Siddaramaiah: ಸಿದ್ದರಾಮಯ್ಯ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಇಡಿ
ಬೆಂಗಳೂರು, ಏಪ್ರಿಲ್ 02: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಸೇರಿದಂತೆ ಕುಟುಂಬ ಸದಸ್ಯರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾದ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಕೋರ್ಟ್ ಮೆಟ್ಟಿಲೇರಿದೆ.
ಸಿದ್ದರಾಮಯ್ಯ ಪತ್ನಿಗೆ ಹಂಚಿಕೆ ಮಾಡಿರುವ ಮುಡಾ ನಿವೇಶನದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯವು ನಡೆಸುತ್ತಿದೆ. ಈಗ ಈ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತರು ನೀಡಿರುವ ವರದಿ ತಿರಸ್ಕಾರ ಮಾಡಬೇಕು ಎಂದು ಇಡಿ ಅರ್ಜಿಯಲ್ಲಿ ಮನವಿ ಮಾಡಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದಂತೆ ಮೈಸೂರು ಲೋಕಾಯುಕ್ತರು ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ವಿಚಾರಣೆ ನಡೆಸಿ ಕೋರ್ಟ್‌ಗೆ ವರದಿ ಸಲ್ಲಿಕೆ ಮಾಡಿದ್ದರು. ವರದಿಯಲ್ಲಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ನೀಡಿತ್ತು.
ಆದರೆ ಈಗ ಈ ವರದಿಯನ್ನು ಪ್ರಶ್ನೆ ಮಾಡಿ ಇಡಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಲೋಕಾಯುಕ್ತ ತನಿಖೆಯಲ್ಲಿ ಹಲವು ತಪ್ಪುಗಳಿವೆ. ನಮ್ಮ ತನಿಖೆಯಲ್ಲಿ ತಪ್ಪುಗಳು ಸಾಬೀತಾಗಿವೆ. ಹೀಗಿದ್ದರೂ ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಆದ್ದರಿಂದ ವರದಿ ತಿರಸ್ಕರಿಸಿ ಎಂದು 8 ಪುಟಗಳ ತಕರಾರು ಅರ್ಜಿಯನ್ನು ಸಲ್ಲಿಸಿದೆ.
ಮುಡಾ ಬದಲಿ ನಿವೇಶನ ಹಂಚಿಕೆ ಹಗರಣ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಹಗರಣದ ವಿಚಾರಣೆ ಮುಗಿಯುವ ತನಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳಾದ ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರು ತನಕ ಪಾದಯಾತ್ರೆಯನ್ನು ನಡೆಸಿದ್ದವು.
ಮುಡಾ 2021ರಲ್ಲಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ಅಂದರೆ 14 ನಿವೇಶನ ಕೊಟ್ಟಿದ್ದಾರೆ ಎಂಬುದು ಚರ್ಚೆಗೆ ಕಾರಣವಾಗಿತ್ತು. ವಿಜಯನಗರ ಬಡಾವಣೆಯಲ್ಲಿ 14 ನಿವೇಶನ ಪತ್ನಿ ಪಾರ್ವತಿ ಅವರಿಗೆ ಮಂಜೂರು ಆಗಲು, ಸಿದ್ದರಾಮಯ್ಯ ಅವರು ಪ್ರಭಾವ ಬೀರಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗುವಂತೆ ಮಾಡಿದ್ದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ. ರಾಜ್ಯಪಾಲರು ಈ ವಿಚಾರದಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಒಪ್ಪಿಗೆ ನೀಡಿದ್ದರು. ಇದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್ ಮೊರೆ ಹೋಗಿದ್ದರು. ಕೋರ್ಟ್ ತನಿಖೆ ನಡೆಸಲು ಒಪ್ಪಿಗೆ ನೀಡಿ, ಸಿದ್ದರಾಮಯ್ಯಗೆ ಹಿನ್ನಡೆ ಉಂಟು ಮಾಡಿತ್ತು.
ಹೈಕೋರ್ಟ್ ಆದೇಶ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತರು ಮುಡಾ ಹಗರಣದ ಕುರಿತು ತನಿಖೆ ನಡೆಸಬೇಕು ಎಂದು ಆದೇಶಿಸಿತ್ತು. ಸಿದ್ದರಾಮಯ್ಯ ಸಹ ಲೋಕಾಯುಕ್ತ ಕಛೇರಿಗೆ ತೆರಳಿ ವಿಚಾರಣೆ ಎದುರಿಸಿದ್ದರು. ಕೋರ್ಟ್‌ಗೆ ತನಿಖಾ ವರದಿ ಸಲ್ಲಿಕೆ ಮಾಡಿದ್ದ ಲೋಕಾಯುಕ್ತ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ನೀಡಿತ್ತು.












Click it and Unblock the Notifications