ಕೆಎನ್ ರಾಜಣ್ಣ ಬಳಿಕ ಶಾಸಕ ರಾಜು ಕಾಗೆಗೆ ಹೈಕಮಾಂಡ್ ಶಾಕ್; ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಕೊಕ್
ಬೆಂಗಳೂರು, ಸೆಪ್ಟೆಂಬರ್26: ರಾಜ್ಯ ಕಾಂಗ್ರೆಸ್‌ನ ಹಿರಿಯ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಬಿಗ್ ಶಾಕ್ ನೀಡುತ್ತಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನದ ಬಗ್ಗೆ ಲೋಕಸಭೆ ವಿಪಕ್ಷನಾಯಕ ರಾಹುಲ್‌ಗಾಂಧಿಯವರು ಬೆಂಗಳೂರಿನಲ್ಲಿ ಪ್ರತಿಭಟನೆ ಆರಂಭಿಸಿದರು. ಈ ಬಗ್ಗೆ ಕೆ ಎನ್ ರಾಜಣ್ಣ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಮತದಾರರ ಪಟ್ಟಿ ಸಿದ್ಧಪಡಿಸಲಾಗಿತ್ತು. ಆಗ ಎಲ್ಲರೂ ಏನು ಮಾಡುತ್ತಿದ್ದರು. ಕಣ್ಣುಮುಚ್ಚಿ ಕುಳಿತಿದ್ದರೇ?. ಇಷ್ಟೆಲ್ಲ ಅಕ್ರಮ ನಡೆದರು ನೋಡುತ್ತಾ ಕಣ್ಮುಚ್ಚಿ ಕುಳಿತಿದ್ದೇವೆಲ್ಲಎಂದು ನಾಚಿಕೆ ಆಗಬೇಕು ಎಂದು ಮಾತನಾಡಿದ್ದ ಮಾರನೇ ದಿನವೇಸಚಿವ ಸ್ಥಾನಕ್ಕೆ ಕೆಎನ್ ರಾಜಣ್ಣ ಅವರಿಂದ ರಾಜೀನಾಮೆ ಪಡೆದುಕೊಳ್ಳಲಾಗಿತ್ತು. ಇದೀಗ ಕಾಂಗ್ರೆಸ್ ಹಿರಿಯ ಶಾಸಕ ರಾಜು ಕಾಗೆ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಬಿಗ್ ಶಾಕ್ ಕೊಟ್ಟಿದೆ.
ಪಕ್ಷ ವಿರೋಧಿ ಹೇಳಿಕೆಗಳು ಮತ್ತು ಸರ್ಕಾರಕ್ಕೆ ಮುಜುಗರ ಉಂಟಾಗುವಂತಹ ಮಾತುಗಳನ್ನಾಡುವ ನಾಯಕರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಕಠಿಣ ಕ್ರಮ ಮುಂದುವರಿಸಿದೆ. ಹಿರಿಯ ಕಾಂಗ್ರೆಸ್ ಶಾಸಕ ಕೆಎನ್ ರಾಜಣ್ಣರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಿಂದ ತೆರವುಗೊಳಿಸಿದ ಬಳಿಕ ಇದೀಗ ಶಾಸಕ ರಾಜು ಕಾಗೆ ಅವರನ್ನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನದಿಂದ ಕೈ ಬಿಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಬಿಗ್ ಶಾಕ್ ಕೊಟ್ಟಿದೆ.

ಮೊದಲಿನಿಂದಲೂ ಸಚಿವ ಸ್ಥಾನ ಕೈ ತಪ್ಪಿದ ಹಿರಿಯ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹಾಗೂ ಕಾಂಗ್ರೆಸ್ ಹೈಕಮಾಂಡ್ ವಿರುದ್ದ ಅಸಮಾಧಾನವನ್ನ ಹೊರಹಾಕುತ್ತಿದ್ದರು. ಇನ್ನೂ ಸಹಕಾರ ಸಚಿವರಾಗಿದ್ದ ಕೆಎನ್ ರಾಜಣ್ಣರನ್ನು ಸಂಪುಟದಿಂದ ಕೈಬಿಟ್ಟ ಬಳಿಕ ಇದೀಗ ಮತ್ತೋರ್ವ ಹಿರಿಯ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ನೀಡಿದೆ. ಪಕ್ಷ ವಿರೋಧಿ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂಥ ಹೇಳಿಕೆ ನೀಡಿದ ಕಾಗವಾಡ ಶಾಸಕ ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನವನ್ನ ರಾಜು ಕಾಗೆ ಬದಲಾಗಿ ಅರುಣ್ ಪಾಟೀಲ ಅವರನ್ನು ನೂತನ ಅಧ್ಯಕ್ಷರಾಗಿ ನೇಮಕ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಂತಿಮ ಪಟ್ಟಿಯನ್ನು ರವಾನಿಸಿದ್ದಾರೆ. ಈ ಮೂಲಕ ಸರ್ಕಾರಕ್ಕೆ ಮುಜುಗರ ಉಂಟುಮಾಡುವಂಥ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಪ್ರಬಲ ಸಂದೇಶ ರವಾನಿಸಿರುವುದು ಹಲವು ನಾಯಕರಿಗೆ ಎಚ್ಚರಿಕೆ ಕೊಟ್ಟಂತಾಗಿದೆ.
ಇನ್ನೂ ಕಾಂಗ್ರೆಸ್ ಶಾಸಕರಾದ ರಾಜು ಕಾಗೆ ಇತ್ತೀಚೆಗೆ ನೀಡಿದ ಹೇಳಿಕೆಯಲ್ಲಿ ನನ್ನ ಕ್ಷೇತ್ರಕ್ಕೆ 25 ಕೋಟಿ ವಿಶೇಷ ಅನುದಾನ ಬಿಡುಗಡೆ ಆಗಿದ್ದರೂ, ಎರಡು ವರ್ಷ ಕಳೆದರೂ ಕಾಮಗಾರಿ ಆರಂಭವಾಗಿಲ್ಲ. ಸಮಸ್ಯೆ ಬಗೆಹರಿಯದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆನು ಎಂದು ಸರ್ಕಾರದ ವಿರುದ್ಧ ಎಚ್ಚರಿಕೆ ನೀಡಿದ್ದರು. 13 ಕೋಟಿ ರೂಪಾಯಿಯಲ್ಲಿ 72 ಸಮುದಾಯ ಭವನ, 12 ಕೋಟಿ ರೂಪಾಯಿಯಲ್ಲಿ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಿದ್ದೆ. ಚಾಲನೆ ನೀಡಿ ಎರಡು ವರ್ಷ ಕಳೆದರೂ ಈವರೆಗೆ ಕಾಮಗಾರಿ ಆರಂಭವಾಗಿಲ್ಲ. ವರ್ಕ್ ಆರ್ಡರ್ ಕೊಡದಿರುವುದಕ್ಕೆ ನನಗೆ ನೋವಾಗಿದೆ ಎಂದು ಕಾಗೆ ಅಸಾಮಾಧಾನ ವ್ಯಕ್ತಪಡಿಸಿದ್ದರು.
ಎರಡ್ಮೂರು ದಿನಗಳಲ್ಲಿ ನನ್ನ ಸಮಸ್ಯೆ ಬಗ್ಗೆ ಮುಖ್ಯಮಂತ್ರಿ ಭೇಟಿ ಆಗಿ ಚರ್ಚಿಸುತ್ತೇನೆ. ಈ ವೇಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಅಚ್ಛರಿಪಡಬೇಕಿಲ್ಲ ಎಂದಿದ್ದರು.ಕಾಗವಾಡ ಶಾಸಕ ರಾಜು ಕಾಗೆ ಜೂನ್ 23 ರಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಇದರಿಂದ ರಾಜ್ಯ ಸರ್ಕಾರ ತೀವ್ರ ಮುಜುಗರಕ್ಕೆ ಒಳಗಾಗಿತ್ತು. ಆ ಬಳಿಕ ರಾಜು ಕಾಗೆ ಜೊತೆಗೆ ಪ್ರತ್ಯೇಕ ಸಭೆ ನಡೆಸಿ ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೆವಾಲ ಮನವೊಲಿಸಿದ್ದರು. ಬಹಿರಂಗ ಹೇಳಿಕೆ ನೀಡದಂತೆಯೂ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.












Click it and Unblock the Notifications