MUDA Scam: ಮುಡಾ ಹಗರಣ, ಸಿದ್ದರಾಮಯ್ಯಗೆ ಶಾಕ್, ಅರ್ಜಿ ವಜಾ
ಬೆಂಗಳೂರು, ಸೆಪ್ಟೆಂಬರ್ 24: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಭಾರೀ ಹಿನ್ನಡೆಯಾಗಿದೆ. ಕರ್ನಾಟಕ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದ್ದು, ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ತೀರ್ಮಾನವನ್ನು ಕೋರ್ಟ್ ಎತ್ತಿ ಹಿಡಿದಿದೆ. ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಮಂಗಳವಾರ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಈ ಕುರಿತು ತೀರ್ಪು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ತಮ್ಮ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ್ದನ್ನು ಪ್ರಶ್ನೆ ಮಾಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದರು. ಕರ್ನಾಟಕ ರಾಜ್ಯಪಾಲರ ಕಾರ್ಯದರ್ಶಿ ಪರವಾಗಿ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು. ವಿವರವಾದ ವಾದ-ವಿವಾದ ಆಲಿಸಿದ್ದ ನ್ಯಾಯಪೀಠ ಸೆಪ್ಟೆಂಬರ್ 24ಕ್ಕೆ ತೀರ್ಪನ್ನು ಕಾಯ್ದಿರಿಸಿತ್ತು.
ಆದೇಶದ ವಿವರ: ರಾಜ್ಯಪಾಲರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿರುವ ಕ್ರಮ ಸರಿಯಾಗಿದೆ. ಮುಖ್ಯಮಂತ್ರಿಗಳ ಕುಟುಂಬಸ್ಥರು ಇದರ ಫಲಾನುಭವಿಗಳಾಗಿದ್ದಾರೆ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.
ಆದೇಶದಲ್ಲಿ ಕೋರ್ಟ್ ಖಾಸಗಿ ದೂರುದಾರರೇ ಅನುಮತಿ ಕೋರಬಹುದು. 17-ಎ ಅಡಿ ಅನುಮತಿ ಕೋರಬಹುದು ಎಂದು ತೀರ್ಪಿನ ಸಾರಾಂಶದಲ್ಲಿ ತಿಳಿಸಿದೆ. ರಾಜ್ಯಪಾಲರ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ಕಾನೂನೂ ಹೋರಾಟದಲ್ಲಿ ತೀವ್ರ ಹಿನ್ನಡೆಯಾಗಿದೆ.
ಹೈಕೋರ್ಟ್ ತೀರ್ಪು ಬರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ತೀರ್ಪು ಬಂದ ಬಳಿಕ ಅವರು ಗೃಹ ಕಛೇರಿ ಕಾವೇರಿಗೆ ವಾಪಸ್ ಆದರು, ಆದರೆ ಹೋಟೆಲ್ ಬಳಿ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
ಗೃಹ ಕಛೇರಿಯಲ್ಲಿ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೇರಿದಂತೆ ವಿವಿಧ ಸಚಿವರು ಇದ್ದಾರೆ. ಕೋರ್ಟ್ ತೀರ್ಪಿನ ಕುರಿತು ಸಿದ್ದರಾಮಯ್ಯ ಸಚಿವರು, ಕಾನೂನು ತಜ್ಞರ ಜೊತೆ ಸಭೆಯನ್ನು ನಡೆಸುತ್ತಿದ್ದಾರೆ. ಮುಂದಿನ ಕಾನೂನು ಹೋರಾಟದ ಕುರಿತು ಅವರು ತೀರ್ಮಾನ ಕೈಗೊಳ್ಳಲಿದ್ದಾರೆ.
ಈ ಕುರಿತು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ತೀರ್ಪು ನೀಡಿದೆ. ಏಕಸದಸ್ಯ ಪೀಠದ ತೀರ್ಮಾನವನ್ನು ದ್ವಿಸದಸ್ಯ ಪೀಠದಲ್ಲಿ ಪ್ರಶ್ನೆ ಮಾಡಲು ಅವಕಾಶವಿದೆ. ಅಲ್ಲದೇ ಸುಪ್ರೀಂಕೋರ್ಟ್‌ನಲ್ಲಿ ಸಹ ಕಾನೂನು ಹೋರಾಟವನ್ನು ನಡೆಸಲು ಆಯ್ಕೆಗಳಿವೆ. ಆದ್ದರಿಂದ ಸಿದ್ದರಾಮಯ್ಯ ಮುಂದಿನ ತೀರ್ಮಾನ ಕುತೂಹಲಕ್ಕೆ ಕಾರಣವಾಗಿದೆ.
ಕೋರ್ಟ್ ತೀರ್ಪಿನ ಪ್ರಮುಖ ಅಂಶಗಳು
* ಈ ಕುರಿತು ದೂರು ನೀಡಿದ ಖಾಸಗಿ ದೂರುದಾರರೇ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಅಡಿಯಲ್ಲಿ ತನಿಖೆಗೆ ಅನುಮತಿ ನೀಡುವಂತೆ ಕೋರಬಹುದು.
* ರಾಜ್ಯಪಾಲರು ಈ ವಿಚಾರದಲ್ಲಿ ನೋಡಿದ ನೋಟಿಸ್‌ಗೆ ಸಚಿವ ಸಂಪುಟ ಸಭೆ ನೀಡಿದ್ದ ಶಿಫಾರಸುಗಳನ್ನು ತಿರಸ್ಕಾರ ಮಾಡಿದ ರಾಜ್ಯಪಾಲರ ಕ್ರಮ ಸರಿಯಾಗಿದೆ.
* ರಾಜ್ಯಪಾಲರು ತಮ್ಮ ವಿವೇಚನಾಧಿಕಾರ ಬಳಕೆ ಮಾಡಿಯೇ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ್ದಾರೆ.
* ಇದರಲ್ಲಿ ಮುಖ್ಯಮಂತ್ರಿಗಳ ಕುಟುಂಬಸ್ಥರು ಫಲಾನುಭವಿಗಳು. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿರುವುದು ಸರಿಯಾದ ಕ್ರಮವಾಗಿದೆ. ಆದ್ದರಿಂದ ಮುಖ್ಯಮಂತ್ರಿಗಳು ಎತ್ತಿದ್ದ ಎಲ್ಲಾ ಕಾನೂನು ಅಂಶದ ಪ್ರಶ್ನೆಗಳನ್ನು ತಿರಸ್ಕಾರ ಮಾಡಲಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ವತಂತ್ರ ತನಿಖಾ ಸಂಸ್ಥೆಯಿಂದ ವಿಚಾರಣೆಗೆ ಅನುಮತಿ ನೀಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಈ ಅರ್ಜಿಯ ವಿಚಾರಣೆಯನ್ನು ನಡೆಸಿ ತೀರ್ಪು ಕಾಯ್ದಿರಿಸಲಾಗಿದೆ. ಆದರೆ ಹೈಕೋರ್ಟ್ ಕೆಳಹಂತದ ಕೋರ್ಟ್‌ನ ತೀರ್ಪಿಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈಗ ಹೈಕೋರ್ಟ್ ತೀರ್ಪು ಪ್ರಕಟವಾಗಿರುವ ಕಾರಣ ಜನಪ್ರತಿನಿಧಿಗಳ ಕೋರ್ಟ್ ಸಹ ತನ್ನ ತೀರ್ಪನ್ನು ಪ್ರಕಟಿಸಬಹುದು.












Click it and Unblock the Notifications