Prajwal Revanna Case: ಎಸ್‌ಐಟಿ ತನಿಖೆಯಲ್ಲಿ ಸರ್ಕಾರ ಮಧ್ಯ ಪ್ರವೇಶ ಮಾಡಲ್ಲ ಎಂದ ಸಿಎಂ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪಗಳ ಬಗ್ಗೆ ಎಸ್‌ಐಟಿ ನಡೆಸುತ್ತಿರುವ ತನಿಖೆಯಲ್ಲಿ ಸರ್ಕಾರ ಯಾವುದೇ ಕಾರಣಕ್ಕೂ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಎಸ್‌ಐಟಿ ತನಿಖೆಯಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುತ್ತಿದೆ ಎಂದು ವಿಪಕ್ಷಗಳ ಆರೋಪದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, "ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿದ್ದು, ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ ಮೊನೆಯಷ್ಟೂ ಮಧ್ಯಪ್ರವೇಶ ಮಾಡುವುದಿಲ್ಲ." ಎಂದು ಸ್ಪಷ್ಟನೆ ನೀಡಿದ್ದಾರೆ.
ಎಸ್ ಐಟಿ ಎನ್ನುವುದು ರಿಮೋಟ್ ಕಂಟ್ರೋಲ್ ಮೇಲೆ ಕೆಲಸ ಮಾಡುತ್ತಿದೆ. ಅದು ಸರ್ಕಾರದ ರಬ್ಬರ್ ಸ್ಟಾಂಪ್ ಎಂದು ಬಿಜೆಪಿ ನಾಯಕ ನಾಯಕ ದೇವರಾಜೇಗೌಡರ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ ಎಂದಿರುವ ಸಿದ್ದರಾಮಯ್ಯ, ಇದು ಅಪರಾಧಿಗಳನ್ನು ರಕ್ಷಿಸುವ ದುರುದ್ದೇಶದಿಂದ ತನಿಖೆಯ ಹಾದಿ ತಪ್ಪಿಸಲು ಮಾಡಿರುವ ಕುತಂತ್ರವಾಗಿದೆ ಎಂದು ಟೀಕಿಸಿದ್ದಾರೆ.
ಎಸ್‌ಐಟಿ ಸಂಪೂರ್ಣವಾಗಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಈ ಉದ್ದೇಶದಿಂದಲೇ ಆಯ್ದ ದಕ್ಷ ಅಧಿಕಾರಿಗಳನ್ನು ಸೇರಿಸಿಕೊಂಡು ಎಸ್‌ಐಟಿ ರಚಿಸಲಾಗಿದೆ ಎಂದು ಹೇಳಿದರು.
ಈಗ ಗೋಳಾಡಿದರೆ ಏನು ಪ್ರಯೋಜನ?
ಪ್ರಜ್ವಲ್ ರೇವಣ್ಣ ಪ್ರಕರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಹಾಳಾಗುತ್ತಿದೆ ಎಂದು ಬಿಜೆಪಿ ನಾಯಕರು ಈಗ ಗೋಳಾಡುವುದರಿಂದ ಏನೂ ಪ್ರಯೋಜನವಾಗದು, ಜೆಡಿ(ಎಸ್) ಜೊತೆ ಮೈತ್ರಿ ಮಾಡಿಕೊಡುವಾಗಲೇ ಇದನ್ನು ಯೋಚನೆ ಮಾಡಬೇಕಾಗಿತ್ತು ಎಂದು ಹೇಳಿದ್ದಾರೆ.
ಎಸ್‌ಐಟಿ ತನಿಖೆಯ ಯಶಸ್ಸು ಈಗ ಸಂಪೂರ್ಣವಾಗಿ ಕೇಂದ್ರ ಸರ್ಕಾರ ನೀಡುವ ಸಹಕಾರವನ್ನು ಅವಲಂಬಿಸಿದೆ. ವಿದೇಶದಲ್ಲಿದ್ದಾನೆ ಎಂದು ಹೇಳಲಾದ ಆರೋಪಿ ಪ್ರಜ್ವಲ್ ರೇವಣ್ಣನವರನ್ನು ಭಾರತಕ್ಕೆ ಕರೆತರಲು ಸಹಕಾರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ. ಜೆಡಿಎಸ್ ಜೊತೆ ಈಗಲೂ ರಾಜಕೀಯ ಮೈತ್ರಿ ಹೊಂದಿರುವ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ರಾಷ್ಟ್ರ ಮಟ್ಟದಲ್ಲಿ ಕೂಡ ಸದ್ದು ಮಾಡುತ್ತಿದ್ದು, ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್ ನಾಯಕರೇ ಪೆನ್‌ಡ್ರೈವ್ ಹಂಚಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.












Click it and Unblock the Notifications