Siddaramaiah: ಮುಡಾ ಹಗರಣ, ಸಿದ್ದರಾಮಯ್ಯ ಅರ್ಜಿ ವಿಚಾರಣೆ ಆ.31ಕ್ಕೆ ಮುಂದೂಡಿಕೆ
ಬೆಂಗಳೂರು, ಆಗಸ್ಟ್ 29: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿ ಗುರುವಾರ ನಡೆಯಿತು. ಆಗಸ್ಟ್ 19ರಂದು ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಆಗಸ್ಟ್ 29ರ ತನಕ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂದು ಅಧೀನ ನ್ಯಾಯಾಲಯಕ್ಕೆ ಸೂಚನೆ ನೀಡಿ, ವಿಚಾರಣೆ ಮುಂದೂಡಿತ್ತು.
ಗುರುವಾರ ಮಧ್ಯಾಹ್ನ ಕರ್ನಾಟಕ ಹೈಕೋರ್ಟ್‌ನಲ್ಲಿ ಮತ್ತೆ ಅರ್ಜಿಯ ವಿಚಾರಣೆ ನಡೆಯಿತು. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅರ್ಜಿಯನ್ನು ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಪರವಾಗಿ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡನೆಯನ್ನು ಮಾಡಿದರು.

ಆಗಸ್ಟ್ 31ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ: ಗುರುವಾರ ಸಿದ್ದರಾಮಯ್ಯ ಪರ ವಕೀಲರ ವಾದ ಆಲಿಸಿದ ಕೋರ್ಟ್ ಆಗಸ್ಟ್ 31ರ ಶನಿವಾರ ಬೆಳಗ್ಗೆ 10.30ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿ ಆದೇಶಿಸಿತು. ಅಲ್ಲದೇ ಅಲ್ಲಿಯ ತನಕ ಈ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಣೆ ಮಾಡಿತು.
ಸಿದ್ದರಾಮಯ್ಯ ಪರವಾಗಿ ವಾದ ಮಂಡಿಸಿದ ಅಭಿಷೇಕ್ ಮನು ಸಿಂಘ್ವಿ ರಾಜ್ಯಪಾಲ ಥಾವರಚಂದ್ ಗೆಹ್ಲೇಟ್ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ್ದಾರೆ. ಆದರೆ ಸೆಕ್ಷನ್ 17-ಎ ಅನ್ವಯವಾಗುವುದಿಲ್ಲ. ಇದರ ಆಧಾರದ ಮೇಲೆ ಅನುಮತಿ ನೀಡಿರುವುದು ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.
ಈ ಪ್ರಕರಣದಲ್ಲಿ ಇಬ್ಬರು ಆಕ್ಷೇಪಣೆ ಸಲ್ಲಿಸಿದ್ದಾರೆ. ರಾಜ್ಯಪಾಲರು ಆಕ್ಷೇಪಣೆ ಸಲ್ಲಿಸುವುದಿಲ್ಲ. ಅಗತ್ಯ ಬಿದ್ದರೆ ಕಡತಗಳನ್ನು ಸಲ್ಲಿಕೆ ಮಾಡಲು ಸಿದ್ಧರಿದ್ದಾರೆ ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಲಾಯಿತು. ಈಗ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿರುವ ಕಾರಣ ಸಿದ್ದರಾಮಯ್ಯಗೆ ಇನ್ನೂ ಎರಡು ದಿನ ರಿಲೀಫ್ ಸಿಕ್ಕಿದೆ.
ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದಲ್ಲಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ. ಎಸ್. ಪೊನ್ನಣ್ಣ ಸಹ ಕೋರ್ಟ್ ಹಾಲ್‌ನಲ್ಲಿದ್ದರು.
ಅಭಿಷೇಕ್ ಮನು ಸಿಂಘ್ವಿ ವಾದ ಮಾಡುವಾಗ ಟಿ. ಜೆ. ಅಬ್ರಹಾಂ ಪೊಲೀಸರಿಗೆ ನೀಡಿರುವ ದೂರು ಓದಿದರು. ಅರ್ಜಿದಾರರು ಈಗ ಪ್ರಾಸಿಕ್ಯೂಷನ್‌ಗೆ ಅನುಮತಿ ಅಗತ್ಯವಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿ ಅವರ ಸಮಯ ವ್ಯರ್ಥ ಮಾಡಿದ್ದಾರೆ. ಅವರಿಗೆ ದಂಡ ವಿಧಿಸಬೇಕು ಎಂದರು.
ಸಿದ್ದರಾಮಯ್ಯ ವಿರುದ್ಧ ತನಿಖೆಗ ಅವಕಾಶ ನೀಡಬೇಕು ಎಂದು ಕೋರಿ ಜನಪ್ರತಿನಿಧಿಗಳ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್ ತೀರ್ಪು ಕಾಯ್ದಿರಿಸಿದೆ. ಆದರೆ ಹೈಕೋರ್ಟ್ ಆದೇಶದ ಕಾರಣ ಆಗಸ್ಟ್ 31ರ ತನಕ ಕೋರ್ಟ್ ತೀರ್ಪು ಪ್ರಕಟಿಸುವಂತಿಲ್ಲ. ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತೆ ಆಗಿದೆ.












Click it and Unblock the Notifications