ಕ್ರೀಡಾಪಟುಗಳಿಗೆ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್: 14 ಜಿಲ್ಲೆಗಳಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ

ಮೈಸೂರು: ದಸರಾ ಕ್ರೀಡಾಕೂಟವು ಕೇವಲ ಕ್ರೀಡಾ ಸ್ಪರ್ಧೆಯಲ್ಲ, ಕ್ರೀಡಾಪಟುಗಳ ಪ್ರತಿಭೆ ಮತ್ತು ಸಾಧನೆಗೆ ವೇದಿಕೆಯಾಗಿದೆ. ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಉದ್ಯೋಗ ಮೀಸಲಾತಿ, ಬಹುಮಾನ ಮೊತ್ತ ಹೆಚ್ಚಳ ಹಾಗೂ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಚಿವ ಡಾ. ಜಿ. ಪರಮೇಶ್ವರ ಅವರು ಹೇಳಿದ್ದಾರೆ.

ಮೈಸೂರಿನ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ನಾಡಹಬ್ಬ ದಸರಾ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ದಸರಾ ಕ್ರೀಡಾಕೂಟ ಸಿಎಂ ಕಪ್-2026ಕ್ಕೆ ಚಾಲನೆ ನೀಡಿ ಬಳಿಕ ಅವರು ಮಾತನಾಡಿದ ಅವರು, ನೂರಾರು ವರ್ಷಗಳ ಇತಿಹಾಸ ಹೊಂದಿರುವ ಮೈಸೂರು ದಸರಾ ವಿಶ್ವಪ್ರಸಿದ್ಧವಾಗಿದ್ದು, ಅದರ ಪರಂಪರೆಯ ಭಾಗವಾಗಿ ನಡೆಯುತ್ತಿರುವ ಕ್ರೀಡಾಕೂಟ ರಾಜ್ಯದ ಕ್ರೀಡಾ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.

Mysuru Dasara 2026 Ka Builds Synthetic Tracks 14 Districts Govt Prioritises Sports Infrastructure Development

ಮೈಸೂರು ದಸರಾ ಕ್ರೀಡಾಕೂಟಕ್ಕೆ ಐತಿಹಾಸಿಕ ಹಿನ್ನೆಲೆಯಿದ್ದು, ವಿಜಯನಗರ ಸಾಮ್ರಾಜ್ಯದ ಅರಸರು ಆರಂಭಿಸಿದ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಕ್ರೀಡೆಗಳಿಗೂ ಪ್ರೋತ್ಸಾಹ ನೀಡಲಾಗುತ್ತಿತ್ತು. ಕುಸ್ತಿ, ಕತ್ತಿವರಸೆ ಸೇರಿದಂತೆ ವಿವಿಧ ಕ್ರೀಡೆಗಳನ್ನು ಆಯೋಜಿಸುವ ಮೂಲಕ ಕ್ರೀಡಾ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಲಾಗುತ್ತಿತ್ತು. ಇದೇ ಪರಂಪರೆಯನ್ನು ಮೈಸೂರು ಅರಸರು ಮುಂದುವರಿಸಿಕೊಂಡು ಬಂದರು. ಕಾಲ ಬದಲಾದಂತೆ ದಸರಾ ಕ್ರೀಡಾಕೂಟವೂ ಆಧುನಿಕ ಸ್ವರೂಪ ಪಡೆದುಕೊಂಡಿದೆ ಎಂದು ತಿಳಿಸಿದರು.

ಈ ಬಾರಿಯ ದಸರಾ ಕ್ರೀಡಾಕೂಟದಲ್ಲಿ 26 ಕ್ರೀಡಾ ವಿಭಾಗಗಳನ್ನು ಆಯೋಜಿಸಿರುವುದು ಸಂತಸದ ಸಂಗತಿ. ರಾಜ್ಯದ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದು, ಮೈಸೂರು ದಸರಾ ಇತಿಹಾಸದಲ್ಲಿ 2026ರ ಕ್ರೀಡಾಕೂಟವೂ ಸ್ಮರಣೀಯವಾಗಿ ಉಳಿಯಲಿದೆ ಎಂದರು.

ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಶೇ. 2ರಷ್ಟು ಉದ್ಯೋಗ ಮೀಸಲಾತಿ

ಕರ್ನಾಟಕದ ಸರ್ಕಾರ ಕ್ರೀಡಾಪಟುಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆಯ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಗೋವಿಂದರಾಜ್ ಅವರ ಸಲಹೆ ಹಾಗೂ ಪ್ರಯತ್ನಗಳು ಕ್ರೀಡಾಪಟುಗಳಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವಲ್ಲಿ ಮಹತ್ವದ ಪಾತ್ರ ವಹಿಸಿವೆ ಎಂದು ತಿಳಿಸಿದರು.

ಆರಂಭದಲ್ಲಿ ಪೊಲೀಸ್ ಮತ್ತು ಅಬಕಾರಿ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಪ್ರಯತ್ನಗಳನ್ನು ಕೈಗೊಳ್ಳಲಾಯಿತು. ನಾನು ಗೃಹ ಸಚಿವನಾಗಿದ್ದ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಶೇ. 3ರಷ್ಟು ಮೀಸಲಾತಿ ನೀಡಲಾಗಿತ್ತು ಎಂದು ಸ್ಮರಿಸಿದರು.

ಇದೀಗ ರಾಜ್ಯ ಸರ್ಕಾರವು ಎಲ್ಲಾ ಇಲಾಖೆಗಳ ನೇಮಕಾತಿಗಳಲ್ಲಿಯೂ ಕ್ರೀಡಾಪಟುಗಳಿಗೆ ಶೇ. 2ರಷ್ಟು ಉದ್ಯೋಗ ಮೀಸಲಾತಿ ಕಲ್ಪಿಸುವ ಕುರಿತು ಇತ್ತೀಚೆಗೆ ಆದೇಶ ಹೊರಡಿಸಿದ್ದೇವೆ. ಈ ಕ್ರಮವು ಕ್ರೀಡಾಪಟುಗಳಿಗೆ ಭದ್ರವಾದ ಭವಿಷ್ಯ ರೂಪಿಸಿಕೊಳ್ಳಲು ನೆರವಾಗಲಿದೆ. ಕ್ರೀಡೆಯಲ್ಲಿ ಸಾಧನೆ ಮಾಡಿದವರು ಉದ್ಯೋಗಕ್ಕಾಗಿ ಪರದಾಡುವ ಪರಿಸ್ಥಿತಿ ತಪ್ಪಿಸಿ, ಕ್ರೀಡೆಯನ್ನೇ ವೃತ್ತಿಜೀವನದ ಭಾಗವಾಗಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ: 14 ಜಿಲ್ಲೆಗಳಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ

ರಾಜ್ಯದ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಿಗೆ ಸಿದ್ಧತೆ ನಡೆಸಲು ಅಗತ್ಯವಿರುವ ಆಧುನಿಕ ಕ್ರೀಡಾ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಬದ್ಧವಾಗಿದೆ. ಈಗಾಗಲೇ ರಾಜ್ಯದ 14 ಜಿಲ್ಲೆಗಳಲ್ಲಿ ಸಿಂಥೆಟಿಕ್ ಟ್ರ್ಯಾಕ್‌ಗಳನ್ನು ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿಯೂ ಸಿಂಥೆಟಿಕ್ ಟ್ರ್ಯಾಕ್‌ಗಳನ್ನು ನಿರ್ಮಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಡಾ. ಜಿ. ಪರಮೇಶ್ವರ ಹೇಳಿದರು.

ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುವ ಅವಕಾಶ ಪಡೆದಾಗ, ವಿದೇಶಗಳಿಗೆ ತೆರಳುವ ಮುನ್ನವೇ ರಾಜ್ಯದಲ್ಲಿಯೇ ಗುಣಮಟ್ಟದ ತರಬೇತಿ ಪಡೆಯುವಂತಾಗಬೇಕು. ಇದಕ್ಕಾಗಿ ಅಗತ್ಯವಿರುವ ಕ್ರೀಡಾ ಸೌಲಭ್ಯಗಳು, ಮೂಲಸೌಕರ್ಯ ಮತ್ತು ತರಬೇತಿ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಕ್ರೀಡಾ ಪ್ರತಿಭೆಗಳಿಗೆ ಎಲ್ಲಾ ರೀತಿಯ ಸಹಕಾರ ನೀಡುವ ಮೂಲಕ ರಾಜ್ಯವನ್ನು ಕ್ರೀಡಾ ಕ್ಷೇತ್ರದಲ್ಲಿ ಮತ್ತಷ್ಟು ಮುಂಚೂಣಿಗೆ ತರಲು ಸರ್ಕಾರ ಶ್ರಮಿಸಲಿದೆ ಎಂದರು.

ಕಲಬುರಗಿ, ಬೆಳಗಾವಿ, ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಕ್ರೀಡಾಪಟುಗಳು ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಬೇಕು. ಕ್ರೀಡಾಪಟುಗಳ ಪ್ರತಿಭೆ ಮತ್ತು ಸಾಧನೆಯನ್ನು ಉತ್ತೇಜಿಸಲು ಬಹುಮಾನ ಮೊತ್ತವನ್ನು ಹೆಚ್ಚಿಸುವಂತಹ ಕ್ರಮಗಳನ್ನೂ ಸರ್ಕಾರ ಕೈಗೊಳ್ಳುತ್ತಿದೆ ಎಂದು ತಿಳಿಸಿದರು.

ಚುನಾವಣಾ ಆಯೋಗದ ಅಧಿಕಾರಿಗಳು ತಪ್ಪು ಮಾಡಿದರೂ ಕ್ರಮವಾಗಬೇಕು

ಚುನಾವಣಾ ಆಯೋಗದ ಅಧಿಕಾರಿಗಳ ಕಾರ್ಯವೈಖರಿ ಕುರಿತು ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು, ಚುನಾವಣಾ ಆಯೋಗದ ಅಧಿಕಾರಿಗಳು ಚುನಾವಣಾ ಆಯೋಗದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಾರೆ. ಆಡಳಿತ ವ್ಯವಸ್ಥೆಯ ದೃಷ್ಟಿಯಿಂದ ಜಿಲ್ಲಾಧಿಕಾರಿಗಳೂ ಸೇರಿದಂತೆ ಇತರ ಅಧಿಕಾರಿಗಳು ಅವರ ಕಾರ್ಯವ್ಯಾಪ್ತಿಗೆ ಒಳಪಡುತ್ತಾರೆ. ಇಂತಹ ಅಧಿಕಾರಿಗಳು ನಮ್ಮ ಮಾತನ್ನೂ ಕೇಳುವುದಿಲ್ಲ ಎಂದು ಹೇಳಿದರು.

ಚುನಾವಣಾ ಅಧಿಕಾರಿಗಳು ತಪ್ಪು ಮಾಡಿದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಅವರು ನಮ್ಮ ರಾಜ್ಯದವರಾಗಿರಲಿ ಅಥವಾ ಬೇರೆ ರಾಜ್ಯದವರಾಗಿರಲಿ, ತಪ್ಪು ಮಾಡಿದವರ ವಿರುದ್ಧ ಕಾನೂನುಬದ್ಧ ಕ್ರಮ ಜರುಗಿಸಬೇಕು. ಮುಖ್ಯಮಂತ್ರಿಗಳ ಹೇಳಿಕೆಗೆ ಸಂಬಂಧಿಸಿದ ಸ್ಟಿಂಗ್ ಆಪರೇಷನ್ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಮುಖ್ಯಮಂತ್ರಿಗಳು ಅಧಿಕೃತವಾಗಿ ಮಾತನಾಡಿದ್ದಾರೆ. ಸಂದರ್ಭ ಬಂದಾಗ ಎಲ್ಲ ವಿಚಾರಗಳೂ ಹೊರಬರಲಿವೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+