ಮುಡಾ ಹಗರಣ; ₹300 ಕೋಟಿ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಜಾರಿ ನಿರ್ದೇಶನಾಲಯ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ ಸುಮಾರು 300 ಕೋಟಿ ರೂಪಾಯಿ ಮೌಲ್ಯದ 140 ಕ್ಕೂ ಹೆಚ್ಚು ಸೈಟುಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ ಎಂದು ಶುಕ್ರವಾರ ಮಾಹಿತಿ ನೀಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಯುತ್ತಿರುವಾಗಲೇ ಈ ಮಹತ್ವದ ಬೆಳವಣಿಗೆ ನಡೆದಿದೆ.
ಮುಡಾ ಸೈಟುಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿರುವ ಹಲವು ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮಾಹಿತಿ ನೀಡಿದೆ.

ಮುಡಾ ಸ್ವಾಧೀನಪಡಿಸಿಕೊಂಡ 3 ಎಕರೆ 16 ಗುಂಟೆ ಭೂಮಿಗೆ ಬದಲಾಗಿ ಪತ್ನಿ ಬಿ. ಎಂ. ಪಾರ್ವತಿ ಹೆಸರಿನಲ್ಲಿರುವ 14 ನಿವೇಶನಗಳನ್ನು ಪಡೆಯಲು ಸಿದ್ದರಾಮಯ್ಯ ತಮ್ಮ ಪ್ರಭಾವ ಬಳಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. 3 ಎಕರೆ 16 ಗುಂಟೆ ಭೂಮಿಯನ್ನು ಮುಡಾ 3,24,700 ರೂಪಾಯಿಗೆ ಸ್ವಾಧೀನಪಡಿಸಿಕೊಂಡಿತ್ತು. ಆದರೆ ಇದಕ್ಕೆ ಪರಿಹಾರವಾಗಿ ನೀಡಿರುವ 14 ನಿವೇಶನಗಳ ಮೌಲ್ಯವು 56 ಕೋಟಿ ರೂಪಾಯಿಗಳು ಎಂದು ಇಡಿ ತಿಳಿಸಿದೆ.
ಪಾರ್ವತಿ ಅವರಿಗೆ ಪರಿಹಾರ ನಿವೇಶನಗಳ ಅಕ್ರಮ ಹಂಚಿಕೆಯಲ್ಲಿ ಮಾಜಿ ಮುಡಾ ಆಯುಕ್ತ ಡಿ. ಬಿ ನಟೇಶ್ ಅವರು ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡ ಬಳಿಕ ಅಕ್ರಮವಾಗಿ ಸೈಟ್ ಪಡೆದವರಿಗೆ ಭಯ ಶುರುವಾಗಿದೆ.
ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಇಡಿ, "ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ಇಡಿ ತಾತ್ಕಾಲಿಕವಾಗಿ ಪಿಎಂಎಲ್‌ಎ, 2002 ರ ನಿಬಂಧನೆಗಳ ಅಡಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾದ ರೂ. 300 ಕೋಟಿ (ಅಂದಾಜು) ಮಾರುಕಟ್ಟೆ ಮೌಲ್ಯದ 142 ಸ್ಥಿರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ." ಎಂದು ಮಾಹಿತಿ ನೀಡಿದೆ.
ಸಿಎಂ ಸಿದ್ದರಾಮಯ್ಯ ಸೇರಿದಂತೆ ಪ್ರಕರಣಲ್ಲಿ ಇನ್ನೂ ಹಲವರ ವಿರುದ್ಧ ಲೋಕಾಯುಕ್ತ ಪೊಲೀಸರು 1860 ರ ಐಪಿಸಿಯ ವಿವಿಧ ಸೆಕ್ಷನ್ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ಅಡಿಯಲ್ಲಿ ಪ್ರಕರಣ ದಾಖಲಿಸಿದೆ. ಮೈಸೂರಿನವರಾದ ಗಂಗರಾಜು ಮತ್ತು ಸ್ನೇಹಮಯಿ ಕೃಷ್ಣ ನೀಡಿದ್ದ ದೂರನ್ನು ಆಧರಿಸಿ ತನಿಖೆ ಆರಂಭಿಸಿದ್ದ ಜಾರಿ ನಿರ್ದೇಶನಾಲಯ ಈಗ ಸುಮಾರು 300 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಈ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದು ಇದು ಸತ್ಯಕ್ಕೆ ಸಂದ ಜಯ. ನಿಮ್ಮ ಹಾರೈಕೆಯಿಂದ ನನ್ನ ಹೋರಾಟಕ್ಕೆ ಮತ್ತೊಂದು ಗೆಲುವು ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.












Click it and Unblock the Notifications