MUDA case: ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್, ಲೋಕಾಯಯಕ್ತ ವರದಿಯ ಅಂಶಗಳು
ಬೆಂಗಳೂರು, ಫೆಬ್ರವರಿ 19: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಕ್ಕಿದೆ. ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬಳಿಕ ಈ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ 'ಮೈಸೂರು ಚಲೋ' ಪಾದಯಾತ್ರೆ ನಡೆಸಿದ್ದವು.
ಕರ್ನಾಟಕ ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಮುಡಾ ಪ್ರಕರಣದ ತನಿಖೆ ನಡೆಸಲು ಆದೇಶಿಸಿತ್ತು. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆ ನಡೆಸಬೇಕು ಎಂದು ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಈ ಮೂಲಕ ಸಿದ್ದರಾಮಯ್ಯಗೆ ರಿಲೀಫ್ ಸಿಕ್ಕಿತ್ತು.

ಲೋಕಾಯುಕ್ತರು ಪ್ರಕರಣದ ಕುರಿತು ತನಿಖೆ ನಡೆಸಿ ಕರ್ನಾಟಕ ಹೈಕೋರ್ಟ್‌ಗೆ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ. ಆದ್ದರಿಂದ ಸಿದ್ದರಾಮಯ್ಯಗೆ ಮುಡಾ ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಕ್ಕಿದಂತಾಗಿದೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದ ಪ್ರತಿಪಕ್ಷಗಳಿಗೆ ಮುಖಭಂಗವಾಗಿದೆ.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿದ್ದರಾಮಯ್ಯ ಪತ್ನಿ ಪಾರ್ವತಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಮೈದ ಬಿ. ಎಂ. ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜೆ. ದೇವರಾಜು ಆರೋಪಿಗಳಾಗಿದ್ದರು.
ಲೋಕಾಯುಕ್ತ ವರದಿಯಲ್ಲಿ ಏನಿದೆ?; ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ಲೋಕಾಯುಕ್ತ ಪೊಲೀಸರು ದೂರುದಾರ ಸ್ನೇಹಮಯಿ ಕೃಷ್ಣಗೆ ನೀಡಿರುವ ನೋಟಿಸ್‌ನಲ್ಲಿ ಸಾಕ್ಷ್ಯಾಧಾರಗಳ ಕೊರತೆ ಎಂದು ಕಂಡು ಬಂದಿದೆ ಎಂದು ಉಲ್ಲೇಖಿಸಿದ್ದಾರೆ.
ಲೋಕಾಯುಕ್ತರು ನೋಟಿಸ್‌ನಲ್ಲಿ ಸ್ನೇಹಮಯಿ ಕೃಷ್ಣ ಬಿನ್ ಲೇ ಸಿದ್ದಪ್ಪ, 54 ವರ್ಷ, ಪತ್ರಕರ್ತ ಮತ್ತು ಸಾಮಾಜಿಕ ಹೋರಾಟಗಾರ, ಮೈಸೂರು ಅವರಿಗೆ ದ್ವಿ ಪ್ರತಿ ನೋಟಿಸ್ ಎಂದು ಉಲ್ಲೇಖಿಸಿದ್ದಾರೆ.
ಈ ಮೂಲಕ ತಮಗೆ ತಿಳಿಯಪಡಿಸುವುದೇನೆಂದರೆ, ತಾವು ನೀಡಿದ ದೂರಿನ ಮೇರೆಗೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ, ಮೈಸೂರು ಮೊ.ನಂ 11/2024, ಕಲಂ 120(ಬಿ), 166, 403, 406, 420, 426, 465, 468, 340, 351 ಭಾರತೀಯದಂಡ ಸಂಹಿತೆ, 9, 13 ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988, 3, 53 & 54 ಬೇನಾಮಿ ಆಸ್ತಿ ವಹಿವಾಟುತಡೆ ಕಾಯ್ದೆ-1988, 3, 4 ಕರ್ನಾಟಕ ಭೂ ಕಬಳಿಕೆ ಕಾಯ್ದೆ-2011 ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದೆ.
ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿದ್ದು ತನಿಖಾಧಿಕಾರಿಗಳಿಗೆ ಸಿವಿಲ್ ಸ್ವರೂಪದ್ದೆಂದು, ತನಿಖೆ ನಡೆಸಲು ತಕ್ಕುದಲ್ಲವೆಂದು, ಸಂಗತಿ ಅಥವಾ ಕಾನೂನಿನ ತಪ್ಪು ತಿಳುವಳಿಕೆಯೆಂದು, ಕ್ರಮ ಜರುಗಿಸತಕ್ಕುದಲ್ಲವೆಂದು (ಇದರಡಿಯಲ್ಲಿ ತನಿಖೆ ನಡೆಸದೆ ವಜಾ ಮಾಡಿದ ಮೊಕದ್ದಮೆಗಳು ಬರುತ್ತವೆ) ಎಂದು ಹೇಳಿದೆ. ಸಾಕ್ಷ್ಯಾಧಾರಗಳ ಕೊರತೆ ಎಂದು ಕಂಡು ಬಂದಿದ್ದು ಈ ವರದಿಯನ್ನು ವಿರೋಧಿಸುವುದಿದ್ದರೆ, ತಾವು ಈ ನೋಟಿಸ್ ತಲುಪಿದ ಒಂದು ವಾರದೊಳಗಾಗಿ ಮ್ಯಾಜಿಸ್ಟ್ರೇಟರ ಎದುರು ಆ ಬಗ್ಗೆ ವಿರೋಧಿಸಬಹುದಾಗಿದೆ.
ಪ್ರಕರಣದ ಆರೋಪಿ-1 ರಿಂದ ಆರೋಪಿ-4 ರವರೆಗಿನ ಮೇಲಿನ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲವಾದ್ದರಿಂದ ಅಂತಿಮ ವರದಿಯನ್ನು ಘನ ನ್ಯಾಯಾಲಯಕ್ಕೆ ಸಲ್ಲಿಸಿಕೊಳ್ಳುತ್ತಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 2016ನೇ ಸಾಲಿನಿಂದ 2024ನೇ ಸಾಲಿನವರೆಗೆ 50:50 ಅನುಪಾತದಲ್ಲಿ ಪರಿಹಾರಾತ್ಮಕ ನಿವೇಶನಗಳನ್ನು ನೀಡಿರುವ ಆರೋಪಗಳ ಬಗ್ಗೆ ಹೆಚ್ಚುವರಿ ತನಿಖೆ ನಡೆಸಿ ಕಲಂ 173 (8) ಸಿ.ಆರ್.ಪಿ.ಸಿ ರೀತ್ಯಾ ಹೆಚ್ಚುವರಿ ಅಂತಿಮ ವರದಿಯನ್ನು ಘನ ನ್ಯಾಯಾಲಯಕ್ಕೆ ಸಲ್ಲಿಸಿಕೊಳ್ಳಲಾಗುವುದು ಎಂದು ತಿಳಿಸಿದೆ.












Click it and Unblock the Notifications