Siddaramaiah: ಮುಡಾ ಅರ್ಜಿಯ ವಿಚಾರಣೆ, ಸಿದ್ದರಾಮಯ್ಯ ಚಿತ್ತ ಹೈಕೋರ್ಟ್‌ನತ್ತ
ಬೆಂಗಳೂರು, ಸೆಪ್ಟೆಂಬರ್ 09: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ತ ಇಂದು ಕರ್ನಾಟಕ ಹೈಕೋರ್ಟ್‌ನತ್ತ ಇರಲಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಕೆ ಮಾಡಿರುವ ಅರ್ಜಿಯ ವಿಚಾರಣೆ ಸೋಮವಾರ ಮಧ್ಯಾಹ್ನ ನಡೆಯಲಿದೆ. ಈ ಪ್ರಕರಣದಲ್ಲಿ ಈಗಾಗಲೇ ಆಗಸ್ಟ್ 19ರ ಮಧ್ಯಂತರ ಆದೇಶವನ್ನು ಹೈಕೋರ್ಟ್ ವಿಸ್ತರಣೆ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಸೋಮವಾರ ಮಧ್ಯಾಹ್ನ 2.30ಕ್ಕೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ.

ಸೆಪ್ಟೆಂಬರ್ 2ರಂದು ಅರ್ಜಿ ವಿಚಾರಣೆ ನಡೆದಿತ್ತು. ಕೋರ್ಟ್ ಯಾವುದೇ ಕ್ರಮ ಕೈಗೊಳ್ಳಬಾರದು ಎಂಬ ಮಧ್ಯಂತರ ಆದೇಶವನ್ನು ವಿಸ್ತರಣೆ ಮಾಡಿ, ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 9ರ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ.
ಇಂದು ಕರ್ನಾಟಕ ಸರ್ಕಾರದ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಹಬ್ಬದ ರಜೆ ಇರುವ ಕಾರಣ ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಬೇಕು ಎಂದು ಅವರು ನ್ಯಾಯಪೀಠಕ್ಕೆ ಮನವಿ ಮಾಡಿದ್ದರು. ಆದ್ದರಿಂದ ಸೆಪ್ಟೆಂಬರ್ 2ರಂದು ವಿಚಾರಣೆಯನ್ನು ಮುಂದೂಡಿಕೆ ಮಾಡಲಾಗಿತ್ತು.
ಈಗಾಗಲೇ ಅರ್ಜಿಯ ವಿಚಾರಣೆ ವೇಳೆ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದಾರೆ. ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡನೆ ಪೂರ್ಣಗೊಳಿಸಿದ್ದಾರೆ. ದೂರದಾರ ಟಿ. ಜೆ. ಅಬ್ರಾಹಂ ಕಡೆಯ ವಾದವೂ ಮುಗಿದಿದೆ. ಮತ್ತೊಬ್ಬ ದೂರುದಾರ ಸ್ನೇಹಮಯಿ ಕೃಷ್ಣ ಪರವಾಗಿ ವಕೀಲ ಕೆ. ಜಿ. ರಾಘವನ್ ವಾದ ಮಂಡಿಸಿದ್ದಾರೆ.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸುವಾಗ ಅಡ್ವೊಕೇಟ್ ಜನರಲ್ ಶಿಫಾರಸಿನ ಅನ್ವಯ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು ಎಂದು ವಾದಿಸಿದ್ದರು, ಹಲವು ಅಂಶಗಳನ್ನು ಉಲ್ಲೇಖಿಸಿದ್ದರು. ಆದ್ದರಿಂದ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಸೋಮವಾರ ತಮ್ಮ ವಾದವನ್ನು ಮಂಡಿಸಲಿದ್ದಾರೆ.
ಸಿದ್ದರಾಮಯ್ಯ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಅಡ್ವೊಕೇಟ್ ಜನರಲ್ ವಾದ ಮಂಡನೆ ತಾವು ವಾದ ಮಂಡಿಸಬೇಕಿದೆ ಎಂದು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಎಲ್ಲರ ವಾದವನ್ನು ವಿವರವಾಗಿ ಆಲಿಸಬೇಕಿದೆ. ಬೇಗ ವಾದ ಮಂಡನೆ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದ್ದಾರೆ. ಸೆಪ್ಟೆಂಬರ್ 12ರಂದು ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ. ಅಂದು ವಾದವನ್ನು ಸಂಪೂರ್ಣವಾಗಿ ಮುಗಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.
ಮುಡಾ ಪ್ರಕರಣದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೇಟ್ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ್ದಾರೆ.
ಅಭಿಷೇಕ್ ಮನು ಸಿಂಘ್ವಿ ಅವರು ಸೆಕ್ಷನ್ 17-ಎ ಇಲ್ಲಿ ಅನ್ವಯವಾಗುವುದಿಲ್ಲ. ಇದರ ಆಧಾರದ ಮೇಲೆ ಅನುಮತಿ ನೀಡಿರುವುದು ರದ್ದುಗೊಳಿಸಬೇಕು ಎಂದು ವಾದಮಂಡಿಸಿದ್ದಾರೆ. ಸಿದ್ದರಾಮಯ್ಯ ಸಲ್ಲಿಕೆ ಮಾಡಿರುವ ಅರ್ಜಿಯ ಕುರಿತು ಈಗಾಗಲೇ ಹೈಕೋರ್ಟ್‌ನಲ್ಲಿ ಆ. 19, 29, 31 ಮತ್ತು ಸೆಪ್ಟೆಂಬರ್ 2 ಸೇರಿ ನಾಲ್ಕು ದಿನಗಳ ಕಾಲ ಸುಧೀರ್ಘ ವಿಚಾರಣೆ ನಡೆದಿದೆ.












Click it and Unblock the Notifications