ರಾಜ್ಯದಲ್ಲಿ ನೈತಿಕ ಪೊಲೀಸ್‌ಗಿರಿ ನಡೆಯುವಂತಿಲ್ಲ: ಐಪಿಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು, ಮೇ. 23: ಮಂಗಳವಾರ ಸಂಜೆ ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಪ್ರಮುಖ ಸಭೆ ನಡೆಸಿದ್ದಾರೆ. ಸಮಾಜದಲ್ಲಿ ಸಾಮರಸ್ಯ ಕದಡುವ ಗೂಂಡಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ನೈತಿಕ ಪೊಲೀಸ್‌ಗಿರಿಯನ್ನು ಪ್ರೋತ್ಸಾಹಿಸುವುದಿಲ್ಲ ಎಂದು ಘೋಷಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಸಮಸ್ಯೆಗೆ ಕಾರಣವಾಗುವ ತಪ್ಪು ಮಾಹಿತಿ ಹರಡುವ ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳ ಮೇಲೆ ನಿಗಾ ಇಡುವಂತೆಯೂ ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಕಚೇರಿಯ ಪ್ರಕಾರ, ಬೆಂಗಳೂರಿನ ಟ್ರಾಫಿಕ್ ಅವ್ಯವಸ್ಥೆಯ ಬಗ್ಗೆ ಚರ್ಚಿಸಲು ಮತ್ತು ಅದಕ್ಕೆ ಪರಿಹಾರವನ್ನು ಕಂಡುಹಿಡಿಯಲು ಪ್ರತ್ಯೇಕ ಸಭೆ ನಡೆಸಲಾಗುತ್ತದೆ.

ಅಧಿಕಾರಿಗಳ ಜೊತೆಗೆ ಸಭೆ ಬಳಿಕ ಕರ್ನಾಟಕ ಸಿಎಂಒದ ಟ್ವೀಟ್‌ನಲ್ಲಿ, "ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಅಧಿಕಾರಿಗಳು ಕೆಲಸ ಮಾಡಬೇಕು, ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಲಾಗುವುದು, ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು" ಎಂದಿದೆ.
ಮುಂದುವರೆದು "ಪೊಲೀಸ್ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಪೊಲೀಸ್ ಠಾಣೆಗೆ ಸಮಸ್ಯೆಗಳ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ಎಂದು ಟ್ವೀಟ್ ಮಾಡಲಾಗಿದೆ.

"ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್‌ಗಳ ಚಟುವಟಿಕೆಗಳು, ಡ್ರಗ್ ಮಾಫಿಯಾವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು. ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್‌ಗಿರಿ ನೀಡುತ್ತೇವೆ, ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳುತ್ತೇವೆ" ಎಂದು ತಿಳಿಸಿದೆ.
ಇನ್ನು, ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂಗಾರು ಮಳೆಗೆ ಸಜ್ಜಾಗುವಂತೆ ಹಾಗೂ ನಾಗರಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚಿಸಿದ್ದಾರೆ. "ರಾಜ್ಯದ ಕೆಲವು ಭಾಗದಲ್ಲಿ ಮಳೆ, ಬಿತ್ತನೆ, ಜೂನ್ ನಲ್ಲಿ ಮುಂಗಾರು ಪ್ರಾರಂಭವಾಗುತ್ತದೆ. ಏಪ್ರಿಲ್ ತಿಂಗಳಿನಲ್ಲಿಯೇ ಪ್ರಿ-ಮಾನ್ಸೂನ್ ಮಳೆ ಪ್ರಾರಂಭವಾಗಿದೆ. ಭಾರಿ ಮಳೆ, ಗಾಳಿಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಪ್ರಾಣ ಕಳೆದುಕೊಂಡಿದ್ದಾರೆ, ಅನಾಹುತಗಳಾಗಿವೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು" ಎಂದಿದ್ದಾರೆ.












Click it and Unblock the Notifications