ಕಾಂಗ್ರೆಸ್ ಶಾಸಕರಿಗೆ 100 ಕೋಟಿ ರೂ. ಆಫರ್ ಕೊಟ್ಟವರು ಯಾರು?
ಒಂದೆಡೆ ಮುಡಾ ಹಗರಣ ಮುಂದಿಟ್ಟುಕೊಂಡು ಬಿಜೆಪಿವಯವರು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಕಸರತ್ತು ನಡೆಸುತ್ತಿದ್ದಾರೆ ಎಂಬ ಆರೋಪಗಳ ನಡುವೆಯೇ ಸದ್ದಿಲ್ಲದೆ ಆಪರೇಷನ್ ಕಮಲ ಕೂಡ ನಡೆಯುತ್ತಿದೆ ಎಂದು ಕಾಂಗ್ರೆಸ್ ಶಾಸಕರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಶಾಸಕರಾದ ಗಣಿಗ ರವಿ ಈ ರೀತಿ ಬಿಜೆಪಿ ವಿರುದ್ಧ ಆರೋಪ ಮಾಡಿದ್ದು, ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿಯವರು ಬರೋಬ್ಬರಿ 100 ಕೋಟಿ ರೂಪಾಯಿ ಆಫರ್ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
ಈ ಬಗ್ಗೆ ಇಂದು ಮಂಡ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರವಿ ಗಣಿಗ, ಎಚ್.ಡಿ.ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ಬಿ.ಎಲ್.ಸಂತೋಷ್ ಹಾಗೂ ಪ್ರಲ್ಹಾದ್ ಜೋಶಿ ಸೇರಿದಂತೆ ಹಲವರು ನಮ್ಮ ಕಾಂಗ್ರೆಸ್ ಸರ್ಕಾರ ಬೀಳಿಸಲು ನಾನಾ ಕಸರತ್ತು ನಡೆಸುತ್ತಿದ್ದಾರೆ. ಆದರೆ ನಮ್ಮ ಸರ್ಕಾರ ಕಲ್ಲುಬಂಡೆಯಂತೆ ಗಟ್ಟಿಯಾಗಿದೆ. ಅದನ್ನು ಅಲ್ಲಾಡಿಸಲು ಯಾರಿಂದಲೂ ಆಗುವುದಿಲ್ಲ. ಸಿದ್ದರಾಮಯ್ಯನವರು ಒಳ್ಳೆಯ ಅಭಿವೃದ್ಧಿ ಕೆಲಸಗಳನ್ನು ಮಾಡಲಿದ್ದು ಐದು ವರ್ಷವೂ ನಮ್ಮ ಸರ್ಕಾರ ಅಧಿಕಾರದಲ್ಲಿರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಗೆ ನಮ್ಮ ಸರ್ಕಾರ ಬೀಳಿಸ್ತೀವಿ ಎಂದು ಐದು ಜನ ಪ್ರಾಮಿಸ್ ಮಾಡಿದ್ದಾರೆ. ಇದಕ್ಕಾಗಿ ಬಿಜೆಪಿಯ ಕೆಲ ಬ್ರೋಕರ್‌ಗಳು ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸುತ್ತಿದ್ದು, ನೂರಾರು ಕೋಟಿ ನೀಡುವ ಆಫರ್ ಮುಂದಿಡುತ್ತಿದ್ದಾರೆ. ಆದರೆ ಇದಕ್ಕೆ ನಮ್ಮ ಯಾವ ಶಾಸಕರು ಈ ಆಮಿಷಕ್ಕೆ ಬಲಿಯಾಗುವುದಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದೆ. ಹಾಗಾಗಿ ಬಿಜೆಪಿಯ ಯಾರಿಗೂ ನಮ್ಮ ಸರ್ಕಾರ ಬೀಳಿಸುವ ತಾಕತ್ ಇಲ್ಲ. ಕಾಂಗ್ರೆಸ್ ಶಾಸಕರ ಬಾಗಿಲು ತಟ್ಟಿರುವ ಬಿಜೆಪಿ ಬ್ರೋಕರ್‌ಗಳು ಯಾರೆಂದು ನಾವು ಪತ್ತೆ ಹಚ್ಚುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದ ಸಾಕ್ಷಿಗಳನ್ನೂ ಸಂಗ್ರಹಿಸುತ್ತಿದ್ದೇವೆ. ಬಳಿಕ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳಿಗೆ ದೂರು ಸಹ ನೀಡಲಿದ್ದೇವೆ ಎಂದಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಚಾರವಾಗಿ ಮಾತನಾಡಿದ ರವಿ ಗಣಿಗ, ಸಿದ್ದರಾಮಯ್ಯನವರು ಸಖತ್ ಸ್ಟ್ರಾಂಗ್ ಇದ್ದಾರೆ. ನಾವೆಲ್ಲರೂ ಅವರ ಬೆಂಬಲಕ್ಕಿದ್ದೇವೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಯ ವಿರುದ್ಧ ಎಲ್ಲ ಶಾಸಕರು ಒಗ್ಗಟ್ಟಿನಿಂದ ಹೋರಾಟ ಮಾಡುತ್ತೇವೆ. ಬಿಜೆಪಿಯವರಿಗೆ ಎಲ್ಲ ರೀತಿಯಲ್ಲಿ ತಿರುಗೇಟು ನೀಡಲಿದ್ದೇವೆ ಎಂದಿದ್ದಾರೆ.
ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್ ಅವರು ದೆಹಲಿಗೆ ಹೋದ ಸಂದರ್ಭದಲ್ಲಿ ಅಮಿತ್ ಶಾ, ದೇವೇಗೌಡ ಹಾಗೂ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. ಬಳಿಕ ಮರುದಿನವೇ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಈ ಮೂಲಕ ರಾಜ್ಯಪಾಲರು ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಈ ಷಡ್ಯಂತ್ರಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದಾರೆ.
ಶಾಸಕ ಗಣಿಗ ರವಿ ಅವರ ಈ ಆರೋಪವು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದು, ಒಂದು ವೇಳೆ 100 ಕೋಟಿ ಆಫರ್‌ಗೆ ಕಾಂಗ್ರೆಸ್ ಸರ್ಕಾರ ಒಪ್ಪಿದರೆ ಸರ್ಕಾರ ಬೀಳೋದು ಗ್ಯಾರಂಟಿ ಎನ್ನುವ ಮಾತುಗಳು ಕೇಳಿಬರುತ್ತಿವೆ. ಮುಡಾ ಹಗರಣದ ಕಾವು ಜೋರಾಗಿರುವುದರ ನಡುವೆಯೇ ಈ ಹೊಸ ಬಾಂಬ್ ಸದ್ದು ಮಾಡಲಾರಂಭಿಸಿದೆ.












Click it and Unblock the Notifications