NEET ಮಾದರಿಯ ಕಠಿಣ ಕ್ರಮ ರಾಜ್ಯದ KPSC ಅಕ್ರಮದಲ್ಲೂ ಆಗಲಿ: ಮುಸ್ಲಿಂ ಹೇಳಿಕೆ ಬಗ್ಗೆ ಸಿಟಿ.ರವಿ ಸ್ಪಷ್ಟನೆ
ಚಿಕ್ಕಮಗಳೂರು: ನೀಟ್ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಇದೇ ಮಾದರಿಯ ಕ್ರಮವನ್ನು ಕರ್ನಾಟಕದಲ್ಲಿ KPSC ಸೇರಿದಂತೆ ವಿವಿಧ ನೇಮಕಾತಿ (Karnataka Recruitment) ಹಗರಣಗಳಲ್ಲೂ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರು, ಮುಸ್ಲಿಮರಿಗೆ ಸಂಬಂಧಿಸಿದ ಹೇಳಿಕೆ ಹಾಗೂ ಎಫ್‌ಐಆರ್ ಕುರಿತು ಸ್ಪಷ್ಟನೆ ನೀಡಿದರು.
ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್ ಕುರಿತು ಅವರು ಪ್ರತಿಕ್ರಿಯಿಸಿದರು. ತಾವು ಯಾವುದೇ ಸಂದರ್ಭದಲ್ಲಿ ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ಮಾತನಾಡಿಲ್ಲ. ನೀಟ್ ಪ್ರತಿಭಟನೆಯ ಸಂದರ್ಭದಲ್ಲಿ ಜೀಪಿನ ಪೆಟ್ರೋಲ್ ಟ್ಯಾಂಕ್‌ಗೆ ಬೆಂಕಿ ಹಚ್ಚಲು ಯತ್ನಿಸುತ್ತಿದ್ದ ಒಬ್ಬ ಮುಲ್ಲಾನ ಉಲ್ಲೇಖಿಸಿ ಮಾತನಾಡಿದ್ದೇನೆ. "ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ" ಎಂದು ಪ್ರಶ್ನಿಸಿದ್ದೇ ಹೊರತು, ಮುಸ್ಲಿಂ ಸಮುದಾಯದ ಬಗ್ಗೆ ಯಾವುದೇ ಅವಹೇಳನಕಾರಿ ಹೇಳಿಕೆ ನೀಡಿಲ್ಲ ಎಂದು ಅವರು ತಿಳಿಸಿದರು.

ತಾವು ಜಿಹಾದಿಗಳು, ಭಯೋತ್ಪಾದಕರು ಹಾಗೂ ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ ಕ್ರಿಮಿನಲ್‌ಗಳ ವಿರುದ್ಧ ಅಷ್ಟೇ ಮಾತನಾಡಿದ್ದೇನೆ ಎಂದು ಸ್ಪಷ್ಟನೆ ನೀಡಿದರು. ಆದರೆ ಮಾಧ್ಯಮಗಳು ತಮ್ಮ ಹೇಳಿಕೆಯನ್ನು ತಿರುಚಿ ಮುಸ್ಲಿಂ ಸಮುದಾಯದ ವಿರುದ್ಧ ಮಾತನಾಡಿರುವಂತೆ ಪ್ರಸಾರ ಮಾಡಿವೆ. ಇದರಿಂದ ತಪ್ಪು ಸಂದೇಶ ಹೋಗಿದೆ ಎಂದರು.
ತಮ್ಮ ವಿರುದ್ಧ ದೂರು ನೀಡಿರುವ ವ್ಯಕ್ತಿ ಮತ್ತು ತಾವು ಉಲ್ಲೇಖಿಸಿದ ಕ್ರಿಮಿನಲ್ ವ್ಯಕ್ತಿಯ ನಡುವೆ ಯಾವುದೇ ಸಂಬಂಧವಿದೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸಬೇಕು ಎಂದು ಅವರು ನಾನು ಬಂಧನಕ್ಕೆ ಹೆದರುವುದಿಲ್ಲ ಎಂದ ತಿಳಿಸಿರು.
KPSC ಹಗರಣದ ಬಗ್ಗೆ ಸರ್ಕಾರ ಮೌನ
ನೀಟ್ ವಿರುದ್ಧ ಕೇಂದ್ರ ಸರ್ಕಾರ ಕ್ರಮ ವಹಿಸಿದೆ, ಆದರೆ ಕರ್ನಾಟಕದಲ್ಲಿ ಕೆಪಿಎಸ್‌ಸಿ ಅಕ್ರಮಗಳ ಬಗ್ಗೆ ಕಾಂಗ್ರೆಸ್ ಸರ್ಕಾರ ಗಂಭೀರತೆ ಪ್ರದರ್ಶಿಸದೇ ಮೌನವಾಗಿರುವುದೇಕೆ?. ಪಶುವೈದ್ಯಕೀಯ ಇನ್‌ಸ್ಪೆಕ್ಟರ್ ಹುದ್ದೆಗೆ 80 ಲಕ್ಷದಿಂದ 1 ಕೋಟಿ ವರೆಗೆ ಹಣದ ಬೇಡಿಕೆ ಇಟ್ಟ ಆರೋಪಗಳು ಬಹಿರಂಗವಾಗಿವೆ. ಕಳೆದ ಎರಡೂವರೆ ವರ್ಷಗಳಲ್ಲಿ ಕೆಪಿಎಸ್‌ಸಿ ಮೂಲಕ ಸುಮಾರು 3 ಸಾವಿರಕ್ಕೂ ಹೆಚ್ಚು ನೇಮಕಾತಿ ನಡೆದಿವೆ. ಒಂದು ಹುದ್ದೆಯಲ್ಲೇ ಅಕ್ರಮ ನಡೆದಿದ್ದರೆ ಉಳಿದ ನೇಮಕಾತಿಗಳ ಬಗ್ಗೆಯೂ ಅನುಮಾನ ಮೂಡುತ್ತದೆ ಎಂದರು.
ಇನ್ನೂ ನೀಟ್ ಪರೀಕ್ಷೆ ನಡೆಸಿದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಆದರೆ ರಾಜ್ಯದಲ್ಲಿ ಮಲ್ಲಿಕಾರ್ಜುನ ಖರ್ಗೆಯವ ಕುಟುಂಬದ ಒಡೆತನದ ಸಿದ್ದಾರ್ಥ ಕಾನೂನು ಕಾಲೇಜಿನಲ್ಲಿ ನಡೆದ ಉತ್ತರಪತ್ರಿಕೆ ಅದಲು ಬದಲು ಪ್ರಕರಣ ಸೇರಿದಂತೆ ವಿವಿಧ ಶಿಕ್ಷಣ ಸಂಬಂಧಿತ ಆರೋಪಗಳಲ್ಲಿ ಯಾರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಪ್ರಶ್ನಿಸಿದರು.
ಎಸ್ಎಸ್ಎಲ್‌ಸಿ, ಸಿಇಟಿ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿಯೂ ರಾಜ್ಯ ಸರ್ಕಾರ ಗಂಭೀರ ಕ್ರಮ ಕೈಗೊಂಡಿಲ್ಲ. ಇದರಿಂದ ಭ್ರಷ್ಟಾಚಾರದ ವ್ಯವಸ್ಥೆಯನ್ನು ಕಾಂಗ್ರೆಸ್ ಸರ್ಕಾರವೇ ಪೋಷಿಸುತ್ತಿದೆ ಎಂಬ ಅನುಮಾನ ಮೂಡುತ್ತದೆ ಎಂದು ಕಿಡಿ ಕಾರಿದರು.
ನೀಟ್: ಕೇಂದ್ರದಿಂದ ಕಠಿಣ ಕ್ರಮ ಜಾರಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಕಠಿಣ ಕಾನೂನು ತರಲಿದ್ದಾರೆ. ಅಕ್ರಮದಲ್ಲಿ ಭಾಗಿಯಾದರೆ 10 ಕೋಟಿ ರೂ.ವರೆಗೆ ದಂಡ ವಿಧಿಸುವುದು ಹಾಗೂ ತಪ್ಪಿತಸ್ಥರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತಹ ತಿದ್ದುಪಡಿಗಳನ್ನು ತರಲಾಗುವುದು ಎಂದು ಘೋಷಿಸಿದ್ದಾರೆ.
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಸರ್ಕಾರದ ಪಾತ್ರವಿಲ್ಲದಿದ್ದರೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆ ನಡೆಸಿ 13 ಮಂದಿಯನ್ನು ಬಂಧಿಸಲಾಗಿದೆ. ಸುಸೂತ್ರವಾಗಿ ಮರುಪರೀಕ್ಷೆ ನಡೆಸಲಾಯಿತು. ಮರುಪರೀಕ್ಷೆಯ ಸಂದರ್ಭದಲ್ಲಿ ಪ್ರಶ್ನೆಪತ್ರಿಕೆಗಳನ್ನು ಭಾರತೀಯ ವಾಯುಪಡೆಯ ವಿಮಾನದ ಮೂಲಕ ಸುರಕ್ಷಿತವಾಗಿ ವಿವಿಧ ರಾಜ್ಯಗಳಿಗೆ ರವಾನಿಸಿದ್ದು ಕೇಂದ್ರ ಸರ್ಕಾರ ಪ್ರಕರಣವನ್ನು ಎಷ್ಟು ಗಂಭೀರವಾಗಿ ಪರಿಗಣಿಸಿತ್ತು ಎಂಬುದಕ್ಕೆ ಉದಾಹರಣೆಯಾಗಿದೆ ಎಂದು ಅವರು ವಿವರಿಸಿದರು.
ಇನ್ನೂ ತಮ್ಮ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಬೆದರಿಸುವ ಪ್ರಯತ್ನ ನಡೆದರೂ ಸತ್ಯವನ್ನು ಹೇಳುವುದನ್ನು ನಿಲ್ಲಿಸುವುದಿಲ್ಲ. ರಾಷ್ಟ್ರದ ಹಿತಾಸಕ್ತಿಗೆ ವಿರುದ್ಧವಾಗಿ ನಡೆಯುವ ಭಯೋತ್ಪಾದನೆ, ಜಿಹಾದಿ ಚಟುವಟಿಕೆಗಳು ಹಾಗೂ ರಾಷ್ಟ್ರವಿರೋಧಿ ಶಕ್ತಿಗಳ ವಿರುದ್ಧ ಮುಂದೆಯೂ ಧ್ವನಿ ಎತ್ತುತ್ತೇನೆ. ಎಫ್‌ಐಆರ್, ಬಂಧನಕ್ಕೆ ಹೆದರುವುದಿಲ್ಲ ಎಂದು ಪುನರುಚ್ಚರಿಸಿದರು.


Click it and Unblock the Notifications
