ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ನೀತಿ ಸಂಹಿತೆ ಅನ್ವಯವಿಲ್ಲ
ಬೆಂಗಳೂರು, ಮಾರ್ಚ್ 27 : ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ನೀತಿ ಸಂಹಿತೆ ಇಂದಿನಿಂದಲೇ ಜಾರಿಗೆ ಬಂದಿದೆ. ಆದರೆ, ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಲು ನೀತಿ ಸಂಹಿತೆ ಅಡ್ಡ ಬರುವುದಿಲ್ಲ.
ಕೇಂದ್ರ ಚುನಾವಣಾ ಆಯುಕ್ತ ಓಂಪ್ರಕಾಶ್ ರಾವತ್ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. 'ನ್ಯಾಯಾಲಯ ನೀಡಿದ ತೀರ್ಪು ಮತ್ತು ನಿರ್ದೇಶನಗಳಿಗೆ ಅನುಗುಣವಾಗಿ ಸರ್ಕಾರ ತೆಗೆದುಕೊಳ್ಳಬೇಕಾದ ಕ್ರಮಗಳಿಗೆ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.
ಫೆ.16ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಅಮಿತಾವ್ ರಾಯ್, ಎ.ಎಂ.ಖನ್ವಿಲ್ಕರ್ ಅವರನ್ನು ಒಳಗೊಂಡ ಪೀಠ ಕಾವೇರಿ ವಿವಾದದ ಅಂತಿಮ ತೀರ್ಪು ನೀಡಿದೆ. ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಮಾರ್ಚ್ 29ರೊಳಗೆ ಕೇಂದ್ರ ಸರ್ಕಾರ ಮಂಡಳಿ ರಚನೆ ಮಾಡಬೇಕು ಅಥವ ಈ ಕುರಿತು ಸುಪ್ರೀಂಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಬೇಕು. ಈಗ ಕರ್ನಾಟಕದಲ್ಲಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಆದ್ದರಿಂದ, ನಿರ್ವಹಣಾ ಮಂಡಳಿ ರಚನೆ ಮಾಡಬಹುದೇ? ಎಂಬ ಪ್ರಶ್ನೆ ಎದ್ದಿತ್ತು.
ಕರ್ನಾಟಕ 284.75 ಟಿಎಂಸಿ ನೀರನ್ನು ಬಳಸಿಕೊಳ್ಳಬಹುದು. ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸಲು 4.75 ಟಿಎಂಸಿ ನೀರನ್ನು ಬಳಸಿಕೊಳ್ಳಬಹುದು ತೀರ್ಪಿನಲ್ಲಿ ತಿಳಿಸಿತ್ತು. ಆದರೆ, ಕರ್ನಾಟಕ ಸರ್ಕಾರ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಲು ವಿರೋಧ ವ್ಯಕ್ತಪಡಿಸುತ್ತಿದೆ.












Click it and Unblock the Notifications