Breaking: KPSC ಆ.27ರ ಪರೀಕ್ಷೆ ವೇಳಾಪಟ್ಟಿ, ವದಂತಿ ನಂಬಬೇಡಿ
ಬೆಂಗಳೂರು, ಆಗಸ್ಟ್ 26: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಆಗಸ್ಟ್ 27ರ ಮಂಗಳವಾರ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಗಳನ್ನು ನಡೆಸಲಿದೆ. ಈ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸೋಮವಾರ ಸ್ಪಷ್ಟಪಡಿಸಲಾಗಿದೆ. ಪತ್ರಿಕೆ 1 & 2ರ ಪರೀಕ್ಷೆಗಳು ಬೆಳಗ್ಗೆ ಮತ್ತು ಮಧ್ಯಾಹ್ನ ನಿಗದಿಯಂತೆ ನಡೆಯಲಿದೆ. 2,10,910 ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಅರ್ಹರು.
ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಮುಂದೂಡಬೇಕು ಎಂಬ ಒತ್ತಾಯವಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರೀಕ್ಷೆಯನ್ನು ಮುಂದೂಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಈಗ ವೇಳಾಪಟ್ಟಿಯಲ್ಲಿಯೂ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಈ ಕುರಿತು ಕೆಪಿಎಸ್‌ಸಿ ಕಾರ್ಯದರ್ಶಿಗಳು ಸೋಮವಾರ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. 'ಸದರಿ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲವಾದ್ದರಿಂದ ಅಭ್ಯರ್ಥಿಗಳು ಸಾಮಾಜಿಕ ಜಾಲತಾಣ ಹಾಗೂ ಇತರೆ ಯಾವುದೇ ತಪ್ಪು ಮಾಹಿತಿಗಳಿಗೆ ಮತ್ತು ಉಹಾಪೋಹಗಳಿಗೆ ಗೊಂದಲಕ್ಕೀಡಾಗದೇ ಆಯೋಗದ ವೆಬ್‌ಸೈಟ್ http://kpsc.kar.nic.inನಿಂದ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು ತಮಗೆ ಹಂಚಿಕೆಯಾಗಿರುವ ಪರೀಕ್ಷಾ ಉಪಕೇಂದ್ರಗಳಲ್ಲಿ ಪರೀಕ್ಷೆಗೆ ಹಾಜರಾಗುವಂತೆ ಅಭ್ಯರ್ಥಿಗಳ ಮಾಹಿತಿಗಾಗಿ ತಿಳಿಸಿದೆ' ಎಂದು ಹೇಳಿದ್ದಾರೆ.
ಆಯೋಗದ ಪ್ರಕಟಣೆಯಲ್ಲಿ, 'ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ 'ಎ' ಮತ್ತು 'ಬಿ' ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ 27-08-2024ರಂದು ನಡೆಸುತ್ತಿದ್ದು, ಸದರಿ ಪರೀಕ್ಷೆಯ ವೇಳಾಪಟ್ಟಿಯು ಕೆಳಗಿನಂತಿರುತ್ತದೆ.
ಪರೀಕ್ಷಾ ದಿನಾಂಕ 27-08-2024 (ಮಂಗಳವಾರ). ಸಮಯ ಬೆಳಗ್ಗೆ 10.00 ರಿಂದ 12.00 ಗಂಟೆಯವರೆಗೆ ಪತ್ರಿಕೆ-1, ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಪತ್ರಿಕೆ-2.
ಅಭ್ಯರ್ಥಿಗಳು ಪರೀಕ್ಷೆಯ ಕೇಂದ್ರಗಳನ್ನು ನೋಡಿಕೊಂಡು ಮುಂಚಿತವಾಗಿಯೇ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು ಎಂದು ಈಗಾಗಲೇ ಮಾಹಿತಿ ನೀಡಲಾಗಿದೆ.
384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಬೇಕು ಎಂದು ಶನಿವಾರದಿಂದ ಬೆಂಗಳೂರು ನಗರದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಆದರೆ ಪರೀಕ್ಷೆಯನ್ನು ಮುಂದೂಡುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಈಗ ವೇಳಾಪಟ್ಟಿಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳು, ವದಂತಿ ಹಬ್ಬುತ್ತಿರುವ ಹಿನ್ನಲೆಯಲ್ಲಿ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲ ಎಂದು ಕೆಪಿಎಸ್‌ಸಿ ಸ್ಪಷ್ಟನೆಯನ್ನು ನೀಡಿದೆ.
ಆಗಸ್ಟ್ 27ರ ಮಂಗಳವಾರ ನಿಗದಿಯಾಗಿರುವ ಪರೀಕ್ಷೆಯನ್ನು ಮುಂದೂಡಬೇಕು ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ, ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಅನೇಕರು ಸರ್ಕಾರವನ್ನು ಆಗ್ರಹಿಸಿದ್ದರು. ಶನಿವಾರ ಬೆಂಗಳೂರಿನಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, "ಕೆಲವರು ಪರೀಕ್ಷೆ ಮುಂದೂಡಬೇಕೆಂದು ಹೇಳುತ್ತಿದ್ದಾರೆ. ಆದರೆ ನಾವು ಈಗ ಪರೀಕ್ಷೆಯನ್ನು ಮುಂದೂಡುವುದಿಲ್ಲ" ಎಂದು ಹೇಳಿದ್ದರು.
ಪರೀಕ್ಷೆಯು ಅತಿ ಸೂಕ್ಷ್ಮ ವಿಚಾರವಾಗಿದೆ. ಆದ್ದರಿಂದ ಕೆಪಿಎಸ್‌ಸಿ ಪರೀಕ್ಷೆಗೆ ಅಗತ್ಯ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಅಕ್ರಮಗಳಿಗೆ ಅವಕಾಶ ಮಾಡಿಕೊಡದಂತೆ ಎಚ್ಚರಿಕೆಯಿಂದ, ಪ್ರಾಮಾಣಿಕವಾಗಿ ಪರೀಕ್ಷಾ ಕಾರ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.
ಜಿಲ್ಲಾಧಿಕಾರಿಗಳು ಪರೀಕ್ಷೆಯ ಕುರಿತು ಪೂರ್ವ ಸಿದ್ಧತಾ ಸಭೆಗಳನ್ನು ನಡೆಸಿದ್ದಾರೆ. ಪ್ರಶ್ನೆ ಪತ್ರಿಕೆಯನ್ನು ಬಿಗಿ ಭದ್ರತೆಯಲ್ಲಿ ತಂದು, ಪರೀಕ್ಷಾ ಕೇಂದ್ರಗಳಿಗೆ ಹಂಚಿಕೆ ಮಾಡಲಾಗುತ್ತದೆ. ಯಾವುದೇ ಲೋಪದೋಷಗಳು ಬಾರದಂತೆ ಪರೀಕ್ಷೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.












Click it and Unblock the Notifications