ಮಹಾರಾಷ್ಟ್ರ, ಕೇರಳದಿಂದ ಬಸ್ ಸಂಚಾರ; ಸಾರಿಗೆ ಸಚಿವರ ಸ್ಪಷ್ಟನೆ
ಬೆಂಗಳೂರು, ಫೆಬ್ರವರಿ 26: ನೆರೆ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅಂತರರಾಜ್ಯ ಬಸ್ ಸಂಚಾರದ (ಮಹಾರಾಷ್ಟ್ರ, ಕೇರಳ) ಕುರಿತು ರಾಜ್ಯ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ ಪ್ರವೇಶಿಸುವ ಯಾವುದೇ ಬಸ್‌ಗಳನ್ನು ತಡೆಯುವಂತಿಲ್ಲ. ಆದರೆ ಕರ್ನಾಟಕಕ್ಕೆ ಬರುವ ಪ್ರಯಾಣಿಕರು ತಮ್ಮೊಂದಿಗೆ ಕೊರೊನಾ ಪರೀಕ್ಷಾ ನೆಗೆಟಿವ್ ವರದಿ ತರುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಪ್ರಯಾಣಿಕರು ಕೊರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದಿದ್ದಾರೆ.
ಮಹಾರಾಷ್ಟ್ರ, ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾದ ಹಿನ್ನೆಲೆ ಈಚೆಗೆ ಕರ್ನಾಟಕ-ಕೇರಳ ಗಡಿ ಬಂದ್ ಮಾಡಿದ್ದ ಸಂಗತಿ ಆಕ್ಷೇಪಕ್ಕೆ ಕಾರಣವಾಗಿತ್ತು. ಗಡಿಗಳನ್ನು ಬಂದ್ ಮಾಡಿ, ವಾಹನಗಳಿಗೆ ನಿರ್ಬಂಧ ಹೇರಿರುವುದಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಕ್ಷೇಪ ವ್ಯಕ್ತಪಡಿಸಿದ್ದರು. ಕರ್ನಾಟಕ ಸರ್ಕಾರ ಕೇಂದ್ರ ಗೃಹ ಇಲಾಖೆ ಮಾರ್ಗಸೂಚಿ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿದ್ದರು.

ಕಾಸರಗೋಡು ಮೂಲದ ವಕೀಲ ಬಿ. ಸುಬ್ಬಯ್ಯ ಈ ಕುರಿತು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ಪೀಠ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು.












Click it and Unblock the Notifications