ಕೇರಳದಲ್ಲಿ ನಿಪಾ ಹಾವಳಿ: ಕರ್ನಾಟಕ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ- ವಿವರ ತಿಳಿಯಿರಿ
ಬೆಂಗಳೂರು, ಸೆಪ್ಟೆಂಬರ್ 15: ಕೇರಳದಲ್ಲಿ ನಿಪಾ ವೈರಸ್ ಹಾವಳಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಸಚಿವಾಲಯವು ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಕೇರಳ ರಾಜ್ಯಕ್ಕೆ ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಸಲಹೆ ನೀಡಿದೆ. ಗಡಿ ಜಿಲ್ಲೆಗಳಲ್ಲಿ ತೀವ್ರ ನಿಗಾ ವಹಿಸುವಂತೆ ಪೊಲೀಸರಿಗೆ ತಿಳಿಸಿದೆ.

ನೆರೆಯ ಕೇರಳದಲ್ಲಿ ನಿಪಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಸಚಿವಾಲಯ ಗುರುವಾರ ಸುತ್ತೋಲೆ ಹೊರಡಿಸಿದ್ದು, ವೈರಸ್ ಪೀಡಿತ ಪ್ರದೇಶಗಳಿಗೆ ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದೆ.
ಕೇರಳದ ಗಡಿಯನ್ನು ಹಂಚಿಕೊಳ್ಳುವ ಜಿಲ್ಲೆಗಳಾದ ಕೊಡಗು, ದಕ್ಷಿಣ ಕನ್ನಡ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ನಿಗಾವನ್ನು ತೀವ್ರಗೊಳಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
'ಕೇರಳ ರಾಜ್ಯದ ಕಲ್ಲಿಕೋಟೆ ಜಿಲ್ಲೆಯಲ್ಲಿ ಸೋಂಕಿನಿಂದ 2 ಸಾವುಗಳಾಗಿವೆ. 4 ಪ್ರಕರಣಗಳು ಸಕ್ರಿಯಾವಾಗಿವೆ. ನಿಪಾ ಪ್ರಕರಣಗಳ ವರದಿಯನ್ನು ಗಮನದಲ್ಲಿಟ್ಟುಕೊಂಡು, ಸೋಂಕು ಹರಡುವುದನ್ನು ತಡೆಯಲು ಕೇರಳ ರಾಜ್ಯದ ಗಡಿಯ ಜಿಲ್ಲೆಗಳಲ್ಲಿ ಕಣ್ಗಾವಲು ಚಟುವಟಿಕೆಗಳನ್ನು ತೀವ್ರಗೊಳಿಸಬೇಕಾಗಿದೆ' ಎಂದು ಸಚಿವಾಲಯ ಸುತ್ತೋಲೆಯಲ್ಲಿ ತಿಳಿಸಿದೆ.
ಸೋಂಕು ಹರಡುವುದನ್ನು ತಡೆಗಟ್ಟಲು ಮತ್ತು ಕಣ್ಗಾವಲು ಚಟುವಟಿಕೆಗಳನ್ನು ಕೈಗೊಳ್ಳಲು ಇಲಾಖೆಯು ರಾಜ್ಯಾದ್ಯಂತ ಆರೋಗ್ಯ ಅಧಿಕಾರಿಗಳಿಗೆ ಮಾರ್ಗಸೂಚಿಗಳನ್ನು ನೀಡಿದೆ.
ವಿಶೇಷವಾಗಿ ಗಡಿ ಜಿಲ್ಲೆಗಳಲ್ಲಿ ಜ್ವರ ಕಣ್ಗಾವಲುಗಾಗಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸುವುದು ಎಂದು ಹೇಳಿದೆ.
ರೋಗದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮತ್ತು ಅನಗತ್ಯ ಭಯವನ್ನು ತಪ್ಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕೆಂದು ಆರೋಗ್ಯ ಇಲಾಖೆ ತಿಳಿಸಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗೆ ತರಬೇತಿ ನೀಡುಬೇಕೆಂದು ಸೂಚಿಸಿದೆ.
ನಿಪಾ ಹೊಂದಿರುವ ಶಂಕಿತ ರೋಗಿಗಳನ್ನು ಕ್ವಾರಂಟೈನ್ ಮಾಡಲು ಜಿಲ್ಲಾ ಆಸ್ಪತ್ರೆಗಳಲ್ಲಿ ಕನಿಷ್ಠ ಎರಡು ಹಾಸಿಗೆಗಳನ್ನು ಕಾಯ್ದಿರಿಸಬೇಕೆಂದು ಹೇಳಿದೆ.
ಸಾರ್ವಜನಿಕರು ಹಾಗೂ ಆರೋಗ್ಯ ಸಿಬ್ಬಂದಿ ಕೇರಳಕ್ಕೆ ಅನಗತ್ಯ ಪ್ರಯಾಣ ಮಾಡದಂತೆ ಆರೋಗ್ಯ ಇಲಾಖೆ ಸೂಚಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್
ಕೇರಳದಲ್ಲಿ ನಿಪಾ ಪ್ರಕರಣಗಳು ದೃಢಪಟ್ಟ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಅಲರ್ಟ್ ಮಾಡಲಾಗಿದೆ. ಗಡಿಯಲ್ಲಿ ಚೆಕ್ ಪೋಸ್ಟ್ ತೆರೆಯಲು ಆರೋಗ್ಯ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ವೈರಸ್ ಹರಡುವುದನ್ನು ತಡೆಯಲು ಜಿಲ್ಲಾಡಳಿತವು ಇತರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ.












Click it and Unblock the Notifications