ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನ ತುಳಿಯುವ ಪ್ರಶ್ನೆಯಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ರಾಜ್ಯ ಸರ್ಕಾರದ ಸಮೀಕ್ಷೆ ಬಗ್ಗೆ ಗಂಭೀರ ಆರೋಪ ಮಾಡಿರುವ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂದಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ಸೋಮಣ್ಣ ಅವರ ಆರೋಪ ಬಾಲಿಶವಾದುದ್ದು. ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ ಎಂದು ಕೊಪ್ಪಳದಲ್ಲಿ ತಿರುಗೇಟು ನೀಡಿದ್ದಾರೆ.
ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸಮೀಕ್ಷೆ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಲಿಂಗಾಯತ ಧರ್ಮದ ವಿಷಯದಲ್ಲಿ ಜನರ ನಿಲುವೇ ನನ್ನ ನಿಲುವು ಎಂದಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಶೇ 97ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಇದು ಒಳ್ಳೆಯ ಬೆಳವಣಿಗೆ. ಸಮಾಜದಲ್ಲಿ ಬದಲಾವಣೆಯನ್ನು ವಿರೋಧಿಸುವವರು ಸಮೀಕ್ಷೆಯ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಲಿಂಗಾಯತ ಧರ್ಮದ ವಿಷಯದಲ್ಲಿ ಜನರು ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ತಿಳಿಸಿದಂತೆ ಸಮೀಕ್ಷಾಗಾರರು ಧರ್ಮವನ್ನು ನಮೂದಿಸಿಕೊಳ್ಳುತ್ತಾರೆ. ಈ ಬಗ್ಗೆ ಜನರ ನಿಲುವೇ ನನ್ನ ನಿಲುವು ಎಂದಿದ್ದಾರೆ.
ಕೆಮ್ಮಿನ ಔಷಧಗಳ ಮೇಲೆ ನಿಗಾ
ಕೆಮ್ಮಿನ ಔಷಧಗಳ ಮೇಲೆ ನಿಗಾ ಇಟ್ಟಿದ್ದೇವೆ. ವಿವಿಧ ರಾಜ್ಯದಲ್ಲಿ ಕೆಮ್ಮಿನ ಔಷಧಿಯಿಂದ ಮಕ್ಕಳು ಅಸುನೀಗುತ್ತಿದ್ದು, ಈ ಬಗ್ಗೆ ಗಮನಹರಿಸುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಈಗಾಗಲೇ ರಾಜ್ಯದಲ್ಲಿ ಲಭ್ಯವಿರುವ ಕೆಮ್ಮಿನ ಔಷಧಗಳ ಪರೀಕ್ಷೆಯನ್ನು ಇಲಾಖೆ ನಡೆಸಿದ್ದು, ಅಪಾಯಕಾರಿ ಅಂಶ ಪತ್ತೆಯಾದರೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ. ಬಲ್ಡೋಟಾ ಕಾರ್ಖಾನೆ ಯೋಜನೆ ವಿಷಯ ನ್ಯಾಯಾಲಯದಲ್ಲಿದೆ. ಬಲ್ಡೋಟಾ ಕಾರ್ಖಾನೆ ಯೋಜನೆ ಕುರಿತ ವಿಚಾರ ನ್ಯಾಯಾಲಯದಲ್ಲಿ ಇದ್ದು, ತೀರ್ಪಿನ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದೂ ಹೇಳಿದ್ದಾರೆ.
ಇಂದಿರಾ ಕ್ಯಾಂಟೀನ್ ಉದ್ಘಾಟನೆ
ಕೊಪ್ಪಳದಲ್ಲಿ ಇಂದು ನೂತನ ಇಂದಿರಾ ಕ್ಯಾಂಟೀನ್ ಅನ್ನು ಸಾರ್ವಜನಿಕರ ಬಳಕೆ ಅರ್ಪಿಸಿ, ಬಗೆಬಗೆಯ ತಿಂಡಿ ತಿನಿಸುಗಳನ್ನು ಸಿಎಂ ಸವಿದಿದ್ದಾರೆ. ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಬಡವರು, ವಾಹನ ಚಾಲಕರು, ರೋಗಿಗಳು, ಕೂಲಿ ಕಾರ್ಮಿಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶದಿಂದ ನಾನು ಜಾರಿಗೆ ಕೊಟ್ಟ ಇಂದಿರಾ ಕ್ಯಾಂಟೀನ್ ಯೋಜನೆ ಈವರೆಗೆ ಕೋಟ್ಯಂತರ ಜನರ ಹಸಿವು ನೀಗಿಸಿದೆ ಎಂಬುದೇ ನನಗೆ ಹೆಮ್ಮೆಯ ಸಂಗತಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.












Click it and Unblock the Notifications