ಕರ್ನಾಟಕದಲ್ಲಿ ರಾಹುಲ್, ಮೋದಿ ಪ್ರಚಾರ
ಬೆಂಗಳೂರು, ಏ. 2 : ಯುಗಾದಿ ಹಬ್ಬ ಮುಗಿಯುತ್ತಿದ್ದಂತೆಯೇ ರಾಜ್ಯದಲ್ಲಿ ಚುನಾವಣಾ ಪ್ರಚಾರ ರಂಗೇರುತ್ತಿದೆ. ವಿವಿಧ ಪಕ್ಷಗಳ ಹಿರಿಯ ನಾಯಕರು ಪ್ರಚಾರ ಕಣಕ್ಕೆ ಧುಮುಕಿದ್ದಾರೆ. ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ ಪ್ರಚಾರ ನಡೆಸಲು ಆಗಮಿಸುತ್ತಿದ್ದಾರೆ.
ಏ. 4ರಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸಲಿದ್ದು, ಮಂಗಳೂರು ಮತ್ತು ಬಳ್ಳಾರಿಯಲ್ಲಿ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನರೇಂದ್ರ ಮೋದಿ ಏ.8ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ, ಅವರ ಪ್ರಚಾರದ ಸ್ಥಳ ಇನ್ನೂ ನಿಗದಿಯಾಗಿಲ್ಲ.

ಮೋದಿ ಆಗಮನ : ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಏ.8ರಂದು ರಾಜ್ಯದಲ್ಲಿ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ರಾಜ್ಯ ಘಟಕದ ಮನವಿ ಮೇರೆಗೆ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಮೋದಿ ಒಪ್ಪಿಗೆ ನೀಡಿದ್ದಾರೆ. ಆದರೆ, ಸಭೆಯ ಸ್ಥಳಗಳನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಹೇಳಿದ್ದಾರೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]
ರಾಹುಲ್ ಗಾಂಧಿ : ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಏ.4ರಂದು ರಾಜ್ಯದಲ್ಲಿ 2 ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಶುಕ್ರವಾರ ರಾಹುಲ್ ಗಾಂಧಿ ಬಳ್ಳಾರಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಮತ್ತು ಸಂಜೆ 5 ಗಂಟೆಗೆ ಮಂಗಳೂರಿನಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
ರಾಹುಲ್ ಗಾಂಧಿ ತುಮಕೂರಿನಲ್ಲಿ ಈಗಾಗಲೇ ಒಮ್ಮೆ ಪ್ರಚಾರ ಮಾಡಿದ್ದಾರೆ. ತುಮಕೂರಿನಿಂದ ಮೈಸೂರಿನವರೆಗೆ ರೋಡ್ ಶೋ ನಡೆಸಿದ್ದಾರೆ. ನರೇಂದ್ರ ಮೋದಿ ರಾಜ್ಯದಲ್ಲಿ ದಾವಣಗೆರೆ, ಮಂಗಳೂರು, ಹುಬ್ಬಳ್ಳಿ, ಗುಲ್ಬರ್ಗ, ಬೆಳಗಾವಿ ಮತ್ತು ಬಿಜಾಪುರದಲ್ಲಿ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಿ ಒಂದು ಸುತ್ತಿನ ಪ್ರಚಾರವನ್ನು ನಡೆಸಿದ್ದಾರೆ. [ಬಿಜಾಪುರದಲ್ಲಿ ಮೋದಿ ಹೇಳಿದ್ದೇನು?]












Click it and Unblock the Notifications