Breaking News: ವಾಲ್ಮೀಕಿ ನಿಗಮದ ಹಗರಣ, ಸಿಬಿಐ ತನಿಖೆ ಇಲ್ಲ
ಬೆಂಗಳೂರು, ನವೆಂಬರ್ 13: ಕರ್ನಾಟಕದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಈ ಕುರಿತು ಯೂನಿಯನ್ ಬ್ಯಾಂಕ್ ಸಲ್ಲಿಕೆ ಮಾಡಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ನಡೆಸಿ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಬುಧವಾರ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ತೀರ್ಪು ಪ್ರಕಟಿಸಿದೆ.

ಸಿಬಿಐ ತನಿಖೆಗೆ ಕೋರಿ ಯೂನಿಯನ್ ಬ್ಯಾಂಕ್ ಸಲ್ಲಿಕೆ ಮಾಡಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈಗಾಗಲೇ ಈ ಪ್ರಕರಣದ ಕುರಿತು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ 94.73 ಕೋಟಿ ಹಣ ಅಕ್ರಮ ವರ್ಗಾವಣೆ ನಡೆದಿದೆ ಎಂಬುದು ಆರೋಪವಾಗಿದೆ. ನಿಗಮದ ಅಕ್ರಮದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದ ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಸಚಿವ ಬಿ. ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮಾಜಿ ಸಚಿವ ಬಿ. ನಾಗೇಂದ್ರ ಬಂಧಿಸಿತ್ತು. ಸದ್ಯ ಜಾಮೀನು ಪಡೆದು ಅವರು ಬಿಡುಗಡೆಗೊಂಡಿದ್ದಾರೆ. ಜಾರಿ ನಿರ್ದೇಶನಾಲಯ ಹಗರಣದ ತನಿಖೆ ಕುರಿತು ಜಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಇದುವರೆಗೂ 89.62 ಕೋಟಿ ಹಣವನ್ನು ಪತ್ತೆ ಹಚ್ಚಲಾಗಿದೆ ಎಂದು ಹೇಳಿದೆ.
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಯೂನಿಯನ್ ಬ್ಯಾಂಕ್ ಖಾತೆಯಿಂದ ಹಣ ಬಿಡುಗಡೆಯಾಗಿತ್ತು. ಆದ್ದರಿಂದ ಯೂನಿಯನ್ ಬ್ಯಾಂಕ್ ಈ ಕುರಿತು ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿತ್ತು.
ಬ್ಯಾಂಕ್ ಖಾತೆಯಿಂದ ವರ್ಗಾವಣೆಗೊಂಡ ಹಣವನ್ನು ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ವಿವಿಧ ಬ್ಯಾಂಕ್ಗಳ ನಕಲಿ ಖಾತೆಗಳಿಗೆ ವರ್ಗವಣೆ ಮಾಡಲಾಗಿದೆ ಎಂದು ಇಡಿ ಹೇಳಿದೆ. ಬೆಂಗಳೂರು ನಗರದ ಎಂ. ಜಿ. ರೋಡ್ನಲ್ಲಿರುವ ಯೂನಿಯನ್ ಬ್ಯಾಂಕ್ನಿಂದ ವರ್ಗಾವಣೆಯಾಗಿದ್ದ ಹಣದಲ್ಲಿ 43.33 ಕೋಟಿ ಹಣವನ್ನು ರಾಜ್ಯದ ಗಂಗಾ ಕಲ್ಯಾಣ ಯೋಜನೆಗೆ ಮೀಸಲಿಡಲಾಗಿತ್ತು.
ಆದರೆ ಸರ್ಕಾರದ ನಿರ್ದೇಶನಗಳನ್ನು ಗಾಳಿಗೆ ತೂರಿ ವಿವಿಧ ಖಾತೆಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿ ನಗದಾಗಿ ಪರಿವರ್ತಿಸಿಕೊಂಡಿದ್ದರು ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಒಂದೇ ಪ್ರಕರಣದಲ್ಲಿ ಎರಡು ಕೇಂದ್ರಿಯ ತನಿಖಾ ಸಂಸ್ಥೆಗಳ ತನಿಖೆಗೆ ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.
ಈಗ ಸಿಬಿಐ ತನಿಖೆಗೆ ಹೈಕೋರ್ಟ್ ಅನುಮತಿ ನೀಡದ ಕಾರಣ ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ಇತರ ಆರೋಪಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಕೇಳಿ ಬಂದ ಬಳಿಕ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈಗ ಅವರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳಿವು ಕೊಟ್ಟಿದ್ದಾರೆ.












Click it and Unblock the Notifications