ನಾಗಮಂಗಲ ಗಲಭೆ: ಪೊಲೀಸರ ಈ ಕ್ರಮದಿಂದ ದೊಡ್ಡ ಗಲಾಟೆ ತಪ್ಪಿದೆ ಎಂದ ಜಿ. ಪರಮೇಶ್ವರ್
ಮಂಡ್ಯದ ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯ ವರೆಗೆ ಹಲವರನ್ನು ಬಂಧಿಸಲಾಗಿದೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಹೇಳಿದ್ದಾರೆ. ಇನ್ನು ಮಂಡ್ಯ ಜಿಲ್ಲಾ ವ್ಯಾಪ್ತಿಯ ನಾಗಮಂಗಲ ಪಟ್ಟಣ ಮೈಸೂರು ರಸ್ತೆಯ ಸಮೀಪದಲ್ಲಿರುವ ದರ್ಗಾದ ಬಳಿ ಬುಧವಾರ ತಡರಾತ್ರಿ ಗಣೇಶ ಮೂರ್ತಿ ಮೆರವಣಿಗೆ ನಡೆಸುವ ಸಂದರ್ಭದಲ್ಲಿ ಸಂಘರ್ಷ ಏರ್ಪಟ್ಟಿತ್ತು. ಅಲ್ಲದೇ ಕಲ್ಲು ತೂರಾಟವು ನಡೆದು ಪರಿಸ್ಥಿತಿ ಕೈ ಮೀರಿತ್ತು. ಈ ಬಗ್ಗೆ ಪರಮೇಶ್ವರ್ ಇಲ್ಲಿಯವರೆಗೆ ಏನಾಗಿದೆ ಎನ್ನುವುದರ ಬಗ್ಗೆ ಮಾತನಾಡಿದ್ದಾರೆ.
ಬುಧವಾರ ರಾತ್ರಿ ಮಂಡ್ಯದಲ್ಲಿ ನಡೆಯಬಾರದ ಘಟನೆಯೊಂದು ನಡೆದಿದೆ. ಇದು ಪ್ರಾರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಪ್ರಾರಂಭವಾಗಿ ಅಂತ್ಯವಾಗಿದೆ. ಮುಂಜಾಗ್ರತಾ ಕ್ರಮವಾಗಿ ಕೆಎಸ್‌ಆರ್‌ಪಿ ತುಕಡಿಯನ್ನು ಸ್ಥಳದಲ್ಲಿಯೇ ನಿಯೋಜಿಸಲಾಗಿತ್ತು. ಘಟನೆಯನ್ನು ಪೊಲೀಸರು ಕೂಡಲೇ ನಿಯಂತ್ರಣಕ್ಕೆ ತಂದಿದ್ದಾರೆ ಇಲ್ಲದಿದ್ದರೆ, ಇದು ಇನ್ನೂ ದೊಡ್ಡ ಗಲಾಟೆಯ ರೂಪಕ್ಕೆ ಬದಲಾಗುತ್ತಿತ್ತು ಎಂದು ಹೇಳಿದ್ದಾರೆ.

ಮೆರವಣಿಗೆ ವೇಳೆ ಕಲ್ಲು ತೂರಾಟವಾದಾ ಸಂದರ್ಭದಲ್ಲಿ ಒಬ್ಬರಿಗೊಬ್ಬರಿಗೆ ಘರ್ಷಣೆ ಮಾಡಿಕೊಂಡಿದ್ದಾರೆ. ಆನಂತರ ಎಲ್ಲವೂ ಸರಿ ಹೋಯ್ತು ಎಂದು ಹಿಂದಿರುಗುವ ಸಂದರ್ಭದಲ್ಲಿ ಕೆಲವರು ವಾಹನಗಳಿಗೆ ಬೆಂಕಿ ಇಟ್ಟಿದ್ದಾರೆ. ಕೂಡಲೇ ಪೊಲೀಸರು ಎಚ್ಚೆತ್ತುಕೊಂಡು ಪರಿಸ್ಥಿತಿಯನ್ನು ಹತೋಟಿಗೆ ತೆಂದಿದ್ದಾರೆ ಎಂದು ಪರಮೇಶ್ವರ್ ಅವರು ಹೇಳಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕರು, ಐಜಿಪಿ, ಕೆಎಸ್‌ಆರ್‌ಪಿ ತುಕಡಿ ಸ್ಥಳದಲ್ಲಿದೆ. ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರನ್ನು ಸ್ಥಳಕ್ಕೆ ಕಳುಹಿಸಿಕೊಟ್ಟಿದ್ದೇನೆ. ಘರ್ಷಣೆ ಮಾಡಿಕೊಂಡಿದ್ದಾರೆ, ಈ ಘಟನೆಯನ್ನು ಕೋಮು ಗಲಭೆ ಅಂತ ಹೇಳಲಾಗುವುದಿಲ್ಲ. ಇದನ್ನು ಹೆಚ್ಚು ಬೆಳೆಯಲು ಬಿಡುವುದಿಲ್ಲ, ಪೊಲೀಸರು ಬಿಟ್ಟಿಲ್ಲ. ಹೆಚ್ಚು ಪ್ರಚಾರ ನೀಡುವುದು ಬೇಡ ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರು ಮನವಿ ಮಾಡಿದರು.
ಇನ್ನು ಈ ಘಟನೆಯಲ್ಲಿ ಹೆಚ್ಚು ಜನರಿಗೆ ಗಾಯಗಳಾಗಿಲ್ಲ. ಇನ್ನು ಈ ಗಲಭೆಗೆ ಸಂಬಂಧಿಸಿದಂತೆ ಈಗಾಗಲೇ ಎರಡು ಗುಂಪಿನ ಒಟ್ಟು 52 ಜನರನ್ನು ಬಂಧಿಸಲಾಗಿದೆ. ಘಟನೆಗೆ ಸಂಬಂಧಿಸಿದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ. ಇದನ್ನು ಆಧರಿಸಿ ಯಾರೆಲ್ಲ ಕಲ್ಲು ತೂರಾಟ ಮಾಡಿದ್ದಾರೆ. ಬೆಂಕಿ ಹಾಕಿದ್ದಾರೆ ಎನ್ನುವುದನ್ನು ನೋಡಿ ಅವರೆಲ್ಲರ ಮೇಲೂ ಕ್ರಮ ತೆಗೆದುಕೊಳ್ಳಲಾಗುವುದು. ಪೊಲೀಸರಿಗು ಕಲ್ಲು ಏಟು ಬಿದ್ದಿದ್ದು, ಒಬ್ಬರು ಎಸ್ಐ ಗಾಯಗೊಂಡಿದ್ದಾರೆ. ಇದರಲ್ಲಿ ರಾಜಕೀಯ ಪ್ರಚೋದನೆ ರೀತಿ ಕಾಣುತ್ತಿಲ್ಲ ಎಂದರು.
ಎಚ್.ಡಿಕೆ ಯಾವ ರೀತಿ ಓಲೈಕೆ ಮಾಡುತ್ತಿದ್ದರೋ ಗೊತ್ತಿಲ್ಲ
ಇನ್ನು ಈ ಪ್ರಕರಣ ರಾಜಕೀಯ ವಾದ - ವಿವಾದಕ್ಕೂ ಕಾರಣವಾಗಿದೆ. ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಸಹ ಇದು ಓಲೈಕೆಯ ರಾಜಕಾರಣದಿಂದ ಸಂಭವಿಸಿದೆ ಎಂದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿ.ಪರಮೇಶ್ವರ ಅವರು, ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಅವರು ಈ ಹಿಂದೆ ಯಾವ ರೀತಿಯಲ್ಲಿ ಓಲೈಕೆ ಮಾಡುತ್ತಿದ್ದರೋ ಗೊತ್ತಿಲ್ಲ ಎಂದರು.
ಇದರಲ್ಲಿ ರಾಜಕೀಯ ಮಾಡುವುದು ಬೇಡ. ಪೊಲೀಸರಿಗೆ ಬಿಟ್ಟರೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಕಾನೂನು ಸಲಹೆ ಕೊಡುವುದಾದರೆ ಸ್ವಾಗತ ಮಾಡುತ್ತೇನೆ. ಘಟನೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎನ್ನುವುದರ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.












Click it and Unblock the Notifications