ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ vs ಸತೀಶ್ ಜಾರಕಿಹೊಳಿ ಪುತ್ರಿ: ಯಾರಿಗೆ ಸಿಗಲಿದೆ ಬೆಳಗಾವಿ 'ಕೈ' ಟಿಕೆಟ್? ಎಲ್ಲರ ಚಿತ್ತ ಡಿಕೆಶಿ
ಬೆಂಗಳೂರು, ಜನವರಿ 08: 2024 ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಸರತ್ತಿಗೆ ಈಗಾಗಲೇ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಸಚಿವರ ಸ್ಪರ್ಧೆಗೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದ್ದು, ಬೆಳಗಾವಿ ಲೋಕಸಭಾ ಟಿಕೆಟ್ ಗಾಗಿ ಬಾರೀ ಪೈಪೋಟಿ ಏರ್ಪಟ್ಟಿದೆ.
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿನ ಕೆಲ ಸಚಿವರನ್ನು ಚುನಾವಣೆಗೆ ನಿಲ್ಲಿಸುವ ಬಗ್ಗೆ ಕಾಂಗ್ರೆಸ್ ಯೋಚನೆ ಮಾಡುತ್ತಿದೆ. ಹೀಗಾಗಿ ಬೆಳಗಾವಿ ಲೋಕಸಭಾ ಕ್ಷೇತ್ರವನ್ನ ಈ ಬಾರೀ ಗೆಲ್ಲುವ ನಿಟ್ಟಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ವರ್ಚಸ್ಸು, ಜನಬಳಕೆಯನ್ನ ಬಳಸಿಕೊಂಡು ಚುನಾವಣಾ ಕಣಕ್ಕಿಳಿಯಲು ತಯಾರಿ ನಡೆಸಿದೆ. ಆದರೆ, ಸತೀಶ್ ಜಾರಕಿಹೊಳಿ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗಲು ನನಗೆ ಇಷ್ಟವಿಲ್ಲ ಎಂದು ಹೇಳಿದ್ದು, ಪುತ್ರಿಯನ್ನ ಕಣಕ್ಕಿಳಿಸಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.

ಈಗಾಗಲೇ ಸ್ಥಳೀಯ ಮಟ್ಟದ ರಾಜಕೀಯದಲ್ಲಿ ಹೆಚ್ಚು ಆಕ್ಟೀವ್ ಆಗಿರುವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಜಾರಕಿಹೊಳಿ ಕುಟುಂಬಸ್ಥರು ಮುಂದಾಗಿದ್ದಾರೆ ಎನ್ನಲಾಗಿದೆ.
ಅಲ್ಲದೇ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಸತೀಶ್ ಜಾರಕಿಹೊಳಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಬೆಳಗಾವಿ ರಾಜಕೀಯದ ಕುರಿತು ಪದೇ ಪದೇ ಡಿ ಕೆ ಶಿವಕುಮಾರ್ ಎಂಟ್ರಿಯಾಗುತ್ತಿರುವ ಕುರಿತು ಸತೀಶ್ ಜಾರಕಿಹೊಳಿ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಇದೀಗ ಇಬ್ಬರು ಸಚಿವರುಗಳಾದ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ಮಕ್ಕಳನ್ನ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ತಯಾರಿ ನಡೆಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಹೆಸರು ಬೆಳಗಾವಿಗೆ ಕೇಳಿಬರುತ್ತಿದೆ, ಅದೇ ರೀತಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಸರು ಕೂಡಾ ಮುಂಚೂಣಿಯಲ್ಲಿದೆ. ಆದರೆ ಈ ಬಗ್ಗೆ ಸತೀಶ್ ಜಾರಕಿಹೊಳಿ ಆಗಲಿ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಮಕ್ಕಳಿಗೆ ಟಿಕೆಟ್ ವಿಚಾರವಾಗಿ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದಲ್ಲಿ ಗುರುತಿಸಿಕೊಂಡಿರುವ ಸತೀಶ್ ಜಾರಕಿಹೊಳಿ ಪುತ್ರಿಗೆ ಟಿಕೆಟ್ ಕೊಡಿಸುವ ವಿಚಾರವಾಗಿ ಈಗಾಗಲೇ ಹೈಕಮಾಂಡ್ ನಾಯಕರ ಮಟ್ಟದಲ್ಲೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇತ್ತ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ಜೊತೆಗೆ ಉತ್ತಮ ಸ್ನೇಹ ಸಂಬಂಧ ಹೊಂದಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಹ ಈಗಾಗಲೇ ಮಗನಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ.
ಇನ್ನೂ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಉತ್ತಮ ಸಂಬಂಧ ಹೊಂದಿರುವ ಡಿ ಕೆ ಶಿವಕುಮಾರ್ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನಿಗೆ ಟಿಕೆಟ್ ಕೊಡಿಸುವ ಪ್ರಯತ್ನಕ್ಕೆ ಮುಂದಾಗುತ್ತಾರಾ ಎಂಬ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನ ಏಕಾಂಗಿಯಾಗಿ ಭೇಟಿ ಮಾಡಿ ಬಂದಿರುವ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅವರ ಜೊತೆಗೆ ಬೆಳಗಾವಿ ರಾಜಕೀಯ ಹಾಗೂ ಲೋಕಸಭಾ ಚುಣಾವಣೆಯ ಕುರಿತಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.












Click it and Unblock the Notifications