"ದಸರಾ ಉದ್ಘಾಟನೆ ಬಾನು ಮುಷ್ತಾಕ್ ಅವರ ಇಸ್ಲಾಂ ನಂಬಿಕೆಗಳಿಗೆ ವಿರುದ್ಧ"
ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ. ಆದರೆ ಈ ಬಾನು ಅವರು ದಸರಾ ಉದ್ಘಾಟಿಸಲು ವಿರೋಧ ವ್ಯಕ್ತವಾಗುತ್ತಿದೆ. ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸುವುದು ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನಾನು ವೈಯಕ್ತಿಕವಾಗಿ ಶ್ರೀಮತಿ ಬಾನು ಮುಷ್ತಾಕ್ ಅವರನ್ನ ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸುವುದು ಹಾಗೂ ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟನೆ ಮಾಡುವುದು ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧ ಎಂದು ಯತ್ನಾಳ್ ಹೇಳಿದ್ದಾರೆ.

ಇಸ್ಲಾಂ ಮೂರ್ತಿ ಪೂಜೆಯನ್ನು ಧಿಕ್ಕರಿಸಿ ಒಂದು ದೇವರು ಹಾಗೂ ಒಂದು ಗ್ರಂಥವನ್ನೇ ಒಪ್ಪಿಕೊಳ್ಳುತ್ತದೆ ಎಂಬ ನಂಬಿಕೆಯಲ್ಲಿ ಅವರು ಇನ್ನೂ ಇದ್ದಾರೆಯೇ? ಅಥವಾ ಎಲ್ಲ ಮಾರ್ಗಗಳೂ ಅಂತಿಮವಾಗಿ ಒಂದೇ ಮೋಕ್ಷಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಅವರು ನಂಬುತ್ತಾರೆಯೇ? ಎಂಬುದರ ಬಗ್ಗೆ ಶ್ರೀಮತಿ ಭಾನು ಮುಷ್ತಾಕ್ ಅವರೇ ಸ್ಪಷ್ಟನೆ ನೀಡುವುದು ಅಗತ್ಯ ಎಂದಿದ್ದಾರೆ.
ಕವಿಗೋಷ್ಠಿ ಉದ್ಘಾಟಿಸಿ
ಈ ಸ್ಪಷ್ಟತೆ ಇಲ್ಲದೆ ದಸರಾ ಉದ್ಘಾಟಿಸುವುದು ಸರಿಯಲ್ಲ. ಆದರೆ, ದಸರಾ ಉತ್ಸವದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಅಥವಾ ಕವಿಗೋಷ್ಠಿಯಂತಹ ಸಾಹಿತ್ಯ ಕಾರ್ಯಕ್ರಮಗಳನ್ನು ಉದ್ಘಾಟಿಸುವ ಅತಿಥಿಯಾಗಿ ಅವರು ಭಾಗವಹಿಸುವುದು ತಕ್ಕದ್ದಾಗಿದೆ ಎಂದು ಯತ್ನಾಳ್ ಸಲಹೆ ನೀಡಿದ್ದಾರೆ.
ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದು, ಮೈಸೂರು ಜಿಲ್ಲಾಡಳಿತದ ವತಿಯಿಂದ ಬಾನು ಮುಷ್ತಾಕ್ ಅವರನ್ನು ಗೌರವದಿಂದ ಆಹ್ವಾನಿಸಲಾಗುವುದು. ಬಾನು ಅವರ ಕೃತಿ ಎದೆಯ ಹಣತೆಗೆ ಬೂಕರ್ ಪ್ರಶಸ್ತಿ ದೊರೆತಿದ್ದು, ಕರ್ನಾಟಕದ ಲೇಖಕಿಗೆ ಈ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರೈತ ಸಂಘ, ಕನ್ನಡ ಚಳವಳಿಯ ಜೊತೆಗೆ ಹೋರಾಟದ ಹಿನ್ನೆಲೆಯುಳ್ಳ ಬಾನು ಮುಷ್ತಾಕ್ ಅವರು ಪ್ರಗತಿಪರ ಚಿಂತಕಿಯೂ ಆಗಿದ್ದಾರೆ. ಅವರಿಂದಲೇ ದಸರಾ ಉದ್ಘಾಟಿಸಿ, ಅವರ ಸಾಧನೆಯನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದಿದ್ದಾರೆ.
ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ನಡೆಯುವ ನಾಡಹಬ್ಬ ಮೈಸೂರು ದಸರಾವನ್ನು ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಬಾರಿ ದಸರಾವನ್ನು ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ, ಸಾಮಾಜಿಕ ಕಾರ್ಯಕರ್ತೆ ಬಾನು ಮುಷ್ತಾಕ್ ಅವರು ಉದ್ಘಾಟಿಸುತ್ತಿರುವುದು ನನಗೆ ಅತೀವ ಸಂತೋಷ ತಂದಿದೆ. ಕನ್ನಡಕ್ಕೆ ಕೀರ್ತಿ ತಂದಿರುವ ಬಾನು ಮುಷ್ತಾಕ್ ಅವರೊಂದಿಗೆ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಉದ್ಘಾಟಿಸುವ ಅವಕಾಶ ಸಿಕ್ಕಿರುವುದು ನಮ್ಮೆಲ್ಲರ ಭಾಗ್ಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.












Click it and Unblock the Notifications