NEET ಪ್ರಶ್ನೆಪತ್ರಿಕೆ ಸೋರಿಕೆ: ದೇಶದಲ್ಲಿ 152ಕ್ಕೂ ಹೆಚ್ಚು ಪೇಪರ್ ಲೀಕ್ ಪ್ರಕರಣ, ಕಾಂಗ್ರೆಸ್ ಗಂಭೀರ ಪ್ರಶ್ನೆ
NEET Paper Leak: ಭಾರತದಲ್ಲಿ ನೀಟ್ ಪರೀಕ್ಷೆಗೆ ಸಂಬಂಧಿಸಿದತೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ದೇಶದಾದ್ಯಂತ ನೀಟ್ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ. ದೇಶದಾದ್ಯಂತ 152ಕ್ಕೂ ಹೆಚ್ಚು ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾದ ಗಂಭೀರ ಪ್ರಕರಣಗಳು ವರದಿಯಾಗಿವೆ ಎನ್ನುವ ವಿಚಾರವು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.
ಈ ವಿಚಾರವಾಗಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ 2014ರಲ್ಲಿ ಅಧಿಕಾರಕ್ಕೆ ಬಂದ ನಂತರ ದೇಶದಾದ್ಯಂತ 152ಕ್ಕೂ ಹೆಚ್ಚು ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾದ ಗಂಭೀರ ಪ್ರಕರಣಗಳು ವರದಿಯಾಗಿವೆ. ಈ ಆತಂಕಕಾರಿ ಬೆಳವಣಿಗೆಯ ಕುರಿತು ಬೆಂಗಳೂರಿನ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ, ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಮತ್ತು ವೈಫಲ್ಯವನ್ನು ಪ್ರಶ್ನಿಸಿದೆ.

ಪ್ರಶ್ನೆಪತ್ರಿಕೆ ಸೋರಿಕೆ ಎಂದರೆ ಕೇವಲ ಪರೀಕ್ಷೆಯಲ್ಲಿನ ಅಕ್ರಮವಲ್ಲ; ಅದು ಲಕ್ಷಾಂತರ ವಿದ್ಯಾರ್ಥಿಗಳ ಪರಿಶ್ರಮ, ಕನಸು, ಭವಿಷ್ಯ ಮತ್ತು ಅವರ ಪೋಷಕರು,ಕುಟುಂಬಗಳ ನಿರೀಕ್ಷೆಗಳ ಮೇಲೆ ನಡೆಯುತ್ತಿರುವ ವ್ಯವಸ್ಥಿತ ದಾಳಿ. ವರ್ಷಗಟ್ಟಲೆ ಶ್ರಮಿಸಿ ಪರೀಕ್ಷೆಗೆ ಸಿದ್ಧರಾಗುವ ವಿದ್ಯಾರ್ಥಿಗಳಿಗೆ ನ್ಯಾಯಯುತ ಅವಕಾಶ ಒದಗಿಸಬೇಕಾದ ಸರ್ಕಾರವೇ, ಪರೀಕ್ಷಾ ವ್ಯವಸ್ಥೆಯ ಮೇಲಿನ ಅವರ ನಂಬಿಕೆ ಕುಸಿಯುವಂತೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ಬದಲು, ತನ್ನ ನಿರ್ಲಕ್ಷ್ಯ ಮತ್ತು ಅಸಮರ್ಥತೆಯಿಂದ ಅದನ್ನು ಬುಡಮೇಲು ಮಾಡುತ್ತಿದೆ. ನಿರಂತರವಾಗಿ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತಿದ್ದರೂ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವಿಲ್ಲ; ವಿದ್ಯಾರ್ಥಿಗಳಿಗೆ ಭರವಸೆ ನೀಡುವ ಮಾತಿಲ್ಲ; ಜವಾಬ್ದಾರಿ ಹೊರುವ ರಾಜಕೀಯ ಇಚ್ಛಾಶಕ್ತಿಯೂ ಕಾಣುತ್ತಿಲ್ಲ.
ಪ್ರಧಾನಮಂತ್ರಿಗಳು 'ಪರೀಕ್ಷಾ ಪೇ ಚರ್ಚಾ' ನಡೆಸುತ್ತಾರೆ. ಆದರೆ ಪರೀಕ್ಷೆಗಳ ಪಾವಿತ್ರ್ಯವೇ ಹಾಳಾಗುತ್ತಿರುವಾಗ, ವಿದ್ಯಾರ್ಥಿಗಳ ಭವಿಷ್ಯವೇ ಅತಂತ್ರವಾಗಿರುವಾಗ ಮೌನ ವಹಿಸುತ್ತಾರೆ. ಸ್ವತಃ ಫೇಕ್ ಡಿಗ್ರಿ ಇಟ್ಟುಕೊಂಡಿರುವ ವ್ಯಕ್ತಿಗೆ ಪರೀಕ್ಷೆಯ ಮಹತ್ವ ಹೇಗೆ ಗೊತ್ತಾಗಬೇಕು. ದೇಶದ ಯುವಜನರ ಕನಸುಗಳನ್ನು ರಕ್ಷಿಸಲಾಗದ ಸರ್ಕಾರಕ್ಕೆ, ಅವರ ಭವಿಷ್ಯದ ಕುರಿತು ಮಾತನಾಡುವ ನೈತಿಕ ಹಕ್ಕು ಇದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಕುರಿತು ಸುಪ್ರೀಂಕೋರ್ಟ್ ನ್ಯಾಯಾದೀಶರಿಂದ ಸ್ವತಂತ್ರ ಮತ್ತು ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಭದ್ರತೆ ಮತ್ತು ಉತ್ತರದಾಯಿತ್ವವನ್ನು ಖಚಿತಪಡಿಸಬೇಕು. ದೇಶದ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುವುದನ್ನು ಕೇಂದ್ರ ಸರ್ಕಾರ ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರು ಹೇಳಿದ್ದಾರೆ.


Click it and Unblock the Notifications
