ರಾಜ್ಯಪಾಲರ ವಿರುದ್ಧ ಹಾಸನ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ತೀವ್ರಗೊಂಡ ಪ್ರತಿಭಟನೆ
ಚಿಕ್ಕಮಗಳೂರು ಆಗಸ್ಟ್ 18: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದಕ್ಕೆ ರಾಜ್ಯದೆಲ್ಲೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಇಂದು ಹಾಸನ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಬೆಂಬಲಿಗರು ಪ್ರತಿಭಟನೆ ನಡೆಸಿ ರಾಜ್ಯಪಾಲರು ಹಾಗೂ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹೌದು... ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ತನಿಖೆಗೆ ಅನುಮತಿ ನೀಡಿದ ಹಿನ್ನಲೆ ರಾಜ್ಯಪಾಲರ ವಿರುದ್ಧ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆದಿದೆ. ಅಜ್ಜಂಪುರ ಪಟ್ಟಣದ ಮುಖ್ಯ ವೃತ್ತದಲ್ಲಿ ರಾಜ್ಯಪಾಲರ ಪ್ರತಿಕೃತಿ ದಹಿಸಿ, ಹೆದ್ದಾರಿ ತಡೆದು ಟೈಯರ್ ಗೆ ಬೆಂಕಿ ಹಚ್ಚಿ ಕಾಂಗ್ರೆಸ್ ಕಾರ್ಯಕರ್ತರು ಧಿಕ್ಕಾರ ಕೂಗಿದರು.

ತರೀಕೆರೆ ಶಾಸಕ ಜಿಎಸ್ ಶ್ರೀನಿವಾಸ್ ನೇತೃತ್ವದಲ್ಲಿ ಅಜ್ಜಂಪುರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ಮಾಡಲಾಗುತ್ತಿದೆ. ರಾಜ್ಯಪಾಲರು ಕೇಂದ್ರದ ಕೈಗೊಂಬೆ ಆಗಿದ್ದಾರೆ ಎಂದು ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕಾರ್ಯಕರ್ತರು ಆಕ್ರೋಶಗೊಂಡರು. ಸಿಎಂ ವಿರುದ್ಧ ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ. ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಕೂಡಲೇ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಬೇಕೆಂದು ಆಗ್ರಹಿಸಿದರು.
ಶಿಕಾರಿಪುರ ಪಟ್ಟಣದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ, ಶಿವಮೊಗ್ಗದ ಶಿಕಾರಿಪುರ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ವೇಳೆ ಶಿಕಾರಿಪುರ ಪಟ್ಟಣದಲ್ಲಿರುವ ಬಿಎಸ್ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ.
ಕಾಂಗ್ರೆಸ್ ನಾಯಕ ನಾಗರಾಜ್ ಗೌಡ ನೇತೃತ್ವದಲ್ಲಿ ಯಡಿಯೂರಪ್ಪ ಮನೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಸ್ತೆ ಮದ್ಯೆ ಪ್ರತಿಭಟನಾಕಾರರನ್ನ ತಡೆದು ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರನ್ನು ವಶಕ್ಕೆ ಪಡೆದಿದ್ದಾರೆ.

ಹಾಸನದಲ್ಲಿ ರಾಜ್ಯಪಾಲರ ವಿರುದ್ದ ತೀವ್ರಗೊಂಡ ಪ್ರತಿಭಟನೆ
ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದನ್ನು ಖಂಡಿಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ ವಿರುದ್ದ ಹಾಸನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ತೀವ್ರಗೊಂಡಿದೆ. ಹಾಸನ ಜಿಲ್ಲೆ ಅರಕಲಗೂಡು ವಿಧಾನಸಭಾ ಕ್ಷೇತ್ರದ ಹಳ್ಳಿಮೈಸೂರಿನಲ್ಲಿ ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ಪ್ರತಿಭಟನೆ ಬೃಹತ್ ಪ್ರತಿಭಟನೆ ನಡೆದಿದೆ. ಕೈ ಕಾರ್ಯಕರ್ತರು ರಾಜ್ಯಪಾಲರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ವಿರುದ್ಧ ಶಡ್ಯಂತ್ರ ಮಾಡಲಾಗಿದೆ. ಸಿಎಂ ವಿರುದ್ಧ ಸುಳ್ಳು ಆರೋಪ ಮಾಡಿ ತನಿಖೆಗೆ ಆದೇಶ ನೀಡಲಾಗಿದೆ ಎಂದು ಹಳ್ಳಿ ಮೈಸೂರಿನಲ್ಲಿ ಮೆರವಣಿಗೆ ನಡೆಸಿ ರಾಜ್ಯಪಾಲರು, ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶಗೊಂಡರು. ಅಲ್ಲದೆ ರಾಜ್ಯಪಾಲರ ನಡೆ ಖಂಡಿಸಿ ಹೋರಾಟ ತೀವ್ರಗೊಳಿಸೋ ಎಚ್ಚರಿಕೆಯನ್ನೂ ನೀಡಿದ್ದಾರೆ.
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪಂಜಿನ ಮೆರವಣಿಗೆ
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆ ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಕಳೆದ ದಿನ ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿ ಆಕ್ರೋಶ ಹೊರಹಾಕಿದರು. ಮೈಸೂರು- ಊಟಿ ಹೆದ್ದಾರಿ, ಚಾಮರಾಜನಗರದ ರಸ್ತೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿ ರಾಜ್ಯಪಾಲರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಕಿಡಿಕಾರಿದರು. ಸಿಎಂ ಸಿದ್ದರಾಮಯ್ಯಗೆ ಜೈಕಾರ ಹಾಕುತ್ತಾ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಕೂಡಲೇ ರಾಜ್ಯಪಾಲರನ್ನು ವಜಾ ಮಾಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.












Click it and Unblock the Notifications