ಮುಸ್ಲಿಂ ಹೆಡ್‌ಮಾಸ್ಟರ್ ವರ್ಗಾವಣೆ ಪ್ಲ್ಯಾನ್: ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ, 3 ಬಲಪಂಥೀಯರ ಬಂಧನ!
ಕರ್ನಾಟಕದ ಬೆಳಗಾವಿಯಲ್ಲಿ ಅಮಾನುಷ ಘಟನೆಯೊಂದು ಈಚೆಗೆ ನಡೆದಿತ್ತು. ಇಲ್ಲಿನ ಸವದತ್ತಿ ತಾಲ್ಲೂಕಿನ ಹೂಲಿಕಟ್ಟಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳು ಕುಡಿಯುವ ನೀರಿಗೆ ವಿಷ ಬೆರೆಸಲಾಗಿತ್ತು. ಹೌದು ಈ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ಕೀಟನಾಶಕವನ್ನು ಸೇರಿಸಲಾಗಿತ್ತು. ಈ ನೀರನ್ನು ಕುಡಿದು 11 ಜನ ಮಕ್ಕಳು ಅಸ್ವಸ್ಥರಾಗಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಶ್ರೀರಾಮ ಸೇನೆಯ ನಾಯಕ ಮತ್ತು ಅವರ ಇಬ್ಬರು ಸಹಚರರನ್ನು ಬಂಧಿಸಿದ್ದಾರೆ.
ಈ ಪ್ರಕರಣವು ಇಡೀ ಕರ್ನಾಟಕವೇ ಬೆಚ್ಚಿ ಬೀಳುವಂತೆ ಆಗಿತ್ತು. ಬೆಳಗಾವಿ ಜಿಲ್ಲೆಯ ಹುಲಿಕಟ್ಟಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕುಡಿಯುವ ನೀರನ್ನು ಕಲುಷಿತಗೊಳಿಸಲಾಗಿತ್ತು. ಇದರ ಉದ್ದೇಶ ವಿಚಿತ್ರವಾಗಿತ್ತು. ಶಾಲೆಯ ಹೆಡ್‌ಮಾಸ್ಟರ್ ಹಾಗೂ ಮುಸ್ಲಿಂ ಸಮುದಾಯದ ಸುಲೇಮಾನ್ ಗೋರಿನಾಯ್ಕ್ ಎನ್ನುವವರ ವರ್ಗಾವಣೆ ಮಾಡುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದೀಗ ಬಂಧಿಸಿರುವ ಮೂವರನ್ನು ಗ್ರಾಮದ ಕೃಷ್ಣ ಮಾದರ, ಸಾಗರ ಪಾಟೀಲ ಹಾಗೂ ನಾಗನಗೌಡ ಎಂದು ಗುರುತಿಸಲಾಗಿದೆ.

ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ್ದ ಶಾಲೆಯ ಮುಖ್ಯೋಪಾಧ್ಯಾಯರ ವಿರುದ್ಧದ ಪಿತೂರಿಯ ಭಾಗವಾಗಿ ಈ ಮೂವರು ಕುಡಿಯುವ ನೀರಿನಲ್ಲಿ ಕೀಟನಾಶಕಗಳನ್ನು ಬೆರೆಸಿದ್ದರು ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಬೆಳಗಾವಿಯ ಪೊಲೀಸ್ ವರಿಷ್ಠಾಧಿಕಾರಿ ಭೀಮಶಂಕರ್ ಎಸ್ ಗುಲೇದ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ಕೆಲವು ವಿದ್ಯಾರ್ಥಿಗಳು ನೀರಿನಲ್ಲಿ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿ ಮುಖ್ಯ ಶಿಕ್ಷಕರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ದೊಡ್ಡ ದುರಂತವೊಂದು ತಪ್ಪಿದೆ. ಆದರೆ ಈ ನೀರು ಕುಡಿದಿದ್ದ 11 ಜನ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್: ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಟ್ವೀಟ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ಸಾಗರ ಪಾಟೀಲ ಸೇರಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ. ಕಳೆದ 15 ದಿನಗಳ ಹಿಂದೆ ನಡೆದ ಈ ಘಟನೆಯಲ್ಲಿ ಹಲವು ಮಕ್ಕಳು ಅಸ್ವಸ್ಥಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿರಲಿಲ್ಲ ಎಂದಿದ್ದಾರೆ.












Click it and Unblock the Notifications