಿದರು.

ಕೆಲ ದಿನಗಳ ಹಿಂದೆ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ವಾಹನದಲ್ಲಿದ್ದ ದಂಪತಿಯ ಹಣ, ಚಿನ್ನಾಭರಣವನ್ನು ದೋಚಿದ್ದ ಪ್ರಕರಣ ವರದಿಯಾಗಿತ್ತು. ಜತೆಗೆ, ನಿರಂತರ ಅಪಘಾತಗಳಿಂದ 80ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಹಾಗಾದರೆ, ಈ ಹೆದ್ದಾರಿಯ ಭದ್ರತೆ, ಸುರಕ್ಷತೆ ಪಾಡೇನು? ಟೋಲ್ ಸಂಗ್ರಹ ಮಾಡಿದರೆ ಸಾಕೇ? ಎಂದು ಪ್ರಶ್ನಿಸಿದ್ದಾರೆ.
ನನ್ನ ಒತ್ತಾಯ ಇಷ್ಟೇ. ಸರ್ವಿಸ್ ರಸ್ತೆಯೂ ಸೇರಿದಂತೆ ಈ ಹೆದ್ದಾರಿಯ ಎಲ್ಲಾ ಬಾಕಿಬಿದ್ದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಅದುವರೆಗೂ ಟೋಲ್ ಸಂಗ್ರಹ ನಿಲ್ಲಿಸಬೇಕು. ಈ ರಸ್ತೆಗಾಗಿ ಭೂಮಿ ಕಳೆದುಕೊಂಡಿರುವ ರಾಮನಗರ, ಮಂಡ್ಯ ಸೇರಿ ಆ ಭಾಗದ ಎಲ್ಲ ಜನರು ಮುಕ್ತವಾಗಿ ಸಂಚರಿಸಲು ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.
ಇನ್ನೂ ಶುಕ್ರವಾರ ತಡರಾತ್ರಿ ಸುರಿದ ಭಾರಿ ಮಳೆಗೆ ನೂತನ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಕೆರೆಯಂತಾಗಿದೆ. ಮೇಲ್ಸೇತುವೆ ಹೆದ್ದಾರಿ ಬಳಿ ನೀರು ನಿಂತು ಸಂಪೂರ್ಣ ಜಲಾವೃತವಾಗಿದೆ. ಇದರಿಂದ ಹೆದ್ದಾರಿಯಲ್ಲಿಯೇ ಏಕಾಏಕಿ ವಾಹನಗಳು ಕೆಟ್ಟು ನಿಂತಿದ್ದು, ವಾಹನಗಳ ನಡುವೆ ಸರಣಿ ಅಪಘಾತವಾಗುತ್ತಿದೆ. ಜೊತೆಗೆ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ತೊಂದರೆಗೆ ಸಿಲುಕಿದ್ದಾರೆ.
ಕಳೆದ ವರ್ಷ ಕೂಡ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಉದ್ಘಾಟನೆಯಾದ 6 ದಿನಕ್ಕೇ ಎಕ್ಸ್ಪ್ರೆಸ್ ವೇನಲ್ಲಿ ಈ ಅವಾಂತರವಾಗಿದೆ. ಇನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಳೆಯಿಂದ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದಿತ್ತು. ಆದರೆ ಈಗ ಉದ್ಘಾಟನೆಯಾದ ಆರು ದಿನಕ್ಕೆ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.












Click it and Unblock the Notifications