
ನೈಋತ್ಯ ಮುಂಗಾರು: ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಅಧಿಕ ಮಳೆ
ಬೆಂಗಳೂರು, ಜೂನ್ 07:ರಾಜ್ಯಕ್ಕೆ ನೈಋತ್ಯ ಮುಂಗಾರು ಪ್ರವೇಶವಾಗಿದ್ದು, 21 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಶುರುವಾಗಿದ್ದು, ಈಗಾಗಲೇ ಕೇರಳವನ್ನು ಪ್ರವೇಶಿಸಿರುವ ನೈರುತ್ಯ ಮುಂಗಾರು ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿಗೂ ಆಗಮಿಸಿದೆ. ಹೀಗಾಗಿ, ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಮುಂದುವರೆಯಲಿದೆ.
ನೈಋತ್ಯ ಮುಂಗಾರು; ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಮಳೆ
ಭಾರೀ ಮಳೆಯಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡಿನಲ್ಲೂ ಉತ್ತಮ ಮಳೆಯಾಗುತ್ತಿದ್ದು, ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ.
ಕರ್ನಾಟಕ ಮಾತ್ರವಲ್ಲದೆ ಕೇರಳ, ಅಸ್ಸಾಂ, ಮೇಘಾಲಯ, ಮಿಜೋರಾಂ, ತೆಲಂಗಾಣ, ರಾಯಲಸೀಮೆ, ಗೋವಾ, ಮಾಹೆ, ಗುಜರಾತ್, ಮಹಾರಾಷ್ಟ್ರ, ಅರುಣಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಂದು ಬಾರಿ ಮುಂಗಾರು ಆರಂಭವಾದ ನಂತರ ಅದರ ಪರಿಣಾಮ ಯಾವ ರೀತಿ ಇರಬಹುದು ಎಂದು ನಾವು ಅಂದಾಜಿಸಬಹುದು.

ಮುಂಗಾರು ಮಳೆಯ ಆರ್ಭಟ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು ಇಂದು ಕೂಡ ಮಳೆ ಮುಂದುವರೆಯಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮಲೆನಾಡಿನಲ್ಲೂ ಮಳೆಯ ಅಬ್ಬರ ಶುರುವಾಗಿದ್ದು, ರೈತರು ಮಳೆಗಾಲದ ತಯಾರಿಯಲ್ಲಿ ತೊಡಗಿದ್ದಾರೆ.

ಮೇಲ್ಮೈ ಸುಳಿಗಾಳಿ ತೀವ್ರ
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರಗೊಂಡಿರುವುದರಿಂದ ರಾಜ್ಯದಲ್ಲಿ ಇಂದು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟಿಸಲಿದೆ.
ಮಲೆನಾಡಿನಲ್ಲೂ ಮಳೆ
ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರಕನ್ನಡದಲ್ಲಿ ನಿನ್ನೆ ಸಂಜೆಯಿಂದ ಆರಂಭವಾದ ಮಳೆ ಇಂದು ಮುಂಜಾನೆಯವರೆಗೂ ಒಂದೇ ಸಮನೆ ಆರ್ಭಟಿಸಿದೆ. ಮುಂಗಾರು ಆಗಮನವಾದ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆಯನ್ನು ಚುರುಕುಗೊಳಿಸಿದ್ದಾರೆ. ಜೂನ್ ೩ರಂದು ಕೇರಳಕ್ಕೆ ಮುಂಗಾರಿನ ಪ್ರವೇಶವಾಗಿದ್ದು, ಅದರ ಪರಿಣಾಮವಾಗಿ ಮಲೆನಾಡು,ಕರಾವಳಿ ತೀರದಲ್ಲೂ ವ್ಯಾಪಕ ಮಳೆಯಾಗುತ್ತಿದೆ.

ಮುಂಗಾರು ಅಬ್ಬರ ಹೆಚ್ಚಾಗಲಿದೆ
ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಇನ್ನು ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯ ಕಾರಣಕ್ಕೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ಮಲೆನಾಡು, ಕರಾವಳಿ ಮಾತ್ರವಲ್ಲದೆ ವಿಜಯಪುರ, ಬೆಳಗಾವಿ, ಗದಗ ಭಾಗದಲ್ಲೂ ಮಳೆಯ ಅಬ್ಬರ ಹೆಚ್ಚಾಗಿದೆ. ಈಗಾಗಲೇ ರಾಜ್ಯಕ್ಕೆ ನೈರುತ್ಯ ಮುಂಗಾರಿನ ಪ್ರವೇಶವಾಗಿದೆ. ಜೂನ್ ಮೂರನೇ ವಾರದ ವೇಳೆಗೆ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ.
ಈಗಾಗಲೇ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗುತ್ತಿದೆ.