ಉಚಿತ ಭಾಗ್ಯಗಳನ್ನು ನಿಲ್ಲಿಸಲು ಕಾಂಗ್ರೆಸ್ ಹೊರಟಿದೆ ಎಂದ ಮೋದಿ: ಡಿ ಕೆ ಶಿವಕುಮಾರ್ ಏನಂದ್ರು?
ಬೆಂಗಳೂರು, ನವೆಂಬರ್ 02: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಒಳಗಿನ ರಾಜಕೀಯದಲ್ಲಿ ನಿರತವಾಗಿದೆ. ಅಭಿವೃದ್ಧಿಯ ಬಗ್ಗೆ ಕಾಳಜಿ ವಹಿಸುವ ಬದಲು ಲೂಟಿ ಮಾಡುತ್ತಿದೆ. ಅಷ್ಟೇ ಅಲ್ಲ ಇದೀಗ ಜನರಿಗೆ ನೀಡಿದ ಫ್ರೀ ಸ್ಕೀಮ್‌ಗಳನ್ನು ಹಿಂಪಡೆಯಲು ಕೂಡ ಹೊರಟಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪೊಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಗ್ಯಾರಂಟಿ ಯೋಜನೆಗಳ ವಿರುದ್ಧ ಪ್ರಧಾನಿ ಮೋದಿ ಅವರ ಎಕ್ಸ್ (ಟ್ವೀಟ್) ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಹಿಂದಕ್ಕೆ ಪಡೆಯುತ್ತದೆ ಎಂದು ಮೋದಿ ಅವರನ್ನು ಪ್ರಧಾನಮಂತ್ರಿ ಕಚೇರಿ ದಾರಿ ತಪ್ಪಿಸಿದೆ. ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ ಕಳೆದ 60 ವರ್ಷಗಳಲ್ಲಿ ನೀಡಿದ ಯಾವುದೇ ಯೋಜನೆಗಳನ್ನು ಹಿಂದಕ್ಕೆ ಪಡೆದ ಇತಿಹಾಸವಿಲ್ಲ. ಉಳುವವನಿಗೆ ಭೂಮಿ, ಪಿಂಚಣಿ ಯೋಜನೆ, ನರೇಗಾ ಸೇರಿದಂತೆ ಅನೇಕ ಯೋಜನೆಗಳು ಈಗಲೂ ಚಾಲ್ತಿಯಲ್ಲಿವೆ ಎಂದು ಹೇಳಿದರು.
ಬಿಜೆಪಿಯಿಂದ ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಕೆಟ್ಟ ರಾಜಕೀಯ ಗಿಮಿಕ್ ನಡೆಯುತ್ತಿದೆ. ದೇಶದ ಉನ್ನತ ಕಚೇರಿಯು ಇಂತಹ ಸುಳ್ಳು ಹರಡಬಾರದು. ಬಿಜೆಪಿಯು ಅನೇಕ ರಾಜ್ಯಗಳಲ್ಲಿ ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿದೆ ಎಂದು ತಿರುಗೇಟು ನೀಡಿದರು.
ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ಗುರಿಯಾಗಿಟ್ಟುಕೊಂಡು ಈ ಹೇಳಿಕೆ ನೀಡಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಕಾಂಗ್ರೆಸ್ ಪಕ್ಷವು ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂಬುದು ಪ್ರಧಾನಿಯವರಿಗೆ ಅರಿವಾಗಿದೆ. ಆದ ಕಾರಣಕ್ಕೆ ಅನವಶ್ಯಕ ವಾಗ್ದಾಳಿ ನಡೆಸುತ್ತಿದ್ದಾರೆ ಎಂದರು.
ಮೋದಿಗೆ ಸವಾಲು ಹಾಕಿದ ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಬಡವರ ಕೈಗೆ ದುಡ್ಡು ಸಿಕ್ಕಿ ಅದು ಮಾರುಕಟ್ಟೆಗೆ ಹರಿದುಬಂದು ಅದರಿಂದ ತೆರಿಗೆ ಸಂಗ್ರಹವೂ ಹೆಚ್ಚಾಗಿ, ರಾಜ್ಯದ ಆರ್ಥಿಕತೆಗೆ ಬಲ ಬರಲಿದೆ ಎಂದು ಪ್ರಾರಂಭದಿಂದಲೂ ನಾನು ಹೇಳಿಕೊಂಡು ಬಂದಿದ್ದೇನೆ. ಅದು ಇಂದು ನಿಜವಾಗಿದೆ. ಇದಕ್ಕಾಗಿ ಕರ್ನಾಟಕಕ್ಕೆ ನೀವು ಶಹಾಬಾಸ್ ಗಿರಿ ಕೊಡಬೇಕಿತ್ತು, ಆದರೆ ನೀವು ಸುಳ್ಳಿನ ಬಾಣಗಳ ಮೂಲಕ ಕನ್ನಡಿಗರನ್ನು ಅವಮಾನಿಸುತ್ತಿದ್ದೀರಿ. ಇದು ಖಂಡನೀಯ, ಸಹಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಸನ್ಮಾನ್ಯ ಮೋದಿ ಅವರೇ, ನಮ್ಮ ಸರ್ಕಾರದ ಕಡೆಗೆ ಬೆರಳು ಮಾಡುವ ಮುನ್ನ ಕರ್ನಾಟಕದ ಬಿಜೆಪಿ ಪಕ್ಷದ ವಿನಾಶಕಾರಿ ಇತಿಹಾಸದ ಮೇಲೊಮ್ಮೆ ಕಣ್ಣಾಯಿಸಿ. ನಾವು ಜನರಿಗೆ ನೀಡಿದ್ದ ಪ್ರತಿ ಭರವಸೆಯನ್ನು ಈಡೇರಿಸಿದ್ದೇವೆ - ನಮ್ಮ 5 ಗ್ಯಾರಂಟಿ ಯೋಜನೆಗಳನ್ನು ₹52,000 ಕೋಟಿಗೂ ಅಧಿಕ ಅನುದಾನದಲ್ಲಿ ಅನುಷ್ಠಾನಕ್ಕೆ ಕೊಟ್ಟಿದ್ದೇವೆ, ಇದರ ಜೊತೆಗೆ ನಾಡಿನ ಭವಿಷ್ಯ ರೂಪಿಸಲು ₹52,903 ಕೋಟಿ ಅನುದಾನ ಬಳಸಲಾಗುತ್ತಿದೆ.
ರಾಜ್ಯದಲ್ಲಿ ಅಧಿಕಾರದಲ್ಲಿದ್ದ ನಿಮ್ಮ ಪಕ್ಷದ ಸಾಧನೆ ಏನು? ಏಳು ಕೋಟಿ ಕನ್ನಡಿಗರ ಅಭಿವೃದ್ದಿಗಾಗಿ ವ್ಯಯವಾಗಬೇಕಾಗಿದ್ದ ಜನರ ಬೆವರ ಗಳಿಕೆಯ ತೆರಿಗೆ ಹಣವನ್ನು 40% ಕಮಿಷನ್ ರೂಪದಲ್ಲಿ ತಿಂದು ತೇಗಿದ್ದೇ? ಆದಾಯದ ಮೂಲಗಳನ್ನೆಲ್ಲ ಬರಿದು ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿಯ ಅಂಚಿಗೆ ತಳ‍್ಳಿದ್ದೇ? ಈ ರೀತಿ ಲೂಟಿ ಮಾಡಿದ್ದ ಹಣದಲ್ಲಿ ನಿಮಗೂ ಪಾಲು ಸಂದಾಯವಾಗಿದೆ ಎಂದು ನಿಮ್ಮ ಪಕ್ಷದ ನಾಯಕರೇ ಮಾಡಿರುವ ಆರೋಪ ನಿಮ್ಮ ಗಮನಕ್ಕೂ ಬಂದಿರಬಹುದಲ್ಲವೇ?ಪ್ರಧಾನಿ ನರೇಂದ್ರ ಮೋದಿಯವರೇ, ನಿಮ್ಮ ನಾಯಕರು ಲೂಟಿ ಮಾಡುತ್ತಿದ್ದ 40% ಕಮಿಷನ್ ಹಣವನ್ನು ನಾವು ನೇರವಾಗಿ ಜನರಿಗೆ ತಲುಪಿಸುತ್ತಿದ್ದೇವೆ.
ಪ್ರಧಾನಿ ನರೇಂದ್ರ ಮೋದಿ ಅವರೇ, ಆಗಾಗ ನೀವು ಸುಳ್ಳು ಸಂಗತಿಗಳನ್ನು ಪೋಣಿಸಿಕೊಂಡು ಕರ್ನಾಟಕ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಾ ಬಂದಿದ್ದೀರಿ. ಈ " ತೂ ತೂ ಮೈ ಮೈ.." ಚರ್ಚೆಗೆ ತಾರ್ಕಿಕವಾದ ಅಂತ್ಯ ಹಾಡಿ ಬಿಡೋಣ.
ಕಳೆದ ಎರಡು ಲೋಕಸಭಾ ಚುನಾವಣೆಯ ಮುನ್ನ ನಿಮ್ಮ ಪಕ್ಷ ಬಿಡುಗಡೆಗೊಳಿಸಿದ್ದ ಪ್ರಣಾಳಿಕೆಯನ್ನು ಇಟ್ಟುಕೊಂಡು ಒಂದು ಸಾರ್ವಜನಿಕ ಚರ್ಚೆಯನ್ನು ಹಮ್ಮಿಕೊಳ್ಳೋಣ. ಪ್ರಣಾಳಿಕೆಯಲ್ಲಿ ನೀವು ಕೊಟ್ಟಿರುವ ಭರವಸೆಗಳಲ್ಲಿ ಎಷ್ಟನ್ನು ನೀವು ಈಡೇರಿಸಿದ್ದೀರಿ? ಎನ್ನುವುದನ್ನು ಸಾರ್ವಜನಿಕವಾಗಿಯೇ ಚರ್ಚೆ ಮಾಡೋಣ. ದೇಶದ ಪ್ರಜ್ಞಾವಂತ ಜನರೇ ಯಾರದ್ದು ಎಷ್ಟು ಸತ್ಯ? ಎಷ್ಟು ಸುಳ್ಳು? ಎನ್ನುವುದನ್ನು ತೀರ್ಮಾನಿಸಲಿ.












Click it and Unblock the Notifications